ಪೌರಕಾರ್ಮಿಕರ ಕರಡು ಆಯ್ಕೆ ಪಟ್ಟಿ ಪ್ರಕಟ

Vijayavani-Featured-Image
Published on

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕ ಹುದ್ದೆಗಳಿಗೆ ಆಯ್ಕೆಯಾಗಿರುವ 12,692 ಮಂದಿಯ ಕರಡು ಆಯ್ಕೆ ಪಟ್ಟಿಯನ್ನು ಮಂಗಳವಾರ (ಅ.9) ಪ್ರಕಟಿಸಲಾಗಿದೆ.

ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ ಅಡಿ ಕಾರ್ಯನಿರ್ವಹಿಸುತ್ತಿರುವ ಗ್ರೂಪ್ ಡಿ ವೃಂದದ ಪೌರಕಾರ್ಮಿಕರ ನೇಮಕಾತಿ ಪ್ರಕ್ರಿಯೆಯನ್ನು 2 ಹಂತದಲ್ಲಿ ಮಾಡಲಾಗಿದ್ದು, ಮೊದಲ ಹಂತದಲ್ಲಿ 3,673 ಹಾಗೂ ಎರಡನೇ ಹಂತದಲ್ಲಿ 11,307 ಹುದ್ದೆಗಳು ಸೇರಿ ಒಟ್ಟು 14,980 ಪೌರಕಾರ್ಮಿಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾಗಿದೆ. ಇದರಲ್ಲಿ ನಿಯಮಾನುಸಾರ 12,692 ಅರ್ಹ ಪೌರಕಾರ್ಮಿಕರನ್ನು ನೇಮಕಾತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಪಾಲಿಕೆಯ ಆಡಳಿತ ವಿಭಾಗದ ವಿಶೇಷ ಆಯುಕ್ತ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.

ಘನತ್ಯಾಜ್ಯ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಕಾರ್ಯಗಳ ನಿರ್ವಹಣೆಗಾಗಿ ಘನತ್ಯಾಜ್ಯ ವಿಭಾಗದಲ್ಲಿ ನೇರ ಪಾವತಿಯಡಿ (ಡಿಪಿಎಸ್) ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರು ಒಟ್ಟು 15,000ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ ಎಲ್ಲ ಅರ್ಜಿಗಳನ್ನು ಪರಿಶೀಲಿಸಿದ್ದು, ದೀರ್ಘಾವಧಿ ಸೇವೆ, ರೋಸ್ಟರ್ ಪದ್ದತಿ ಹಾಗೂ ವಿವಿಧ ಮಾನದಂಡಗಳ ಆಧಾರದ ಮೇಲೆ ಎರಡು ಹಂತಗಳಲ್ಲಿ ಅರ್ಜಿ ಆಹ್ವಾನಿಸಿ, ಸ್ವೀಕರಿಸಿರುವಂತಹ ಅರ್ಜಿಗಳ ಪೈಕಿ 12,692 ಪೌರಕಾರ್ಮಿಕರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ:

ಕರಡು ಆಯ್ಕೆ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್​​​ನಲ್ಲಿ ಪ್ರಕಟಿಸಲಾಗುತ್ತಿದೆ. ಆಯಾ ವಲಯ ಜಂಟಿ ಆಯುಕ್ತರ ಕಚೇರಿ ಹಾಗೂ ಘನತ್ಯಾಜ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರ ಕಚೇರಿಯಲ್ಲಿ ಪಟ್ಟಿಯನ್ನು ಪ್ರಕಟಿಸಲಾಗುತ್ತಿದೆ. ಅ.21ರ ಸಂಜೆ 5.30 ಒಳಗಾಗಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net