ಹಿರಿಯ ವಕೀಲ ಕೆ.ಎಸ್. ವಿಜಯ್ ಮಾತನಾಡಿ, ದೈಹಿಕ ಆರೋಗ್ಯವಷ್ಟೇ ಅಲ್ಲ, ನಮ್ಮ ಸುತ್ತಮುತ್ತಲಿನ ಪರಿಸರವನ್ನೂ ಆರೋಗ್ಯಕರವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. ಶಿಕ್ಷಣ ಉದ್ಯೋಗಕ್ಕಾಗಿ ಮಾತ್ರವಲ್ಲ, ಉತ್ತಮ ವ್ಯಕ್ತಿತ್ವ ಮತ್ತು ಸಮಾಜ ನಿರ್ಮಾಣಕ್ಕೆ ಅಗತ್ಯ. ಮಹಾತ್ಮ ಗಾಂಧೀಜಿ, ಬಸವಣ್ಣನವರಂತಹ ಆದರ್ಶಗಳು ನಮ್ಮ ಬದುಕಿನ ಮೂಲಮಂತ್ರವಾಗಬೇಕು. ನೊಂದ ಸಮಾಜಕ್ಕೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡುವುದೇ ಇಂತಹ ಕಾರ್ಯಕ್ರಮಗಳ ಉದ್ದೇಶವಾಗಿದೆ ಎಂದು ತಿಳಿಸಿದರು. ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿದೆ. ಅವುಗಳ ಅರಿವು ಹೊಂದುವುದು ಅಗತ್ಯ. ಉತ್ತಮ ಸಮಾಜ ನಿರ್ಮಾಣವಾಗಬೇಕಾದರೆ ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕು. ಯಾವುದೇ ಆಸೆ, ಅಮಿಷಗಳಿಗೆ ಬಲಿಯಾಗದೆ ವಿವೇಕದಿಂದ ನಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಆಡಳಿತಾಧಿಕಾರಿ ಎಚ್.ವಿ. ವಾಮದೇವಪ್ಪ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಸ್ಪಷ್ಟ ಗುರಿ ಮತ್ತು ಬದ್ಧತೆ ಹೊಂದಿರಬೇಕು ಎಂದರು. ಸಾಮಾಜಿಕ ಜವಾಬ್ದಾರಿಯೊಂದಿಗೆ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಇಂತಹ ಜಾಗೃತಿ ಕಾರ್ಯಕ್ರಮಗಳು ಅತ್ಯವಶ್ಯಕ ಎಂದು ಸಲಹೆ ನೀಡಿದರು.