

ಮಂಡ್ಯ: ಬಾಲ್ಯವಿವಾಹ ನಡೆದ ನಂತರ ದೂರು ದಾಖಲಿಸುವ ಕ್ರಮ ಕೈಗೊಳ್ಳುವ ಬದಲು ನಡೆಯದಂತೆ ನೋಡಿಕೊಳ್ಳಿ. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ನಿಗಾ ವಹಿಸಿದರೆ ಬಾಲ್ಯವಿವಾಹ ಪ್ರಕರಣ ಸಂಪೂರ್ಣವಾಗಿ ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಸೂಚನೆ ನೀಡಿದರು.
ಬಾಲ್ಯವಿವಾಹ ನಿಷೇಧ ಸಂಬಂಧಿಸಿದಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಜಿಲ್ಲೆ ಮುಂದಿದ್ದರೂ ಬಾಲ್ಯವಿವಾಹ ಪ್ರಕರಣ ವರದಿಯಾಗುತ್ತಿರುವ ಬಗ್ಗೆ ಚಿಂತಿಸಬೇಕಿರುತ್ತದೆ. ಬಾಲ್ಯವಿವಾಹದ ದುಷ್ಪರಿಣಾಮ ಕುರಿತು ಹಲವಾರು ಅರಿವು ಕಾರ್ಯಕ್ರಮ ತಳಮಟ್ಟದಿಂದಲೂ ಆಯೋಜಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಿ. ಶಾಲೆಯಲ್ಲಿ ಗೈರು ಹಾಜರಾಗುವ ಹೆಣ್ಣು ಮಕ್ಕಳ ಬಗ್ಗೆ ನಿಗಾ ವಹಿಸಿದರೆ ಸಂಪೂರ್ಣವಾಗಿ ಬಾಲ್ಯವಿವಾಹ ತಡೆಗಟ್ಟಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಜು.19 ರಂದು ಜಿಲ್ಲಾಧಿಕಾರಿ ಕಚೇರಿಯಿಂದ ಸರ್‌ಎಂವಿ ಜಿಲ್ಲಾ ಕ್ರೀಡಾಂಗಣದವರೆಗೆ ಬೃಹತ್ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 8 ಗಂಟೆಗೆ ಜಾಥಾ ನಡೆಯಲಿದ್ದು, ಕಾಲೇಜು ವಿದ್ಯಾರ್ಥಿಗಳು, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಯೋಜನೆ ರೂಪಿಸಿ. ಜಿಲ್ಲಾಮಟ್ಟದ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ಆನಂದ್ ಮಾತನಾಡಿ, ಬಾಲ್ಯವಿವಾಹವನ್ನು ಪ್ರೋತ್ಸಾಹಿಸುವವರಿಗೆ ಕಾನೂನಿನಲ್ಲಿ ಕಠಿಣ ಶಿಕ್ಷೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಕಾನೂನಿನಲ್ಲಿರುವ ಶಿಕ್ಷೆಗಳ ಬಗ್ಗೆ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರಿಗೆ ಅರಿವು ಮೂಡಿಸಿ ಎಂದರು.
ಸಭೆಯಲ್ಲಿ ಮಕ್ಕಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಚೆಲುವಯ್ಯ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.