

ಬೆಂಗಳೂರು ಗ್ರಾಮಾಂತರ: ಬಾಲಕಾರ್ಮಿಕರನ್ನು ದುಡಿಮೆಗೆ ಬಳಸಿಕೊಳ್ಳುವುದು ಶಿಕ್ಷಾರ್ಹ ಅರಾಧ. ಈ ಬಗ್ಗೆ ಜಿಲ್ಲೆಯಲ್ಲಿ ದೊಡ್ಡಮಟ್ಟದ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ -2020 ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬಾಲ ಕಾರ್ಮಿಕ ಪದ್ಧತಿಯಂತಹ ಸಮಾಜ ವಿರೋಧಿ ಆಚರಣೆ ಕುರಿತು ಇರುವ ಕಾನೂನುಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲೂ ಅಧಿಕಾರಿಗಳು ಈ ಬಗ್ಗೆ ದೊಡ್ಡಮಟ್ಟದಲ್ಲಿ ಅರಿವು ಮೂಡಿಸಬೇಕಿದೆ ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸಲು ಸಾರ್ವಜನಿಕರು ಹಾಗೂ ಅಧಿಕಾರಿಗಳು ಒಗ್ಗೂಡಿ ಕಾರ್ಯನಿರ್ವಹಿಸಬೇಕು ಎಂದು ಡಿಸಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪ ಜಿ.ರಾಯರ್ ಮಾತನಾಡಿ, 14 ವರ್ಷದೊಳಗಿನ ಮಕ್ಕಳನ್ನು, ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ, ಉದ್ಯೋಗಕ್ಕೆ ನಿಯೋಜನೆಗೊಳಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಹಾಗೂ 2 ವರ್ಷದವರೆಗ ಜೈಲು ಶಿಕ್ಷೆ ಮತ್ತು 20 ಸಾವಿರದಿಂದ 50 ಸಾವಿರ ರೂಪಾಯಿವರತೆ ದಂಡ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಮಿಕ ಇಲಾಖೆ ಸಹಾಯಕ ಆಯುಕ್ತ ಸಂತೋಷ್ ಹಿಪ್ಪರಗಿ ಮಾತನಾಡಿ, ಬಾಲ್ಯದಿಂದಲೇ ಮಕ್ಕಳಿಗೆ ಉತ್ತಮ ಅರೋಗ್ಯದೊಂದಿಗೆ ಕಡ್ಡಾಯವಾಗಿ ಶಿಕ್ಷಣ ನೀಡಬೇಕು. ಇದು ಪ್ರತಿಯೊಬ್ಬ ಪಾಲಕರ ಕರ್ತವ್ಯವಾಗಿದೆ ಎಂದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಎನ್.ಎಸ್.ಮಹೇಶ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಎಸ್.ಸುಬ್ಬಾರಾವ್, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ನಾಗೇಶ್, ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಅನಿತಾಲಕ್ಷ್ಮೀ, ಕಾರ್ಮಿಕ ಇಲಾಕೆ ನಿರೀಕ್ಷಕ ಪ್ರದೀಪ್, ಸುರೇಶ್, ಸಂದೀಪ್ ಸೇವಾ ನಿಲಯಂ ಸಂಸ್ಥೆ ವ್ಯವಸ್ಥಾಪಕ ಪ್ರಭಾಕರ್ ಪಾಲ್ಗೊಂಡಿದ್ದರು.
ಆಟೋ ಪ್ರಚಾರದೊಂದಿಗೆ ಜಾಗೃತಿ: ಬಾಲ್ಯ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಆಟೋ ಮೂಲಕ ಜನ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹಸಿರು ನಿಶಾನೆ ತೋರಿಸಿದರು. ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲೂ ಆಟೋ ಸಂಚರಿಸಿ ಬಾಲಕಾರ್ಮಿಕ ವಿರೋಧಿ ದಿನದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಈ ಪ್ರಯೋಗ ಸಹಕಾರಿದೆ ಎಂದು ತಿಳಿಸಿದರು.