

ಮೈಸೂರು: ಸ್ವಚ್ಛತೆಯಲ್ಲಿ ಪ್ರತಿ ಬಾರಿ ದೇಶದ ಗಮನ ಸೆಳೆಯುವ ಸಾಂಸ್ಕೃತಿಕ ನಗರಿ ಮೈಸೂರು ಈ ಬಾರಿ ಮತ್ತೆ ದೇಶದ ಸ್ವಚ್ಛ ನಗರಗಳ ಟಾಪ್-10 ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಕಳೆದ ಬಾರಿ ಸಮಗ್ರ ವಿಭಾಗದಲ್ಲಿ 11ನೇ ಸ್ಥಾನಕ್ಕೆ ತಳಲ್ಪಟ್ಟಿದ್ದ ಮೈಸೂರು ಈ ಬಾರಿ 8ನೇ ಸ್ಥಾನ ಪಡೆದು ಕೊಂಡಿದೆ. ಇಷ್ಟು ಮಾತ್ರವಲ್ಲದೆ ಹಲವು ಪ್ರಶಸ್ತಿಗಳನ್ನು ಮೈಸೂರು ಈ ಬಾರಿ ಮುಡಿಗೇರಿಸಿಕೊಂಡಿದೆ.
3 ರಿಂದ 10 ಲಕ್ಷ ಜನಸಂಖ್ಯೆಯೊಳಗಿನ ನಗರಗಳಲ್ಲಿ (ಮಧ್ಯಮ ನಗರ) ದೇಶದ ನಂ.1 ಸ್ವಚ್ಛ ನಗರ ಪ್ರಶಸ್ತಿಯನ್ನು ಮುಡಿಗೇರಿಸಿ ಕೊಂಡಿದೆ. ಕಳೆದ ಬಾರಿ ಈ ವಿಭಾಗದಲ್ಲಿ ಮೈಸೂರು 7ನೇ ಸ್ಥಾನ ಪಡೆದುಕೊಂಡಿತ್ತು. 1 ರಿಂದ 10 ಲಕ್ಷ ಜನಸಂಖ್ಯೆಯೊಳಗಿನ ನಗರದಲ್ಲಿ 2ನೇ ರ‌್ಯಾಂಕ್ ಪಡೆದುಕೊಂಡಿದೆ. ಇದರೊಂದಿಗೆ ಬಯಲು ಶೌಚಮುಕ್ತ ನಗರ ಪ್ರಶಸ್ತಿ ಹಾಗೂ ತ್ಯಾಜ್ಯ ಮುಕ್ತ ನಗರಿ ಪ್ರಶಸ್ತಿ ನಗರ ಮುಡಿಗೇರಿಸಿಕೊಂಡಿದೆ. ದೆಹಲಿಯಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ಮೇಯರ್ ಶಿವಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಉಪ ಮೇಯರ್ ರೂಪಾ, ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ್ ರೆಡ್ಡಿ ಇದ್ದರು.
ಸ್ವಚ್ಛತೆಯಲ್ಲಿ ಮೈಸೂರು ನಗರದ ಸಾಧನೆ:
2015, 2016ರಲ್ಲಿ ನಡೆದ ಸ್ವಚ್ಛ ಸರ್ವೇಕ್ಷಣೆಯಲ್ಲಿ ನಗರ ಸತತ ಎರಡು ಬಾರಿ ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಮುಡಿಗೇರಿಸಿಕೊ ಂಡಿತ್ತು. 2017ರಲ್ಲಿ 5ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. 2018ರಲ್ಲಿ ಮಧ್ಯಮ ನಗರ ವಿಭಾಗದಲ್ಲಿ (3 ರಿಂದ 10 ಲಕ್ಷ ಜನಸಂಖ್ಯೆ) ದೇಶ ದ ನಂ.1 ಸ್ವಚ್ಛ ನಗರಿ ಪಟ್ಟ ಪಡೆದರೂ ಸಮಗ್ರ ವಿಭಾಗದಲ್ಲಿ 8ನೇ ಸ್ಥಾನಕ್ಕೆ ಕುಸಿತ ಕಂಡಿತು. 2019ರಲ್ಲಿ ಸಮಗ್ರ ವಿಭಾಗದಲ್ಲಿ ಮೂರನೇ ಸ್ಥಾನಕ್ಕೆ ಜಿಗಿಯಿತು. 2020ರಲ್ಲಿ ಸಮಗ್ರ ವಿಭಾಗದಲ್ಲಿ 5ನೇ ಸ್ಥಾನ ಪಡೆಯಿತು. 2020ರಲ್ಲಿ ಪ್ರಥಮ ಬಾರಿಗೆ ರ‌್ಯಾಂಕಿಂಗ್ ಹಾಗೂ ಸ್ವಚ್ಛ ನಗರಿಗೆ ಪ್ರತ್ಯೇಕ ಪ್ರಶಸ್ತಿ ನೀಡಲಾಯಿತು. ಮಧ್ಯಮ ನಗರ ವಿಭಾಗದಲ್ಲಿ (3 ರಿಂದ 10 ಲಕ್ಷ ಜನಸಂಖ್ಯೆ) ಮೈಸೂರು ದೇಶದ ನಂ.1 ಸ್ವಚ್ಛ ನಗರಿ ಪ್ರಶಸ್ತಿ ಪಡೆದರೆ ಅದೇ ವಿಭಾಗದ ರ‌್ಯಾಂಕಿಂಗ್‌ನಲ್ಲಿ 2ನೇ ಸ್ಥಾನ ಪಡೆಯಿತು.
2021ರಲ್ಲಿ ಮೈಸೂರು ಸ್ವಚ್ಛತೆಯ ಸಮಗ್ರ ವಿಭಾಗದಲ್ಲಿ 11ನೇ ಸ್ಥಾನಕ್ಕೆ, ಮಧ್ಯಮ ನಗರ ವಿಭಾಗದಲ್ಲಿ 7ನೇ ಸ್ಥಾನಕ್ಕೆ ಕುಸಿಯಿತು. 1 ರಿಂದ 10 ಲಕ್ಷ ಜನಸಂಖ್ಯೆಯೊಳಗಿನ ನಗರಗಳ ಸ್ವಚ್ಛತೆಯ ವಿಭಾಗದಲ್ಲಿ ಮೈಸೂರು ದೇಶದ ನಂ.1 ‘ಸ್ವಯಂ ಸುಸ್ಥಿರ ನಗರ’ (ಸೆಲ್ಫ್ ಸಸ್ಟೈನಬಲ್ ಸಿಟಿ) ಪ್ರಶಸ್ತಿ, ಸಫಾಯಿ ಮಿತ್ರ ಸುರಕ್ಷಾ ಪ್ರಶಸ್ತಿಯಲ್ಲಿ 5ನೇ ರ‌್ಯಾಂಕ್ ಪಡೆದುಕೊಂಡಿತು. ಪೌರಕಾರ್ಮಿಕರ ಸಮವಸ್ತ್ರ ವಿನ್ಯಾಸ ಪ್ರಶಸ್ತಿ ಪಡೆದುಕೊಂಡಿತು. 2016ರಲ್ಲಿ ಬಯಲು ಶೌಚಮುಕ್ತ ನಗರ ಪ್ರಶಸ್ತಿ ಪಡೆದುಕೊಂಡಿತು. 2019, 2020, 2021ರಲ್ಲಿರಲ್ಲಿ ಫೈವ್‌ಸ್ಟಾರ್ ರೇಟಿಂಗ್‌ನೊಂದಿಗೆ ಸತತ ಮೂರು ಬಾರಿ ತ್ಯಾಜ್ಯ ಮುಕ್ತ ನಗರಿ ಪ್ರಶಸ್ತಿ ನಗರ ಮುಡಿಗೇರಿಸಿಕೊಂಡಿತ್ತು.