ಬಾಲಕಾರ್ಮಿಕರನ್ನು ಹುಡುಕಿ ಶಾಲೆಗೆ ದಾಖಲು: ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಮಾಹಿತಿ

1 (1)
Published on

ಮಂಡ್ಯ: ಬಾಲ ಹಾಗೂ ಕಿಶೋರ ಕಾರ್ಮಿಕ ಪ್ರಕರಣಗಳನ್ನು ಪತ್ತೆ ಮಾಡುವುದರ ಜತೆಗೆ ಶಾಲೆಗೆ ದಾಖಲು ಮಾಡಿ ಮುಖ್ಯವಾಹಿನಿಗೆ ಸೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬಾಲಕಾರ್ಮಿಕರನ್ನು ಶಾಲೆಗೆ ದಾಖಲಿಸುವುದರ ಜತೆಗೆ ಹಲವು ಸೌಲಭ್ಯ ನೀಡಲಾಗುವುದು. ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.75ಕ್ಕಿಂತ ಹೆಚ್ಚಿಗೆ ಅಂಕ ಪಡೆದವರಿಗೆ 2 ಸಾವಿರ ರೂ ಪ್ರೋತ್ಸಾಹಧನ ನೀಡಲಾಗುವುದು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಮತ್ತು ಭಾಷಣ ಸ್ಪರ್ಧೆಗಳನ್ನು ಏರ್ಪಡಿಸಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಕೊಡಲಾಗುವುದು ಎಂದರು.

12ರಂದು ದಿನಾಚರಣೆ: ನಗರದ ಕರ್ನಾಟಕ ಸಂಘದ ಆವರಣದಲ್ಲಿ ಜೂ.12ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಜಾಥಾ ಹೊರಡಲಿದೆ. ಬಾಲಕಾರ್ಮಿಕ ಪದ್ಧತಿ ವಿರುದ್ಧದ ಪ್ಲೇ ಕಾರ್ಡ್ ಪ್ರದರ್ಶಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು. ಎಲ್ಲ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಒಟ್ಟಾಗಿ ಸೇರಿ ಬಾಲಕಾರ್ಮಿಕ ಪದ್ಧತಿ ವಿರೋಧಿಸಿ ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.

ಸರ್ಕಾರದ ಎಲ್ಲ ಇಲಾಖೆಗಳ ಸಹಕಾರದೊಂದಿಗೆ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿ ಮಂಡ್ಯವನ್ನು ಬಾಲಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು. ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಸಂಘ ಹಾಗೂ ಬಾಲ ಕಾರ್ಮಿಕ ವಿರುದ್ಧ ಆಂದೋಲನ ನಡೆಸುತ್ತಿರುವ ಎಲ್ಲ ಇತರ ಸಂಘ ಸಂಸ್ಥೆಗಳು ಹಾಗೂ ಸಾಮಾಜಿಕ ಕಾರ್ಯಕರ್ತೆಯನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ವಿರುದ್ಧ ಬಲವಾದ ಜನಾಭಿಪ್ರಾಯ ರೂಪುಗೊಳ್ಳುವಂತೆ ಮಾಡಬೇಕಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಕಾರ್ಮಿಕ ಅಧಿಕಾರಿ ಮಂಜುಳಾದೇವಿ, ಯೋಜನಾ ನಿರ್ದೇಶಕ ಪ್ರಭಾಕರ್, ಡಿಡಿಪಿಐ ಎಸ್.ಟಿ.ಜವರೇಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net