ಮಕ್ಕಳಿಗೆ ಕರೊನಾ ಆತಂಕ ಬೇಡ, ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸುವಂತೆ ಸಲಹೆ, ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಿದ್ಧತೆ

SSLC Meeting
Published on

ಬೆಂಗಳೂರು: ಮಾ.27 ರಿಂದ ಏಪ್ರಿಲ್ 9 ರವರೆಗೆ ನಡೆಯಲಿರುವ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಾರ್ಯಾಲಯದ ಸಹಾಯಕ ನರಸಿಂಹ ಮೂರ್ತಿ ಹೇಳಿದರು.

ದೇವನಹಳ್ಳಿ ಜಿಲ್ಲಾಡಳಿತ ಭವನದಲ್ಲಿರುವ ಕಚೇರಿ ಸಭಾಂಗಣದಲ್ಲಿ ಬುಧವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ಒಟ್ಟು 13,252 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಮಕ್ಕಳಿಗೆ ಎಲ್ಲ ಸೌಲಭ್ಯ ಕಲ್ಪಿಸಿಕೊಡಬೇಕು. ಭಯದ ವಾತಾರವಣವಿಲ್ಲದೆ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷೆ ಎದುರಿಸುವ ವಾತಾವರಣ ನಿರ್ಮಿಸಿಕೊಡಬೇಕು ಎಂದು ಸೂಚನೆ ನೀಡಿದರು.

52 ಪರೀಕ್ಷಾ ಕೇಂದ್ರ: ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಿದ್ದು, ಕೇಂದ್ರದ ಸುತ್ತ ನಿಷೇಧಾಜ್ಞೆ ಹೊರಡಿಸಲಾಗುವುದರಿಂದ ಕೇಂದ್ರದ 200 ಮೀಟರ್ ವ್ಯಾಪ್ತಿಯೊಳಗೆ ವಿದ್ಯಾರ್ಥಿಗಳ ಪಾಲಕರು ಪ್ರವೇಶಿಸುವಂತಿಲ್ಲ ಎಂದು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗುವ ಅಧಿಕಾರಿ ಹಾಗೂ ಸಿಬ್ಬಂದಿ ಲೋಪವಾಗದಂತೆ ಕಾರ್ಯನಿರ್ವಹಿಸಬೇಕು ಎಂದು ನರಸಿಂಹಮೂರ್ತಿ ಹೇಳಿದರು. ಜಿಲ್ಲಾ ಹಾಗೂ ತಾಲೂಕುಮಟ್ಟದ ಸಮಿತಿ ರಚಿಸಿ, ಪರೀಕ್ಷೆ ಯಶಸ್ವಿಯಾಗಿ ನಡೆಸಬೇಕು. ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಡಳಿತದಿಂದ ಪೊಲೀಸ್ ಬಂದೋಬಸ್ತ್‌ನೊಂದಿಗೆ ಪರೀಕ್ಷಾ ಕಾರ್ಯಗಳಿಗೆ ವಾಹನ ಸೌಕರ್ಯ ಒದಗಿಸಲಾಗುವುದು. ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು. ಅಂತಹ ಪ್ರಕರಣ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳು ಸಿದ್ಧವಿರಬೇಕು ಎಂದು ಸೂಚನೆ ನೀಡಿದರು.

ಕ್ಯಾಮರಾ ಕಣ್ಗಾವಲು: ಎಸ್ಸೆಸ್ಸೆಲ್ಸಿ ಪರೀಕ್ಷೆ ಸಂಪೂರ್ಣವಾಗಿ ಸಿಸಿಟಿವಿ ಕಣ್ಗಾವಲಿನಲ್ಲಿ ನಡೆಯಲಿದ್ದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಸೇರಿ ಪರೀಕ್ಷಾ ಕೇಂದ್ರದಲ್ಲಿ ಯಾರಿಗೂ ಮೊಬೈಲ್ ಕೊಂಡೊಯ್ಯಲು ಅವಕಾಶವಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.

ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಪರೀಕ್ಷೆ ಆರಂಭಕ್ಕೂ ಮುನ್ನವೇ ಪ್ರತಿ ಕೊಠಡಿಗೆ ತೆರಳಿ ಡೆಸ್ಕ್‌ಗಳು, ಕುಡಿಯುವ ನೀರು ಸೇರಿ ಅಗತ್ಯ ಸೌಕರ್ಯ ಪರಿಶೀಲಿಸುವ ಮೂಲಕ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಸಿದ್ಧತೆ ಕೈಗೊಳ್ಳಬೇಕು ಎಂದರು.

ಪ್ರತಿಯೊಬ್ಬ ಶಿಕ್ಷಕರು ಕರೊನಾ ವೈರಸ್ ಕುರಿತು ವಿದ್ಯಾರ್ಥಿಗಳು ಭಯಪಡದೆ ಪರೀಕ್ಷೆ ಎದುರಿಸುವಂತೆ ಪ್ರೇರೇಪಿಸಿ ಎಂದು ತಿಳಿಸಿದರು.

ಜಿಪಂ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ ಹಾಗೂ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net