ಕಾರು ಪಲ್ಟಿಯಾಗಿ ಮಗು ಸಾವು

IMG-20240216-WA0213
Published on

ಆಲೂರು: ತಾಲೂಕಿನ ಮಾವನೂರು ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶುಕ್ರವಾರ ಕಾರು ಪಲ್ಟಿಯಾಗಿ ಎರಡೂವರೆ ವರ್ಷದ ಮಗು ಮೃತಪಟ್ಟು ನಾಲ್ವರು ಗಾಯಗೊಂಡಿದ್ದಾರೆ.

ಬೆಂಗಳೂರಿನ ಪರಮ ಚಕ್ರವರ್ತಿ(2.5 ವರ್ಷ) ಮೃತ ಮಗು. ತಂದೆ ಸುಧಾಕರ(60), ತಾಯಿ ಕುಮಾರಿ (55), ಸಂಬಂಧಿಕರಾದ ದೀಪಾ (30), ಲವಿಕಾ (9) ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾ ಕೇಂದ್ರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಗು ಸಹಿತ ಒಂದೇ ಕುಟುಂಬದ ಐವರು ಕಾರಿನಲ್ಲಿ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ ದೇವರ ದರ್ಶನ ಮುಗಿಸಿಕೊಂಡು ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯ 75 ರಲ್ಲಿ ಕಾಮಗಾರಿ ನಡೆಯುತ್ತಿದೆ. ಆದರೆ ಹೆದ್ದಾರಿಯಲ್ಲಿ ಯಾವುದೇ ಸೂಚನಾ ಫಲಕಗಳು ಇಲ್ಲದ ಕಾರಣ ಅಪಘಾತ ಸಂಭವಿಸಿದೆ ಎಂದು ಸ್ಥಳೀಯರು ದೂರಿದ್ದಾರೆ. ಅಪಘಾತದಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಿದರು. ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net