

ಬೆಂಗಳೂರು: ಲೋಕಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ಮಂಗಳವಾರ (ಜೂ.4) ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ ಎಂದು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಭಾನುವಾರ ಮತ ಎಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ನಗರ ಹಾಗೂ ಬೆಂಗಳೂರು ದಕ್ಷಿಣ ಸೇರಿ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ 3 ವಿಧಾನಸಭಾ ಕ್ಷೇತ್ರಗಳು ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಬರಲಿದ್ದು, ಅವು ಆಯಾ ಜಿಲ್ಲಾ ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ ಎಂದರು.
ಮತ ಎಣಿಕೆಯ ಸಿಬ್ಬಂದಿ 3 ವಿಧದಲ್ಲಿದ್ದು, ಪ್ರತಿ ಟೇಬಲ್ಗೆ ಮೈಕ್ರೋ ಅಬ್ಸರ್‌ವರ್, ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರನ್ನು ನಿಯೋಜಿಸಲಾಗುತ್ತದೆ. ಎಣಿಕೆ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಮತ ಎಣಿಕೆ ಏಜೆಂಟ್‌ಗಳನ್ನು ಬೆಳಗ್ಗೆ 6 ಗಂಟೆಗೆ ಬರಲು ತಿಳಿಸಲಾಗಿದೆ. ಒಂದು ಕೊಠಡಿಯಲ್ಲಿ 14 ಟೇಬಲ್ ಹಾಕಲು ಅವಕಾಶವಿದ್ದು, ದೊಡ್ಡ ಕೊಠಡಿಗಳಿದ್ದರೆ ಹೆಚ್ಚಿನ ಟೇಬಲ್ಗಳನ್ನು ಹಾಕಲಾಗುತ್ತದೆ ಎಂದು ತಿಳಿಸಿದರು.
ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮರಾ:
ಅಂಚೆ ಮತದಾನವು ಈ ಬಾರಿ ಹೆಚ್ಚಾಗಿ ನಡೆದಿರುವುದರಿಂದ ಎಣಿಕೆಯು ನಿರಂತರವಾಗಿ ನಡೆಯುತ್ತಿರುತ್ತದೆ. ಕೊನೆಯ ಸುತ್ತಿನ ಮುಂಚಿತವಾಗಿ ಇದರ ಎಣಿಕೆಯನ್ನು ಪೂರ್ಣಗೊಳಿಸಲಾಗುತ್ತದೆ. ಪ್ರತಿ ಕೊಠಡಿಯಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದ್ದು, ಚುನಾವಣಾಧಿಕಾರಿ ನಿರ್ದೇಶನದ ಮೇರೆಗೆ ಇನ್ನಿತರ ಕಡೆ ಸಿಸಿ ಕ್ಯಾಮರಾ ಹಾಗೂ ವೀಡಿಯೋಗ್ರಾಫಿ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದು ಅವರು ವಿವರಿಸಿದರು.
ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್ ರೂಂ ಓಪನ್:
ಎಣಿಕೆ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿಗೆ ಮತ ಎಣಿಕೆ ಕೇಂದ್ರಕ್ಕೆ ಬರುವವರೆಗೆ ಯಾವ ಟೇಬಲ್ನಲ್ಲಿ ಕೂರಲಿದ್ದೇವೆ ಎಂಬುದು ತಿಳಿದಿರುವುದಿಲ್ಲ. ಜೂ.4ರ ಬೆಳಗ್ಗೆ ಬಂದ ಬಳಿಕವೇ ತಿಳಿಯಲಿದೆ. ಬೆಳಗ್ಗೆ 7.45ಕ್ಕೆ ಸ್ಟ್ರಾಂಗ್ ರೂಂಗಳನ್ನು ತೆರೆಯಲಿದ್ದು, 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್‌ಗಳ ಎಣಿಕೆ ಆರಂಭವಾದ ಬಳಿಕ ಇವಿಎಂ ಎಣಿಕೆ ಪ್ರಾರಂಭಿಸಲಾಗುತ್ತದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.
ಮತ ಎಣಿಕೆ, ಸ್ಟ್ರಾಂಗ್ ರೂಂ ಕೇಂದ್ರಗಳ ವಿವರ:
ಬೆಂಗಳೂರು ಕೇಂದ್ರ: ಮೌಂಟ್ ಕಾರ್ಮೆಲ್ ಕಾಲೇಜು, ಅರಮನೆ ರಸ್ತೆ, ವಸಂತನಗರ.
ಮತಗಟ್ಟೆಗಳ ಒಟ್ಟು ಸಂಖ್ಯೆ: 2125
ಮತ ಎಣಿಕೆ ಕೊಠಡಿಗಳ ಸಂಖ್ಯೆ: 10
ಒಟ್ಟು ಟೇಬಲ್ಗಳ ಸಂಖ್ಯೆ: 135
ಒಟ್ಟು ಸಿಬ್ಬಂದಿಯ ಸಂಖ್ಯೆ: 416
ಬೆಂಗಳೂರು ಉತ್ತರ: ಸೇಂಟ್ ಜೋಸ್ೆ ಕಾಲೇಜು, ವಿಠಲ ಮಲ್ಯ ರಸ್ತೆ.
ಮತಗಟ್ಟೆಗಳ ಒಟ್ಟು ಸಂಖ್ಯೆ: 2911
ಮತ ಎಣಿಕೆ ಕೊಠಡಿಗಳ ಸಂಖ್ಯೆ: 19
ಒಟ್ಟು ಟೇಬಲ್ಗಳ ಸಂಖ್ಯೆ: 130
ಒಟ್ಟು ಸಿಬ್ಬಂದಿಯ ಸಂಖ್ಯೆ: 390
ಬೆಂಗಳೂರು ದಕ್ಷಿಣ: ಎಸ್‌ಎಸ್‌ಎಂಆರ್‌ವಿ ಕಾಲೇಜು, 9ನೇ ಬಾಕ್, ಜಯನಗರ.
ಮತಗಟ್ಟೆಗಳ ಒಟ್ಟು ಸಂಖ್ಯೆ: 2120
ಮತ ಎಣಿಕೆ ಕೊಠಡಿಗಳ ಸಂಖ್ಯೆ: 9
ಒಟ್ಟು ಟೇಬಲ್ಗಳ ಸಂಖ್ಯೆ: 118
ಒಟ್ಟು ಸಿಬ್ಬಂದಿಯ ಸಂಖ್ಯೆ: 354