

ಕಾರವಾರ:ಮಕ್ಕಳ ಹಕ್ಕುಗಳನ್ನು ರಕ್ಷಿಸಿ ಅವರ ಸರ್ವತೋಮುಖ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಾಣ ಮಾಡುವುದು ಎಲ್ಲರ ಜವಾಬ್ದಾರಿ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೊಗದ ಸದಸ್ಯ ಡಾ.ತಿಪ್ಪೇಸ್ವಾಮಿ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇಲಾಖೆಗಳು ಮಾತ್ರವಲ್ಲದೆ, ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಾರ್ವಜನಿಕರೂ ಈ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದರು.
ಇದನ್ನೂ ಓದಿ: ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ
ಮಕ್ಕಳ ಮೇಲೆ ದೌರ್ಜನ್ಯ ಅಥವಾ ಅವರ ಹಕ್ಕುಗಳ ಉಲ್ಲಂಘನೆ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪರಸ್ಪರ ಸಮನ್ವಯದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿ 112/1098 ಬಗ್ಗೆ ಶಾಶ್ವತ ಫಲಕ ಅಳವಡಿಸಬೇಕು. ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಮಕ್ಕಳ ಸುರಕ್ಷಾ ಸಮಿತಿಗಳನ್ನು ರಚಿಸಿಕೊಂಡು ಆಗಾಗ ಸಭೆಗಳನ್ನು ನಡೆಸಬೇಕು. ಹಾಸ್ಟೆಲ್, ವಸತಿ ಶಾಲೆಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಮಕ್ಕಳ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕು. ಮಕ್ಕಳ ದೈಹಿಕ, ಬೌದ್ಧಿಕ ಬೆಳವಣಿಗೆಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿನ ಶಾಲೆಗಳ ಕಟ್ಟಡದ ಮೇಲೆ ವಿದ್ಯುತ್ ತಂತಿಗಳು ಹಾದು ಹೋಗಿರುವ ಬಗ್ಗೆ ಮತ್ತು ಶಾಲಾ ಆವರಣದಲ್ಲಿ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮಗಳು ಅಳವಡಿಕೆಯಾಗಿರುವ ಬಗ್ಗೆ ಪರಿಶೀಲಿಸಿ ಅವುಗಳನ್ನು ಕೂಡಲೇ ಅಲ್ಲಿಂದ ತೆರವುಗೊಳಿಸುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ವಾಹನಗಳಲ್ಲಿ ನಿಗದಿಗಿಂತ ಹೆಚ್ಚು ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಕಂಡು ಬರುತ್ತಿದು, ಈ ಬಗ್ಗೆ ಆರ್‌ಟಿಒ ಅಧಿಕಾರಿಗಳು ಪರಿಶೀಲಿಸಿ ಅಗತ್ಯ ಕೈಗೊಳ್ಳಬೇಕು. ವಾಹನಗಳ ದೃಢತೆ, ವಿಮೆ ಮುಂತಾದ ದಾಖಲೆಗಳನ್ನು ಪರಿಶೀಲಿಸಬೇಕು ಎಂದರು. ಹೆಚ್ಚಿನ ಮಕ್ಕಳಿದ್ದಲ್ಲಿ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳನ್ನು ಒದಗಿಸುವುದು ಒಳ್ಳೆಯದು ಎಂದರು. ಪೊಲೀಸ್ ಇಲಾಖೆ ಮಕ್ಕಳ ಸ್ನೇಹಿಯಾಗಿರುವ ಬಗ್ಗೆ ತೆರೆದ ಮನೆ ಕಾರ್ಯಕ್ರಮಗಳ ಮೂಲಕ ತಿಳಿಸಬೇಕು. ಎಲ್ಲ ಠಾಣೆಗಳಲ್ಲಿ ಸಿಬ್ಬಂದಿಗೂ ಮಕ್ಕಳ ಹಕ್ಕುಗಳ ಕುರಿತು ಕಾನೂನು ಅರಿವು ಮೂಡಿಸಬೇಕು ಎಂದರು.
ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್, ಎಡಿಸಿ ರಾಜು ಮೊಗವೀರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಎಚ್.ಎಚ್.ಕಕನುರು, ಡಿವೈಎಸ್‌ಪಿ ವ್ಯಾಲೆಂಟೇನ್ ಡಿಸೋಜಾ ಇದ್ದರು.