ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ

30-04-Shiva-3
ರಾಯಚೂರಿನ ವಾರ್ಡ್ ಸಂಖ್ಯೆ 1ರಲ್ಲಿ ಬರುವ ದೇವರು ಕಾಲನಿಯಲ್ಲಿ ಸೋಮವಾರ ಸಂಜೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ನಡೆದ ಸಂದರ್ಭದಲ್ಲಿ ಪೊಲೀಸರು ಕಾರ್ಯಕರ್ತರನ್ನು ಸಮಾಧಾನಿಸಿ ಕಳುಹಿಸಿದರು. ಕಾಂಗ್ರೆಸ್ ಮುಖಂಡ ರವಿ ಬೋಸರಾಜು, ಬಿಜೆಪಿ ಮುಖಂಡ ಸನ್ನಿ ರೋನಾಲ್ಡ್, ಸಿಪಿಐ ನಾಗರಾಜ ಮೇಕಾ ಇದ್ದರು.
Published on

ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಗರದ ವಾರ್ಡ್ ಸಂಖ್ಯೆ 1ರಲ್ಲಿ ಬರುವ ದೇವರು ಕಾಲನಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಸೋಮವಾರ ಸಂಜೆ ವಾಗ್ವಾದ, ಜಟಾಪಟಿ ನಡೆದು ಬಿಗುವಿನ ವಾತಾವರಣ ಉಂಟಾಗಿತ್ತು.
ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದರೆ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಬಿಜೆಪಿ ಮುಖಂಡರು ಪ್ರತ್ಯಾರೋಪ ಮಾಡಿದರು.
ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರವಿ ಬೋಸರಾಜು ತೆರಳಿ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸಿದಾಗ ವಾರ್ಡ್‌ನ ಸದಸ್ಯೆ ಪುತ್ರ ಸನ್ನಿ ರೋನಾಲ್ಡ್ ಜತೆಗೆ ವಾಗ್ವಾದ ನಡೆದಿದೆ. ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು.
ವಿಷಯ ತಿಳಿದು ಶಾಸಕ ಡಾ.ಶಿವರಾಜ ಪಾಟೀಲ್ ಕೂಡಾ ಸ್ಥಳಕ್ಕೆ ಧಾವಿಸಿ ಕಾರ್ಯಕರ್ತರನ್ನು ಸಮಾಧಾನಿಸುವ ಕೆಲಸ ಮಾಡಿದ್ದು, ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಘಟನೆಯಿಂದಾಗಿ ವಾರ್ಡ್‌ನಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net