ಮೇ.30ರಂದು ಸಿಐಟಿಯುನಿಂದ ಹಾಸನ ಚಲೋ: ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ಮಾಹಿತಿ

CITU press conference on pen drive case mandya
Published on

ಮಂಡ್ಯ: ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಮೇ 30ರಂದು ಹಾಸನ ಚಲೋ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮೀ ತಿಳಿಸಿದರು.

ಬಡ್ತಿ, ವರ್ಗಾವಣೆ ಸೇರಿದಂತೆ ಇನ್ನಿತರ ಸಮಸ್ಯೆಗಳ ಬಗ್ಗೆ ನೆರವು ಬಯಸಿ ಹೋದ ಹೆಣ್ಣು ಮಕ್ಕಳನ್ನು ಪ್ರಜ್ವಲ್ ರೇವಣ್ಣ ದುರ್ಬಳಕೆ ಮಾಡಿಕೊಂಡಿರುವುದು ಖಂಡನಾರ್ಹ. ಪ್ರಜ್ವಲ್ ರೇವಣ್ಣ ವಿಚಾರದಲ್ಲಿ ಎಲ್ಲ ಪಕ್ಷಗಳು ರಾಜಕಾರಣ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ಆಗುವ ನಿಟ್ಟಿನಲ್ಲಿ ಹೋರಾಡಬೇಕು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಎಸ್‌ಐಟಿ ರಚನೆಯಾದ ನಂತರ ಏ.27ರಂದು ಪ್ರಜ್ವಲ್ ರೇವಣ್ಣ ಪರಾರಿಯಾಗಿದ್ದಾರೆ. ಈ ವಿಚಾರ ಕೇಂದ್ರ ಸರ್ಕಾರ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೂ ತಿಳಿದಿದೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎಚ್.ಡಿ.ಕುಮಾರಸ್ವಾಮಿ ಅವರು ಪ್ರಜ್ವಲ್ ರೇವಣ್ಣ ನಡೆಸಿದ ಹೇಯ ಕೃತ್ಯದ ಬಗ್ಗೆ ಮಾತನಾಡುತ್ತಿಲ್ಲ. ದೇವೇಗೌಡರು ಈ ವಿಚಾರ ನನಗೆ ನೋವು ತಂದಿದೆ ಎನ್ನುತ್ತಿದ್ದು, ಆದರೆ ಹೆಣ್ಣು ಮಕ್ಕಳಿಗೆ ಆಗಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿಲ್ಲ. ಲೈಂಗಿಕ ಹಗರಣ ಮಹಿಳೆಯರ ಘನತೆಯ ವಿಚಾರವಾಗಿದೆ. ರಾಜಕೀಯ ಪಕ್ಷಗಳು ತಮ್ಮ ಸ್ವಾರ್ಥ ರಾಜಕೀಯವನ್ನು ಬದಿಗಿಟ್ಟು ಹೆಣ್ಣಿನ ಘನತೆ ಕಾಪಾಡಬೇಕಿದೆ. ಈ ನಿಟ್ಟಿನಲ್ಲಿ ಸಿಐಟಿಯು ವತಿಯಿಂದ ಹಾಸನ ಚಲೋ ನಡೆಸಲಾಗುತ್ತಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಖಜಾಂಚಿ ಮಹದೇವಮ್ಮ, ಬಿಸಿಯೂಟ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net