ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಶಿಕ್ಷಣದ ಅವಿಭಾಜ್ಯ ಅಂಗ

17 mlv 1
ಮಳವಳ್ಳಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಾಂಸ್ಕೃತಿ, ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ರವೀಂದ್ರ ಕುಮಾರ್ ಉದ್ಘಾಟಿಸಿದರು. ಡಾ.ವಿ.ಎಸ್.ಲೋಕೇಶ್, ಶ್ರೀನಿವಾಸ್, ಯಶೋಧಾ, ಮಹೇಶ್, ಬಬ್ರುವಾಹನ ಇತರರು ಇದ್ದರು.
Published on

ಮಳವಳ್ಳಿ: ವಿದ್ಯಾರ್ಥಿಗಳು ಪಠ್ಯ ಕಲಿಕೆಯ ಜತೆಗೆ ಕ್ರೀಡಾ ಚಟುವಟಿಕೆಯಲ್ಲೂ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಡಾ.ಎಸ್.ವಿ.ಲೋಕೇಶ್ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಾಂಸ್ಕೃತಿಕ, ಕ್ರೀಡಾ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಶೈಕ್ಷಣಿಕ ದಿನಗಳಲ್ಲಿ ಶಿಕ್ಷಣದ ಜತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಪ್ರತಿಭಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಈ ಎಲ್ಲ ವಿಭಾಗಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರುವುದನ್ನು ವಿದ್ಯಾರ್ಥಿಗಳು ಅರಿತುಕೊಳ್ಳಬೇಕು ಎಂದರು.

ಪ್ರಸ್ತುತ ದಿನಮಾನಗಳಲ್ಲಿ ಶಿಕ್ಷಣ ಕ್ಷೇತ್ರದಷ್ಟೇ ಕ್ರೀಡೆ, ಕಲೆ ಮತ್ತು ಸಂಸ್ಕೃತಿ ಕ್ಷೇತ್ರಗಳಲ್ಲೂ ಸಾಧಿಸುವ ಅವಕಾಶಗಳಿವೆ. ಈ ಎರಡೂ ಕ್ಷೇತ್ರಗಳು ಬೆಳವಣಿಗೆಯಾಗಬೇಕಾದರೆ ಶಾಲಾ ಕಾಲೇಜುಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಎಲ್ಲ ಕ್ಷೇತ್ರಗಳಲ್ಲಿಯೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಪಟ್ಟಣ ಮತ್ತು ನಗರ ಪ್ರದೇಶಗಳಲ್ಲಿ ಪಾಲಕರು ಕೇವಲ ಪಠ್ಯ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದ್ದಾರೆ. ಆದರೆ ಗ್ರಾಮೀಣ ಪ್ರದೇಶಗಳ ಶಾಲಾ ಕಾಲೇಜುಗಳಲ್ಲಿ ಪಠ್ಯ ಶಿಕ್ಷಣದ ಜತೆಯಲ್ಲೇ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ವಿದ್ಯಾರ್ಥಿಗಳಿಗೆ ಪಾಲಕರು ಹಾಗೂ ಶಿಕ್ಷಕರು ಪ್ರೋತ್ಸಾಹಿಸುತ್ತಿರುವುದು ಉತ್ತಮವಾದ ಬೆಳವಣಿಗೆಯಾಗಿದೆ ಎಂದು ಶ್ಲಾಘಿಸಿದರು.

ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಕೆ.ರವೀಂದ್ರ ಕುಮಾರ್ ಮಾತನಾಡಿ, ಇಂದಿನ ಪೈಪೋಟಿ ಕಾಲಮಾನದಲ್ಲಿ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲೂ ಸಾಧನೆಗೈಯಲು ಬಹಳಷ್ಟು ವೇದಿಕೆ ಇರುವುದರಿಂದ ಕಲಿಕಾ ದಿನಗಳಲ್ಲೇ ಎಲ್ಲ ರೀತಿಯ ಆಟೋಟಗಳಲ್ಲಿ ಆಸಕ್ತಿಯಿಂದ ಪಾಲ್ಗೊಂಡು ಪರಿಣಿತಿ ಪಡೆದಿರಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಪ್ರಾಂಶುಪಾಲೆ ಡಿ.ಯಶೋಧಾ, ಶಿವಕುಮಾರಸ್ವಾಮಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಮಹೇಶ್, ಸಿಡಿಸಿ ಸದಸ್ಯ ಬಬ್ರುವಾಹನ, ಕ್ರೀಡಾ ಸಂಚಾಲಕ ಕೆ.ಎಲ್.ಮಲ್ಲೇಶ್, ಪ್ರಾಧ್ಯಾಪಕರಾದ ನಾಗೇಶ್, ಅನಿಲ್ ಕುಮಾರ್ , ಅನೂಪ್, ರಘು, ಕುಮಾರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net