

ಬಣಕಲ್: ಶಿಕ್ಷಕ ವೃತ್ತಿಗೆ ಸಮಾಜದಲ್ಲಿ ಉತ್ತಮ ಸ್ಥಾನವಿದ್ದು ಶಿಕ್ಷಕರು ಮಕ್ಕಳಿಗೆ ಮಾದರಿಯಾಗಬೇಕು ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದರು. ಮೂಡಿಗೆರೆ ಸಮೀಪದ ಹೆಸಗಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಪಂಚ ವೇಗವಾಗಿ ಸಾಗುತ್ತಿದೆ. ಮಾಹಿತಿ ತಂತ್ರಜ್ಞಾನ ಸಾಕಷ್ಟು ಮುಂದುವರಿದಿದೆ. ಇದರ ಉಪಯೋಗ ಕುಗ್ರಾಮಕ್ಕೂ ತಲುಪಬೇಕಿದೆ. ಶಾಲೆಗಳಲ್ಲಿ ಶಿಕ್ಷಕರು ಕೇವಲ ಪಠ್ಯ, ಪಠ್ಯೇತರ ಚಟುವಟಿಕೆಗಳಲ್ಲಿ ಮುಂದಿರುವ ಮಕ್ಕಳನ್ನು ಮಾತ್ರ ಗುರುತಿಸದೆ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದರು.
ತಾಪಂ ಸದಸ್ಯ ಕೆ.ಸಿ.ರತನ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲೂ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ. 75 ವರ್ಷಗಳಲ್ಲಿ ಈ ಶಾಲೆಯಲ್ಲಿ ಓದಿದ ಹಳೆ ವಿದ್ಯಾರ್ಥಿಗಳು ಈ ಶಾಲೆ ಅಭಿವೃದ್ಧಿಗೆ ಮುಂದಾಗಬೇಕು. ಈ ಶಾಲೆಯನ್ನು ಪ್ರೌಢಶಾಲೆಯನ್ನಾಗಿ ಮೇಲ್ದರ್ಜೆಗೇರಿಸಲು ಶಾಸಕರ ನೇತೃತ್ವದಲ್ಲಿ ಶಿಕ್ಷಣ ಸಚಿವರೊಂದಿಗೆ ಚರ್ಚೆ ನಡೆಸಲಾಗುವುದು ಎಂದು ತಿಳಿಸಿದರು.