ವಿವಿಧ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ

child labour
Published on

ಒಬ್ಬ ಬಾಲಕಾರ್ಮಿಕ, 10 ಕಿಶೋರ ಕಾರ್ಮಿಕರ ರಕ್ಷಣೆ

ವಿವಿಧ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ವಿವಿಧ ಇಲಾಖೆಗಳ ಸಹಯೋಗದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ನಡೆಸಿದ ಕಾರ್ಯಾಚರಣೆಯಲ್ಲಿ ಓರ್ವ ಬಾಲ ಕಾರ್ಮಿಕ ಹಾಗೂ 10 ಕಿಶೋರ ಕಾರ್ಮಿಕರನ್ನು ರಕ್ಷಿಸಲಾಗಿದೆ.
ಹೊಸಕೋಟೆ ಮತ್ತು ನೆಲಮಂಗಲ ತಾಲೂಕಿನ ವಿವಿಧ ಅಂಗಡಿಗಳು, ಬೇಕರಿಗಳು, ಗ್ಯಾರೇಜ್‌ಗಳು ಮಾಂಸ ಮಾರಾಟ ಸ್ಟಾಲ್‌ಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳ ಮೇಲೆ ವಿವಿಧ ಇಲಾಖೆ ಅಧಿಕಾರಿಗಳ ತಂಡ ಗುರುವಾರ ದಿಢೀರ್ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ ಮಾಡಿದೆ.
ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಕಾರ್ಮಿಕ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ 1098 ಇಲಾಖೆಗಳ ಅಧಿಕಾರಿಗಳು ಜಂಟಿಯಾಗಿ ಕಾರ್ಯಚರಣೆ ನಡೆಸಿ 11 ಮಂದಿಯನ್ನು ರಕ್ಷಿಸಿದ್ದಾರೆ.

ಪಾಲಕರಿಗೆ ಹಸ್ತಾಂತರ: ರಕ್ಷಿಸಲಾದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕರನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ, ಪಾಲಕರ ವಶಕ್ಕೆ ಹಸ್ತಾಂತರಿಸಲಾಯಿತು. ಬಾಲ್ಯಾವಸ್ಥೆ ಮತ್ತು ಕಿಶೋರಾವಸ್ಥೆ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಹಾಗೂ ತಿದ್ದುಪಡಿ ಕಾಯ್ದೆ 2016ರ ಪ್ರಕಾರ ಬಾಲಕಾರ್ಮಿಕರನ್ನು ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, 14 ವರ್ಷದೊಳಗಿನ (ಬಾಲ ಕಾರ್ಮಿಕ) ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ(ಕಿಶೋರ ಕಾರ್ಮಿಕ) ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಂದ 2 ವರ್ಷದವರೆಗೂ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ.ದಿಂದ 50 ಸಾವಿರ ರೂ.ವರೆಗೆ ಹೆಚ್ಚಿಸಬಹುದಾದಂತಹ ದಂಡ ಅಥವಾ ಎರಡನ್ನು ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ರಾಮು ಮಲ್ಲಯ್ಯ ತಿಳಿಸಿದರು.

ಸಹಾಯವಾಣಿಗೆ ಕರೆ ಮಾಡಿ: ಯಾವುದೇ ಅಂಗಡಿಗಳು, ಬೇಕರಿಗಳು, ಗ್ಯಾರೇಜ್ಗಳು, ಮಾಂಸ ಮಾರಾಟ ಅಂಗಡಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳು ಮಕ್ಕಳನ್ನು ದುಡಿಮೆಗೆ ನೇಮಿಸಿಕೊಂಡಿರುವುದು ಕಂಡುಬಂದಲ್ಲಿ ತಕ್ಷಣವೇ ಮಕ್ಕಳ ಸಹಾಯವಾಣಿ 1098 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ112 ಕ್ಕೆ ಸಾರ್ವಜನಿಕರು ಕರೆಮಾಡಿ ಮಾಹಿತಿ ನೀಡಿ ಮಕ್ಕಳನ್ನು ರಕ್ಷಿಸಲು ಸಹಕರಿಸಬೇಕು ಎಂದು ಜಿಲ್ಲಾ ಕಾರ್ಮಿಕ ಅಧಿಕಾರಿ ಎಚ್.ಆರ್. ನಾಗೇಂದ್ರ ತಿಳಿಸಿದರು.
ಬೇಸಿಗೆ ರಜೆ ಮುಗಿದು ಶಾಲೆಗಳು ಆರಂಭವಾಗಿದ್ದು, ಮಕ್ಕಳು ಎಲ್ಲರೂ ಮತ್ತೆ ಶಾಲೆಗಳಿಗೆ ಹೋಗುತ್ತಿದ್ದಾರೆಯೆ ಅಥವಾ ಶಾಲೆಯಿಂದ ಹೊರಗುಳಿದು ಎಲ್ಲಿಯಾದರೂ ಬಾಲಕಾರ್ಮಿಕರಾಗಿ ದುಡಿಮೆಯಲ್ಲಿ ತೊಡಗಿಸಿಕೊಂಡಿದ್ದಾರೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇದಕ್ಕಾಗಿ ಜಿಲ್ಲೆಯ ನಾಲ್ಕೂ ತಾಲೂಕುಗಳಲ್ಲಿ ದಿಢೀರ್ ಕಾರ್ಯಾಚರಣೆ ರೂಪಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸುಬ್ಬರಾವ್ ತಿಳಿಸಿದರು. ಇತ್ತೀಚಿಗೆ ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಬಾಲಕಾರ್ಮಿಕರ ರಕ್ಷಣೆ ಬಗ್ಗೆ ದಿಢೀರ್ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್.ಲತಾ ಸೂಚನೆ ನೀಡಿದ್ದು ಅದರನ್ವಯ ವಿವಿಧ ಇಲಾಖೆ ಸಹಯೋಗದಲ್ಲಿ ಕಾರ್ಯಾಚರಣೆ ರೂಪಿಸಲಾಗಿದೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net