ಖಾಸಗಿ ನೀರಿನ ಟ್ಯಾಂಕರ್‌ಗೆ ದರ ನಿಗದಿಪಡಿಸಲು ನಗರ ಡಿಸಿ ಸೂಚನೆ

Water Tanker
Published on

ಬೆಂಗಳೂರು: ಬೇಸಿಗೆ ಹಿನ್ನೆಲೆಯಲ್ಲಿ ಜನರಿಗೆ ನೀರಿನ ಅಭಾವ ಉಂಟಾಗದಂತೆ ಆಯಾ ಗ್ರಾಮ ಪಂಚಾಯಿತಿಗಳಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ದರ ನಿಗದಿಪಡಿಸಲು ಶೀಘ್ರವೇ ತೀರ್ಮಾನ ಕೈಗೊಳ್ಳಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ. ದಯಾನಂದ ಅವರು ತಾಲೂಕು ಪಂಚಾಯಿತಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಬರ ಪರಿಹಾರ ಕ್ರಮಗಳ ಬಗ್ಗೆ ಚರ್ಚಿಸಲು ಜಿಲ್ಲಾ ವಿಪತ್ತು ನಿರ್ವಾಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕುಗಳಲ್ಲಿ ಮುಂಗಾರಿನಲ್ಲಿ ಎದುರಾಗುವ ನೀರಿನ ಅಭಾವವನ್ನು ನೀಗಿಸಲು ಗ್ರಾಮ ಪಂಚಾಯಿತಿಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಗುರುತಿಸಿ ಅವುಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರಿನ ವ್ಯವಸ್ಥೆ ಕಲ್ಪಿಸಲು ಟ್ಯಾಂಕರ್‌ಗಳ ದರ ನಿಗದಿಪಡಿಸಲು ಟೆಂಡರ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.

ನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಉಂಟಾಗುವ ಮೇವಿನ ಕೊರತೆ ನೀಗಿಸಲು 21 ವಾರಗಳ ಮೇವನ್ನು ಶೇಖರಿಸಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಸಿಇಒ ಕಾಂತರಾಜು ಪಿ.ಎಸ್ ಸೇರಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net