

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ಸಹಾಯವಾಣಿ ಹಾಗೂ ಶಿಕ್ಷಣ ಇಲಾಖೆ ಇವರ ಜಂಟಿಯಾಗಿ ಹೊಸಕೋಟೆ ಟೌನ್ ಹಾಗೂ ದೊಡ್ಡದುನ್ನಸಂದ್ರದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ಕಿಶೋರ ಕಾರ್ಮಿಕನನ್ನು ರಕ್ಷಿಸಲಾಯಿತು. ರಕ್ಷಣೆ ಮಾಡಿದ ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಮುಂದಿನ ಕ್ರಮಕ್ಕಾಗಿ ಹಾಜರು ಪಡಿಸಿದರು.
ಅಲ್ಲದೇ ವಿವಿಧ ಸ್ಥಳಗಳಲ್ಲಿ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ದುಡಿಮೆಗೆ ನೇಮಿಸಿಕೊಳ್ಳದಂತೆ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಮಾಂಸ ಮಾರಾಟ ಅಂಗಡಿಗಳು, ಇಟ್ಟಿಗೆ ಕಾರ್ಖಾನೆ ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳಿಗೆ ಭೇಟಿ ನೀಡಿ, ಮಾಲೀಕರಿಗೆ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾದ ಎಂಬುದರ ಬಗ್ಗೆ ಜಾಗೃತಿ ಮೂಡಿಸಲಾಯಿತು. 14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ ಮತ್ತು ಗರಿಷ್ಠ 2 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದರು.
ಅಧಿಕಾರಿಗಳ ಮನವಿ: ಇದೇ ವೇಳೆ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕರಪತ್ರವನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಇನ್ನು ಮುಂದೆ ತಮ್ಮ ಸುತ್ತಮುತ್ತಲಿನಲ್ಲಿ ಯಾವುದೇ ಮಕ್ಕಳನ್ನು ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೋಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 112 ಕರೆ ಮಾಡುವುದರ ಮೂಲಕ ಮಕ್ಕಳನ್ನು ರಕ್ಷಣೆ ಮಾಡಲು ಸಾರ್ವಜನಿಕರು ಹಾಗೂ ಅಂಗಡಿಗಳ ಮಾಲೀಕರು ಸಹಕಾರ ನೀಡುವಂತೆ ಅಧಿಕಾರಿಗಳು ಮನವಿ ಮಾಡಿದರು.