ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಣೆ ಯುವಕರ ಹೊಣೆ: ಜಿ.ಪಂ. ಯೋಜನಾಧಿಕಾರಿ ಗಾಯತ್ರಿದೇವಿ democratic system

ಯುವ ಸಂಸತ್ ಕಾರ್ಯಕ್ರಮ ಉದ್ಘಾಟನೆ | ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ಸಂಸತ್ ಕಲಾಪ
democratic system
ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆಯೋಜಿಸಲಾಗಿದ್ದ ಯುವ ಸಂಸತ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು.democratic system
Published on: 

ಚಳ್ಳಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವ ಮಹತ್ತರ ಜವಾಬ್ದಾರಿ ಇಂದಿನ ಯುವ ಸಮುದಾಯದ ಮೇಲಿದೆ ಎಂದು ಜಿಲ್ಲಾ ಪಂಚಾಯಿತಿ ಯೋಜನಾಧಿಕಾರಿ ಗಾಯತ್ರಿದೇವಿ ತಿಳಿಸಿದರು. democratic system

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ, ತಾಲೂಕು ಆಡಳಿತ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಯುವ ಸಂಸತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಆಶಯದಂತೆ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಲ್ಲಿದೆ. ವಿವಿಧ ಭಾಷೆ ಮತ್ತು ಸಂಸ್ಕೃತಿಗಳ ವೈವಿಧ್ಯತೆಯ ನಡುವೆಯೂ ನಾವೆಲ್ಲರೂ ಏಕತೆಯನ್ನು ಉಳಿಸಿಕೊಂಡು ಬಂದಿದ್ದೇವೆ. ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನಬದ್ಧ ಹಕ್ಕುಗಳು ಮತ್ತು ಕರ್ತವ್ಯಗಳು ಅನ್ವಯಿಸುತ್ತವೆ. ಆದರೆ ಪ್ರಸ್ತುತ ದಿನಗಳಲ್ಲಿ ಹಕ್ಕುಗಳ ದುರುಪಯೋಗ ಮತ್ತು ಕರ್ತವ್ಯಗಳ ನಿರ್ಲಕ್ಷ್ಯ ಹೆಚ್ಚಾಗುತ್ತಿರುವುದು ಕಳವಳಕಾರಿ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾನೂನುಗಳ ರಚನೆಯಲ್ಲಿ ಜನಪ್ರತಿನಿಧಿಗಳ ಜವಾಬ್ದಾರಿ, ಆಡಳಿತ ಹಾಗೂ ವಿರೋಧ ಪಕ್ಷಗಳ ಮೇಲಿರುವ ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಮನೋಭಾವವನ್ನು ಬೆಳೆಸಿಕೊಳ್ಳುವ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಈ ಯುವ ಸಂಸತ್ ಕಾರ್ಯಕ್ರಮವನ್ನು ರೂಪಿಸಲಾಗಿದೆ ಎಂದು ವಿವರಿಸಿದರು.

ಗಮನ ಸೆಳೆದ ಯುವ ಸಂಸತ್:

ನೈಜ ಸಂಸತ್ತಿನ ಮಾದರಿಯಲ್ಲೇ ಜರುಗಿದ ಯುವ ಸಂಸತ್‌ನಲ್ಲಿ ವಿದ್ಯಾರ್ಥಿನಿಯರು ಸದನದ ಕಲಾಪವನ್ನು ಅತ್ಯಂತ ಉತ್ಸಾಹದಿಂದ ನಡೆಸಿಕೊಟ್ಟರು. ಪ್ರಚಲಿತ ಸಮಸ್ಯೆಗಳ ಕುರಿತು ಧ್ವನಿ ಎತ್ತಿದ ವಿರೋಧ ಪಕ್ಷದ ಸದಸ್ಯರ ಪಾತ್ರಧಾರಿಗಳು, ಮಂತ್ರಿಗಳ ಕಾರ್ಯವೈಖರಿಯ ಬಗ್ಗೆ ಹರಿತವಾದ ಪ್ರಶ್ನೆಗಳನ್ನು ಕೇಳುವ ಮೂಲಕ ಸಭಿಕರ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ತಹಸೀಲ್ದಾರ್ ರೇಹಾನ್ ಪಾಷಾ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್. ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಸಿಡಿಪಿಒ ಎಸ್. ರಾಜಾನಾಯ್ಕ್, ಮಹಾಲಿಂಗಪ್ಪ, ಜಿ.ಟಿ. ವೀರಭದ್ರಯ್ಯ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net