

ಚಿಕ್ಕಮಗಳೂರು: ಲೋಕಸಭಾ ಚುನಾವಣೆಯ ಮತದಾನ ರಾಜ್ಯದಲ್ಲಿ ಮುಕ್ತಾಯವಾಗಿರುವುದರಿಂದ ಚುನಾವಣಾ ಆಯೋಗವು ಮಾದರಿ ನೀತಿ ಸಂಹಿತೆಯಲ್ಲಿ ಸಡಿಲಿಕೆ ನೀಡಿದ್ದು, ಬರಗಾಲ ನಿರ್ವಹಣೆ ಸೇರಿದಂತೆ ಅಭಿವೃದ್ಧಿ ಕೆಲಸದ ಕಡೆ ಅಧಿಕಾರಿಗಳು ಹೆಚ್ಚು ಗಮನ ಹರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ವೀಡಿಯೋ ಕಾನ್ಫರೆನ್ಸ್ ನಲ್ಲಿ ಡಿಸಿ, ಜಿಪಂ ಸಿಇಒ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಗೃಹ ಕಛೇರಿ ಕೃಷ್ಣಾದಿಂದ ವಿಡಿಯೋ ಸಂವಾದದ ಮೂಲಕ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದ ಅವರು, ಮುಂಗಾರು ಪೂರ್ವ ಮಳೆ ಎಲ್ಲೆಡೆ ಉತ್ತಮವಾಗಿದೆ. ಹೀಗಾಗಿ ಬಿತ್ತನೆ ಕಾರ್ಯ ಚುರುಕಾಗಬೇಕು. ಬಿತ್ತನೆ ಬೀಜ, ರಸಗೊಬ್ಬರ, ಕೀಟ ನಾಶಕಗಳು ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಸಾಕಷ್ಟಿದೆ. ಜಿಲ್ಲೆ, ತಾಲೂಕುಗಳಿಗೆ ಅನುಗುಣವಾಗಿ ಬೀಜ, ರಸಗೊಬ್ಬರ, ಕೀಟನಾಶಕ ಸರಿಯಾಗಿ ಪೂರೈಸಬೇಕು. ಇದಕ್ಕೆ ಸರಿಯಾಗಿ ಯೋಜನೆ ಮಾಡಿ ವಿತರಣೆ ಮಾಡಬೇಕು. ರೈತರಿಂದ ಯಾವುದೇ ದೂರು ಬಾರದಂತೆ ನೋಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮಳೆಗಾಲ ಆರಂಭಕ್ಕೆ ೧೫-೨೦ ದಿನ ಉಳಿದಿದೆ. ಮಳೆಗಾಲ ಆರಂಭವಾದ ನಂತರ ಹೊಸ ನೀರಿನಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದೆ. ಆರೋಗ್ಯ ಇಲಾಖೆಯು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಂಡು ಅದರ ನಿಯಂತ್ರಣಕ್ಕೆ ಮುಂದಾಗಬೇಕು. ಎಲ್ಲಿಯೂ ಕಲುಷಿತ ನೀರು ಪೂರೈಕೆಯಾಗದಂತೆ ಎಚ್ಚರ ವಹಿಸಬೇಕು. ನೀರು ಪೂರೈಕೆ ಮುನ್ನ ಅದು ಕುಡಿಯಲು ಯೋಗ್ಯವಾಗಿದೆಯೇ ಎಂದು ಪರೀಕ್ಷಿಸಿ ಪೂರೈಸಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಜಿಲ್ಲೆಯ ಕುರಿತು ಮಾಹಿತಿ ನೀಡಿ, ಜಿಲ್ಲೆಯಲ್ಲಿ ಸಾಕಷ್ಟು ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ದಾಸ್ತಾನು ಇದೆ. ಬಿತ್ತನೆಗೆ ಈಗಾಗಲೇ ಎಲ್ಲ ಸಿದ್ಧತೆ ರೈತರು ಮಾಡಿಕೊಂಡಿದ್ದಾರೆ. ಜಾನುವಾರುಗಳಿಗೆ ಬೇಕಾಗುವ ಮೇವು ಲಭ್ಯವಿದೆ ಎಂದರು.
೨೦೨೩-೨೪ನೇ ಸಾಲಿನ ಜಿಲ್ಲೆಯ ಬರಪೀಡಿತ ತಾಲೂಕುಗಳ ೩೮,೩೯೨ ರೈತರ ಖಾತೆಗೆ ಒಟ್ಟು ೩೧.೩೨ ಕೋಟಿ ರೂ. ಬರ ಪರಿಹಾರ ಹಣವನ್ನು ಡಿಬಿಟಿ ತಂತ್ರಾAಶದ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗಿದೆ. ರೈತರ ಖಾತೆಗೆ ಜಮೆ ಆಗಿರುವ ಹಣವನ್ನು ರೈತರ ಸಾಲಕ್ಕೆ ಕಡಿತಗೊಳಿಸದಂತೆ ಎಲ್ಲ ಬ್ಯಾಂಕುಗಳಿಗೆ ನಿರ್ದೇಶನ ನೀಡುವಂತೆ ಲೀಡ್ ಬ್ಯಾಂಕ್ ಮ್ಯಾನೇಜರ್ ಅವರಿಗೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿನ ಮಲೆನಾಡು ಪ್ರದೇಶಗಳಲ್ಲಿರುವ ಕಾಲು ಸಂಕಗಳ ದುರಸ್ತಿಗೆ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ವಿಡಿಯೋ ಸಂವಾದದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ, ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಫ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ವೀಡಿಯೋ ಸಂವಾದಕ್ಕೆ ಚಿಕ್ಕಮಗಳೂರಿನಿಂದ ಜಿಪಂ ಸಿಇಒ ಡಾ. ಗೋಪಾಲಕೃಷ್ಣ, ಎಡಿಸಿ ನಾರಾಯಣರಡ್ಡಿಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮತ್ತಿತರರಿದ್ದರು.