ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು

arogya sibiba
Published on

ಮಡಿಕೇರಿ: ಮಕ್ಕಳು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಬೇಕು ಎಂದು ಗುಡ್ಡೆಹೊಸೂರು ಗ್ರಾ.ಪಂ.ಅಧ್ಯಕ್ಷೆ ಸೌಮ್ಯ ಹೇಳಿದರು.


ಗುಡ್ಡೆಹೊಸೂರಿನ ಸಮುದಾಯ ಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಿಶು ಅಭಿವೃದ್ಧಿ ಯೋಜನಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾಕ್ಷರತೆ ಮತ್ತು ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಹೆಣ್ಣು ಮಗುವಿನ ಪ್ರಾಮುಖ್ಯತೆಯ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ, ಮಕ್ಕಳ ತಾಯಂದಿಯರಿಗೆ ಹಾಗೂ ಕಿಶೋರಿಯರಿಗೆ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಕ್ಕಳು ಪ್ರಸ್ತುತ ದಿನಗಳಲ್ಲಿ ಮೊಬೈಲ್ ಗೀಳಿಗೆ ತುತ್ತಾಗಿದ್ದು, ಓದಿನ ಕಡೆ ಹೆಚ್ಚು ಗಮನ ಹರಿಸದೇ ಇರುವುದು ಇಂದಿನ ದಿನಗಳಲ್ಲಿ ವಿಪರ್ಯಾಸವೇ ಸರಿ. ಹಾಡಿಗಳಂತಹ ವಾತವರಣದಲ್ಲಿ ಬೆಳೆಯುವ ಮಕ್ಕಳು ಹೆಚ್ಚಿನದ್ದಾಗಿ ಶಿಕ್ಷಣದ ಮಹತ್ವ ಅರಿಯಬೇಕಾಗಿದೆ. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಇದರಿಂದ ಮಕ್ಕಳು ಮುಂದಿನ ದಿನಗಳಲ್ಲಿ ಉತ್ತಮ ಉದ್ಯೋಗ ಪಡೆದುಕೊಳ್ಳಲು ಸಹಕಾರಿಯಾಗುತ್ತದೆ ಎಂದು ಹೇಳಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಎಸ್.ಆರ್.ಕೇಶಿನಿ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಕಾಲೇಜು ದಿನಗಳಲ್ಲಿ ಭಾವನಾತ್ಮಕವಾಗಿ, ಮಾನಸಿಕವಾಗಿ ಬದಲಾವಣೆ ಆಗುತ್ತವೆಯಾದರೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕಾಲೇಜಿನಲ್ಲಿ ಎಲ್ಲಾ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆ ಸಮಸ್ಯೆಗಳಿಂದ ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.


ಹೆಣ್ಣು ಮಕ್ಕಳು ಶಿಕ್ಷಣವನ್ನು ಪಡೆದುಕೊಂಡಾಗ ಉತ್ತಮ ಸಮಾಜ ನಿರ್ಮಾಣಮಾಡಲು ಸಾಧ್ಯವಾಗುತ್ತದೆ. ಸಮಾಜದ ಆಗುಹೋಗುಗಳನ್ನು ಅರಿತುಕೊಂಡು ಉತ್ತಮ ಉದ್ಯೋಗ ಪಡೆದುಕೊಂಡಾಗ ಆರ್ಥಿಕವಾಗಿ ಸ್ವಾವಲಂಬಿ ಜೀವನವನ್ನು ನಡೆಸಬಹುದು ಎಂದರು.


ಮಾತೃವಂದನಾ ಸಂಯೋಜಕಿ ಎ.ನವ್ಯ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯು ಕೇಂದ್ರ ಪುರಸ್ಕೃತ ಯೋಜನೆಯಾಗಿದ್ದು ಗರ್ಭಿಣಿ, ಬಾಣಂತಿ ಮತ್ತು ಎರಡನೇ ಹೆಣ್ಣು ಮಗುವಿಗೆ ಆರೋಗ್ಯ ಮಟ್ಟ ಸುಧಾರಿಸಲು ಅಗತ್ಯ ದಾಖಲಾತಿ ಹೊಂದಿದ ಫಲಾನುಭವಿಗಳಿಗೆ ಸರ್ಕಾರದಿಂದ ನೇರನಗದು ವರ್ಗಾವಣೆ ಮೂಲಕ ಫಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂದು ತಿಳಿಸಿದರು.


ಅತ್ತೂರು ಅಂಗನವಾಡಿ ಕಾರ್ಯಕರ್ತೆ ಜ್ಯೋತಿ, ಮಕ್ಕಳ ತಾಯಂದಿರು, ಕಿಶೋರಿಯರು ಹಾಜರಿದ್ದರು. ಮಹಿಳಾ ಸಬಲೀಕರಣ ಘಟಕದ ಕೆ.ಎ.ನಳಿನಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net