

ಬೆಂಗಳೂರು: ಸಿಐಡಿ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಚರಣ್ರೆಡ್ಡಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗ್ಗೆ ನಿಧನ ಹೊಂದಿದರು.
ಹಲವು ತಿಂಗಳಿಂದ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿತ್ತು. ಕಳೆದ ತಿಂಗಳು ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ.
ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ನಡೆದಿದ್ದ ಅಕ್ರಮ ಗಣಿಗಾರಿಕೆ ತನಿಖೆ ನಡೆಸಿದ ಲೋಕಾಯುಕ್ತ ಸಂಸ್ಥೆಯ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿ ಇವರು ಸೇವೆ ಸಲ್ಲಿಸಿದ್ದರು.
ಬೆಂಗಳೂರು ನಗರ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಅವರು ಕರ್ತವ್ಯ ನಿರ್ವಹಿಸಿದ್ದರು. ಸಿಬಿಐನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅವರು ಸಿಐಡಿಗೆ ವರ್ಗಾವಣೆಯಾಗಿದ್ದರು.
ಮೃತರ ಪಾರ್ಥಿವ ಶರೀರವನ್ನು ಸಂಜಯನಗರದಲ್ಲಿರುವ ಅವರ ನಿವಾಸಕ್ಕೆ ರವಾನಿಸಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸಂಜೆ ವೇಳೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. (ದಿಗ್ವಿಜಯ ನ್ಯೂಸ್)