ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ

child
Published on

 ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಬೇಕು ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ದೇವನಹಳ್ಳಿಯ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಸಮಿತಿ ಸಭೆಯಲ್ಲಿ ಮಾತನಾಡಿದರು. ಸಾರ್ವಜನಿಕರು, ಅಧಿಕಾರಿಗಳ ಸಮನ್ವಯತೆ ಹಾಗೂ ಸಹಕಾರದಿಂದ ಬಾಲ್ಯ ವಿವಾಹ ಪ್ರಕರಣಗಳನ್ನು ಶೇಕಡ ನೂರರಷ್ಟು ತಡೆಯಬಹುದು. ಬಾಲ್ಯ ವಿವಾಹದ ಬಗ್ಗೆ ದೂರು, ಮಾಹಿತಿ ಬಂದ ಕೂಡಲೇ ಎಂತಹ ಸಂದರ್ಭ ಇದ್ದರು ಅಧಿಕಾರಿಗಳು ಹೋಗಿ ತಡೆಯಬೇಕು. ಮಾಹಿತಿ ಇದ್ದರೂ ಅತ್ತ ಕಡೆ ಗಮನ ಹರಿಸದಿರುವುದು ಕರ್ತವ್ಯಲೋಪವಾಗಲಿದೆ. ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಅನುಷ್ಠಾನದ ಭಾಗವಾಗಿರುವ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಬಾಲ್ಯ ವಿವಾಹ ಪದ್ಧತಿ ನಿರ್ಮೂಲನೆಗೆ ಕೈಜೋಡಿಸಬೇಕು, ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಶಾಲಾ ಕಾಲೇಜು, ಕೈಗಾರಿಕೆ, ಕಾರ್ಖಾನೆಗಳಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಿ ಬಾಲ್ಯ ವಿವಾಹದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಜಿಲ್ಲೆಯಲ್ಲಿ ಇಂಥ ಪ್ರಕರಣಗಳಿಗೆ ಕಡಿವಾಣ ಹಾಕುವ ಮೂಲಕ ಬಾಲ್ಯ ವಿವಾಹ ಪ್ರಕರಣಗಳನ್ನು ಶೂನ್ಯಕ್ಕೆ ತರವಲ್ಲಿ ಅಧಿಕಾರಿಗಳ ಪ್ರಾಮಾಣಿಕ ಪ್ರಯತ್ನ ಇರಬೇಕು ಎಂದರು.

ಆಪ್ತ ಸಮಾಲೋಚನೆ ನಡೆಸಬೇಕು:

ಅಪೌಷ್ಟಿಕತೆಯಿಂದ ಬಳಲುತ್ತಿರುವ ಗರ್ಭಿಣಿ, ಬಾಣಂತಿಯರು ಹಾಗೂ ಮಕ್ಕಳಿಗೆ ಪೋಷಣ್ ಅಭಿಯಾನದಡಿ ಪೌಷ್ಠಿಕ ಆಹಾರ ನೀಡಿ, ಅವರನ್ನು ಸದೃಢರನ್ನಾಗಿಸಬೇಕು ಎಂದು ಸೂಚಿಸಿದ ಜಿಲ್ಲಾಧಿಕಾರಿ ಐಸಿಡಿಎಸ್ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ, ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿಸಬೇಕು ಎಂದರು. ಕೌಟುಂಬಿಕ ಹಿಂಸೆಗೊಳಗಾದ ಮಹಿಳೆಯರಿಗೆ ಸಕಾಲದಲ್ಲಿ ಆಪ್ತ ಸಮಾಲೋಚನೆ ನಡೆಸಿ ಆತ್ಮಸ್ಥೈರ್ಯ ತುಂಬಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ದೌರ್ಜನ್ಯಗೊಳಗಾದ ಮಹಿಳೆಯರಿಗೆ, ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿ ನ್ಯಾಯ ಒದಗಿಸುವಲ್ಲಿ ಅಧಿಕಾರಿಗಳು ಪ್ರಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.

10 ಬಾಲ್ಯ ವಿವಾಹ ಪ್ರಕರಣ ದಾಖಲು:

ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರಡಿ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ 10 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, 7 ಪ್ರಕರಣ ತಡೆಯಲಾಗಿದೆ. 2 ಬಾಲ್ಯ ವಿವಾಹ ನಡೆದಿದ್ದು, ಎರಡು ಎ್ಐಆಆರ್ ದಾಖಲಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಸಾರ್ವಜನಿಕರು ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಕರೆ ಮಾಡಿ ಹಾಗೂ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತುರ್ತಾಗಿ ಮಾಹಿತಿ ನೀಡಬಹುದಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net