

ಗುಂಡ್ಲುಪೇಟೆ: ಮಕ್ಕಳನ್ನು ಕಳ್ಳತನ ಮಾಡಿ ಭಿಕ್ಷಾಟನೆಗೆ ದೂಡುವ ಜಾಲ ಸಕ್ರಿಯವಾಗಿದ್ದು ಸಾರ್ವಜನಿಕರು ಇದರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ತಳವಾರ್ ಸಲಹೆ ನೀಡಿದರು.
ಶುಕ್ರವಾರ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ಮಕ್ಕಳ ಮೇಲೆ ದೌರ್ಜನ್ಯ ತಡೆ ಕಾನೂನುಗಳು, ಗರ್ಭಿಣಿ, ಬಾಣಂತಿ ಮತ್ತು ಮಕ್ಕಳ ಆರೋಗ್ಯದ ಕುರಿತ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
6 ರಿಂದ 18 ವರ್ಷದ ಒಳಗಿನ ಮಕ್ಕಳನ್ನು ಅಪಹರಿಸಿ ಅಂಗವಿಕಲರನ್ನಾಗಿಸಿ ಭಿಕ್ಷಾಟನೆಗೆ ಇಳಿಸಿ ಅವರಿಂದ ದುಷ್ಟರು ಹಣ ಸಂಪಾದಿಸುತ್ತಿದ್ದಾರೆ. ಇದನ್ನು ತಡೆಗಟ್ಟಲು ಸರ್ಕಾರ ಕಾನೂನುಗಳನ್ನು ರೂಪಿಸಿದ್ದು ಈ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುತ್ತದೆ ಎಂದು ಹೇಳಿದರು.
ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಎಂ.ಟಿ.ದೀಪು, ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಆರ್.ಬಿ.ಗಿರೀಶ್, ತಹಸೀಲ್ದಾರ್ ಎಂ.ಎಸ್.ತನ್ಮಯಿ, ಬಾಲನ್ಯಾಯ ಮಂಡಲಿಯ ಸದಸ್ಯೆ ಸರಸ್ವತಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮೋಹನ್ ಕುಮಾರ್, ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಸಬ್ ಇನ್ಸ್‌ಪೆಕ್ಟರ್ ಸಾಹೇಬಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ.ಅಲೀಂ ಪಾಶಾ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ ಹಾಗೂ ಇತರರು ಇದ್ದರು.