ಅನಿರೀಕ್ಷಿತ ತಪಾಸಣೆ, ದಾಳಿ ಹೆಚ್ಚಿಸಿ

child labour
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಜಿಲ್ಲಾದ್ಯಂತ ಬಾಲಕಾರ್ಮಿಕರನ್ನು ಮತ್ತು ಕಿಶೋರ ಕಾರ್ಮಿಕರನ್ನು ಪತ್ತೆ ಹಚ್ಚಲು ಅನಿರೀಕ್ಷಿತ ತಪಾಸಣೆ ಮತ್ತು ದಾಳಿಗಳನ್ನು ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅಧಿಕಾರಿಗಳಿಗೆ ಸೂಚಿಸಿದರು.

ದೇವನಹಳ್ಳಿಯ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡಲು ನಿರಂತರವಾಗಿ ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಗಳನ್ನು ಕೈಗೊಳ್ಳಬೇಕು. ತಾಲ್ಲೂಕು ಮಟ್ಟದ ಟಾಸ್ಕ್‌ಪೋರ್ಸ್ ಸಮಿತಿಗಳು ದಾಳಿ ಮಾಡುವ ಸ್ಥಳದ ಮಾಹಿತಿಯನ್ನು ಗೌಪ್ಯವಾಗಿರಿಸಿ ದಾಳಿ ನಡೆಸಿ ಎಂದರು. ತಾಲೂಕು ಮಟ್ಟದಲ್ಲಿ ಕಾಲಕಾಲಕ್ಕೆ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕ್ರಮ ವಹಿಸಿ ಎಂದರು. ಅನಿರೀಕ್ಷಿತ ದಾಳಿ, ತಪಾಸಣೆ ನಡೆಸಿದ ಸಂದರ್ಭದಲ್ಲಿ ರಕ್ಷಿಸಲಾದ ಮಕ್ಕಳಿಗೆ ಸೂಕ್ತ ಪನರ್ವಸತಿ ಕಲ್ಪಿಸಬೇಕು. ಫುಡ್‌ಕಿಟ್, ಶೈಕ್ಷಣಿಕ ಕಿಟ್ ಒದಗಿಸಿ ಮುಂದಿನ ವಿದ್ಯಾಭ್ಯಾಸ, ಜೀವನ ರೂಡಿಸಿಕೊಳ್ಳಲು ಕ್ರಮ ವಹಿಸಬೇಕು.

ಕೂಡಲೇ ದೂರು ದಾಖಲಿಸಿ: ಅನಿರೀಕ್ಷಿತ ತಪಾಸಣೆ ಹಾಗೂ ದಾಳಿಯಲ್ಲಿ ರಕ್ಷಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ನೇಮಿಸಿಕೊಂಡ ಮಾಲೀಕರ ಮೇಲೆ ಕೂಡಲೇ ದೂರು ದಾಖಲಿಸಿ, ತ್ವರಿತವಾಗಿ ದಂಡ ವಸೂಲಾತಿ ಮಾಡಿ ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ಅಂತಹವರಿಗೆ ಕನಿಷ್ಠ 6 ತಿಂಗಳಿಂದ ಮತ್ತು ಗರಿಷ್ಠ 0 ವರ್ಷದವರೆಗೂ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ. ಪುನರಾವರ್ತಿತ ಅಪರಾಧಕ್ಕೆ 1 ವರ್ಷದಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದರು.

ಜಾಗೃತಿ ಮೂಡಿಸಬೇಕು: ಅನಿರೀಕ್ಷಿತ ತಪಾಸಣೆ ಮತ್ತು ದಾಳಿಯ ವೇಳೆ ವಿವಿಧ ಅಂಗಡಿಗಳು, ಗ್ಯಾರೇಜುಗಳು, ಬೇಕರಿಗಳು, ಮಾಂಸ ಮಾರಾಟ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮಾಲೀಕರಿಗೆ, ಸಾರ್ವಜನಿಕರಿಗೆ ಹಾಗೂ ಶಾಲಾ-ಕಾಲೇಜುಗಳಲ್ಲಿ ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಕುರಿತು ಕಾನೂನು ಅರಿವು-ನೆರವು ಕಾರ್ಯಕ್ರಮಗಳನ್ನು, ಆಟೊ ಪ್ರಚಾರ ಕಾರ್ಯಕ್ರಮ, ಬೀದಿ ನಾಟಕದಂಥ ಕಾರ್ಯಕ್ರಮ ಹಮ್ಮಿಕೊಳ್ಳಬೇಕು, ಗೋಡೆ ಬರಹ, ಕರಪತ್ರ ಮತ್ತು ಭಿತ್ತಿಪತ್ರಗಳನ್ನು ಅಂಗಡಿಗಳ ಮಾಲೀಕರಿಗೆ ವಿತರಿಸುವ ಮೂಲಕ ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಡಿಸಿ ಸೂಚಿಸಿದರು. ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಯಾವುದೇ ಮಕ್ಕಳನ್ನು ದುಡಿಮೆಗೆ ನೇಮಿಸಿ ಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಕರೆ ಮಾಡಿ ದೂರು ನೀಡಿ ಎಂದರು.

6 ಪ್ರಕರಣ ದಾಖಲು: ಜಿಲ್ಲಾ ಕಾರ್ಮಿಕ ಅಧಿಕಾರಿ ಹರ್ಷವರ್ಧನ್ ಮಾತನಾಡಿ, ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿ ಹಾಗೂ ತಪಾಸಣೆ ನಡೆಸಿ 2023-24ನೇ ಸಾಲಿನಲ್ಲಿ 13 ಬಾಲಕಾರ್ಮಿಕ ಹಾಗೂ 21 ಕಿಶೋರ ಕಾರ್ಮಿಕರನ್ನು ಸೇರಿ34 ಮಕ್ಕಳನ್ನು ರಕ್ಷಿಸಲಾಗಿದೆ. 2024-25ನೇ ಸಾಲಿನಲ್ಲಿ 3 ಬಾಲ ಕಾರ್ಮಿಕ ಮತ್ತು 33 ಕಿಶೋರ ಕಾರ್ಮಿಕರು ಸೇರಿ 36 ಮಕ್ಕಳನ್ನು ರಕ್ಷಿಸಲಾಗಿದೆ. 2024-25 ನೇ ಸಾಲಿನಲ್ಲಿ ಇಲ್ಲಿವರೆಗೆ 6 ಪ್ರಕರಣಗಳಲ್ಲಿ 1.20 ಲಕ್ಷ ರೂಗಳ ದಂಡ ವಸೂಲಾತಿ ಮಾಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net