

ರಾಮದುರ್ಗ: ಗ್ರಾಮೀಣ ಪ್ರದೇಶದಲ್ಲಿರುವ ಶಾಲೆಗಳ ಅಭಿವೃದ್ಧಿಗೆ ಸರ್ಕಾರದೊಂದಿಗೆ ಸ್ಥಳೀಯ ಸಮುದಾಯದ ಪಾಲ್ಗೊಳ್ಳುವಿಕೆ ಬಹು ಮುಖ್ಯವಾಗಿದೆ. ಪಾಲಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಶಾಸಕ ಮಹಾದೇವಪ್ಪ ಯಾದವಾಡ ಹೇಳಿದ್ದಾರೆ.
ತಾಲೂಕಿನ ತುರನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 44 ಲಕ್ಷ ರೂ. ವೆಚ್ಚ ದಲ್ಲಿ ನಾಲ್ಕು ಕೊಠಡಿ, ಗೊಣಗ ನೂರ ಗ್ರಾಮ ದಲ್ಲಿ 48 ಲಕ್ಷ ರೂ. ವೆಚ್ಚದಲ್ಲಿ ನಾಲ್ಕು ಕೊಠಡಿ, ಮಾಗನೂರ ಗ್ರಾಮದಲ್ಲಿ 33 ಲಕ್ಷ ರೂ. ವೆಚ್ಚದಲ್ಲಿ ಮೂರು ಕೊಠಡಿ, ಮಲ್ಲಾಪುರ ಗ್ರಾಮದಲ್ಲಿ 22 ಲಕ್ಷ ರೂ. ವೆಚ್ಚದಲ್ಲಿ ಎರಡು ಕೊಠಡಿ ನಿರ್ಮಾಣ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿ, ಸರ್ಕಾರದಿಂದ ಅನುದಾನ ತಂದು ಹೆಚ್ಚಿನ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಕರೊನಾ ಮಹಾಮಾರಿಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆ ಯಾಗುತ್ತಿದೆ. ಸರ್ಕಾರ ಶಿಕ್ಷಣ ಕ್ಷೇತ್ರದ ಪ್ರಗತಿಗೆ ಕ್ರಮ ಕೈಗೊಳ್ಳಲಿದೆ ಎಂದರು.ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಐ. ಹಕಾಟಿ ಮಾತನಾಡಿ, ಸರ್ಕಾರದ ನಿರ್ದೇಶನದಂತೆ ಶಿಕ್ಷಕರಿಗೆ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಪ್ರವಾಹದ ಸಂದರ್ಭದಲ್ಲಿ ಹಾನಿಗೊಳಗಾದ ಬಹುತೇಕ ಶಾಲಾ ಕಟ್ಟಡಗಳ ದುರಸ್ತಿಗೆ ಶಾಸಕರು ಸರ್ಕಾರದಿಂದ ಅಗತ್ಯ ಅನುದಾನ ಮಂಜೂರು ಮಾಡಿಸಿಕೊಂಡು ಬಂದು ಶಿಕ್ಷಣ ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತಿರುವುದು ತಾಲೂಕಿನ ಜನತೆಗೆ ಹೆಮ್ಮೆ ಪಡುವ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು. ಎಸ್‌ಡಿಎಂಸಿ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ಮುಖಂಡರು ಮತ್ತಿತರಿದ್ದರು.
ಬೆಟಗೇರಿ ವರದಿ: ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಬೆಟಗೇರಿ ಗ್ರಾಮದಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಕೌಜಲಗಿ ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಹೇಳಿದ್ದಾರೆ.
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆಯ ನೂತನ ಕೊಠಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಶಾಲೆಯ ಮುಖ್ಯಶಿಕ್ಷಕ ವೈ.ಸಿ.ಶೀಗಿಹಳ್ಳಿ ಮಾತನಾಡಿ, ನಬಾರ್ಡ್ ಯೋಜನೆಯ ಆರ್‌ಐಡಿಎಫ್ ಅನುದಾನದಡಿ ಸುಮಾರು 22 ಲಕ್ಷ ರೂ. ವೆಚ್ಚದಲ್ಲಿ 2 ಕೊಠಡಿ ನಿರ್ಮಿಸ ಲಾಗುವುದು ಎಂದು ಮಾಹಿತಿ ನೀಡಿದರು.
ಸಂಗಯ್ಯ ಹಿರೇಮಠ, ನಿಂಗಯ್ಯ ಮಠದ, ಎಸ್‌ಡಿಎಂಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ, ಸಿ.ಪಿ.ಯಕ್ಸಂಬಿ, ತಾಪಂ ಸದಸ್ಯ ಲಕ್ಷ್ಮಣ ನೀಲಣ್ಣವರ, ಬಿ.ಟಿ.ಪುಂಜಿ, ಪರಮಾನಂದ ಕೋಣಿ, ಅರ್ಜುನ ಅಂದಾನಿ, ಮಲ್ಲಪ್ಪ ಪಣದಿ, ದುಂಡಪ್ಪ ಕಂಬಿ, ಬಸವರಾಜ ಕೋಣಿ, ವಿಜಯ ಮಠದ, ಮಾರುತಿ ನೀಲಣ್ಣವರ ಇದ್ದರು.