

ಚಿಕ್ಕಬಳ್ಳಾಪುರ : ದೇಶದ ಭವಿಷ್ಯದ ಆಸ್ತಿ ಮಕ್ಕಳು. ಇವರನ್ನು ರಕ್ಷಿಸುವುದು ಮತ್ತು ಇವರ ಸಮಸ್ಯೆಗಳನ್ನು ಪರಿಹರಿಸುವುದು ಎಲ್ಲರ ಸಾಮಾಜಿಕ ಹೊಣೆ ಎಂದು ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ತಿಳಿಸಿದರು.
ಜಿಲ್ಲಾಡಳಿತ ಭವನದ ಸರ್. ಎಂ.ವಿ.ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ನೀರು, ಪರಿಸರ, ಮಕ್ಕಳನ್ನು ಬಿಟ್ಟು ಸಮಾಜವನ್ನು ಕಲ್ಪಿಸಿಕೊಳ್ಳುವುದು ಸಾಧ್ಯವಿಲ್ಲ. ಇವು ಬಹು ಅಮೂಲ್ಯವಾದ ಆಸ್ತಿಗಳು. ಇವುಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಇತ್ತೀಚೆಗೆ ಪಾಲಕರು ಮಕ್ಕಳೊಂದಿಗೆ ಸಮಯ ಕಳೆಯುವುದನ್ನು ಕಡಿಮೆಗೊಳಿಸಿದ್ದು, ಮಕ್ಕಳ ಹಕ್ಕು ಉಲ್ಲಂಘನೆ ಪ್ರಕರಣಗಳು, ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಇದು ಉತ್ತಮ ಸಮಾಜದ ಲಕ್ಷಣವಲ್ಲ. ಕೂಡಲೇ ಈ ಧೋರಣೆಯನ್ನು ಬದಲಾಯಿಸಿಕೊಂಡು ಒಳ್ಳೆಯ ವಾತಾವರಣದಲ್ಲಿ ಮಕ್ಕಳನ್ನು ಬೆಳೆಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವೆಂಕಟೇಶರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದರೆಡ್ಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೌತಾಜ್, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ರಾಮರಾಜೆ ಅರಸು ಮತ್ತಿತರರು ಇದ್ದರು.
ಮಕ್ಕಳಸ್ನೇಹಿ ಕೆಲಸ ನಿರ್ವಹಿಸಿ
ಜನರ ಸಹಕಾರದೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಮಕ್ಕಳ ರಕ್ಷಣ ಘಟಕ ಸೇರಿ ವಿವಿಧ ಇಲಾಖೆಗಳು ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಮಕ್ಕಳಸ್ನೇಹಿಯಾಗಿ ಕಾರ್ಯ ನಿರ್ವಹಿಸಲು ನಾಗಣ್ಣಗೌಡ ಸೂಚಿಸಿದರು. ಬಾಲ್ಯ ವಿವಾಹ, ಭ್ರೂಣ ಹತ್ಯೆ, ಪ್ರಸವಪೂರ್ವ ಮತ್ತು ಗರ್ಭಪೂರ್ವ ಲಿಂಗ ಪತ್ತೆ, ಮಕ್ಕಳ ದೌರ್ಜನ್ಯ, ಪೋಕ್ಸೋ ಪ್ರಕರಣಗಳನ್ನು ತಡೆಯುವಲ್ಲಿ ಪ್ರಾಮಾಣಿಕವಾಗಿ ಜವಾಬ್ದಾರಿ ನಿರ್ವಹಿಸಬೇಕಿದೆ. ಮಕ್ಕಳ ಹಕ್ಕುಗಳಿಗೆ ಧಕ್ಕೆಯಾಗುತ್ತಿರುವುದು ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು. ಹಾಗೆಯೇ ಜನರು ಸಕ್ಷಮ ಪ್ರಾಧಿಕಾರಗಳಿಗೆ ಇಲ್ಲವೇ ಮಕ್ಕಳ ಸಹಾಯವಾಣಿ ಸಂಖ್ಯೆ 1098ಕ್ಕೆ ನಿರ್ಭೀತಿಯಿಂದ ಮಾಹಿತಿ ನೀಡಲು ಪ್ರೇರೇಪಿಸಬೇಕು. ಹಾಗೂ ಮಾಹಿತಿ ನೀಡುವವರ ಗುರುತನ್ನು ಗೌಪ್ಯವಾಗಿಡಬೇಕು ಎಂದರು.
ಸಮಾಜವು ಮಕ್ಕಳನ್ನು ಉತ್ತಮ ರೀತಿಯಲ್ಲಿ ಕಾಣಬೇಕು. ಅದರಲ್ಲೂ ಪಾಲಕರು ಅವರ ಸಮಸ್ಯೆಗಳನ್ನು ಕೌಟುಂಬಿಕ ಹಂತದಲ್ಲೇ ಗುರುತಿಸಬೇಕು. ಮನೆಯಿಂದ ಮಕ್ಕಳು ಹೊರಗಡೆ ಹೋದಮೇಲೆ ಏನೆಲ್ಲ ಸಮಸ್ಯೆಗಳು ಎದುರಾಗುತ್ತವೆ ಎಂಬುದರ ಮೇಲೆ ನಿಗಾ ಇಡಬೇಕು. ಮಕ್ಕಳಿಗೆ ಅನ್ಯಾಯದ ಪ್ರಕರಣಗಳನ್ನು ಮುಚ್ಚಿಹಾಕುವಂತಹ ಕೆಲಸವನ್ನು ಯಾರೊಬ್ಬರೂ ಮಾಡಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗದಿದ್ದಲ್ಲಿ ಮತ್ತಷ್ಟು ದೌರ್ಜನ್ಯಗಳು ಹೆಚ್ಚಾಗುತ್ತವೆ. ಈ ಪ್ರಜ್ಞೆ ಪ್ರತಿಯೊಬ್ಬರಲ್ಲೂ ಇರಬೇಕು ಎಂದರು.
ಪೋಕ್ಸೋ ಪ್ರಕರಣಗಳು
ಜಿಲ್ಲೆಯಲ್ಲಿ 124 ಪೋಕ್ಸೋ ಪ್ರಕರಣಗಳು (2024 ಜನವರಿಯಿಂದ ಇಲ್ಲಿಯವರೆಗೆ) ದಾಖಲಾಗಿದ್ದು, ಈ ಪೈಕಿ 101 ಪ್ರಕರಣಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಲಾಗಿದೆ. ಬಾಕಿ 23 ಪ್ರಕರಣಗಳ ತನಿಖೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ತಪ್ಪಿತಸ್ಥರಿಗೆ ಕಾನೂನುರೀತ್ಯಾ ಶಿಕ್ಷೆ ಕೊಡಿಸುವ ಮೂಲಕ ಸಂತ್ರಸ್ತ ಮಕ್ಕಳಿಗೆ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅಪ್ರಾಪ್ತರ ಶೋಷಣೆ
ಜಿಲ್ಲೆಯಲ್ಲಿ ಬಾಲ್ಯವಿವಾಹ ಪ್ರಕರಣಗಳು 5, ಬಾಲಕಾರ್ಮಿಕ ನಿಷೇಧ ಕಾಯ್ದೆ ಉಲ್ಲಂಘನೆ ಪ್ರಕರಣಗಳು 9, ಅಪಹರಣ ಪ್ರಕರಣಗಳು 53, ಜೆ.ಜೆ. ಕಾಯ್ದೆ ಉಲ್ಲಂಘನೆ ಪ್ರಕರಣಗಳು 2 ಸೇರಿ 196 ದೂರುಗಳನ್ನು ಮಕ್ಕಳ ವಿಶೇಷ ಪೊಲೀಸ್ ಘಟಕವು ಸ್ವೀಕರಿಸಿದ್ದು, 160 ಪ್ರಕರಣಗಳನ್ನು ನಿಯಮಾನುಸಾರ ಇತ್ಯರ್ಥಪಡಿಸಿದ್ದು, 36 ಪ್ರಕರಣಗಳು ಬಾಕಿ ಇವೆ.
ಲ್ಯಾಪ್‌ಟಾಪ್ ವಿತರಣೆ
ಕರೊನಾದಿಂದ ತಂದೆ ತಾಯಿಗಳನ್ನು ಕಳೆದುಕೊಂಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಯೋಜನೆಯಡಿ 10ನೇ ತರಗತಿಯಲ್ಲಿ ಹೆಚ್ಚು ಅಂಕಗಳಿಸಿದ ಚಿಂತಾಮಣಿಯ ವಿದ್ಯಾರ್ಥಿನಿ ಭಾಗ್ಯಲಕ್ಷ್ಮಿಗೆ ಲ್ಯಾಪ್‌ಟಾಪ್ ವಿತರಿಸಲಾಯಿತು.