

ಮೈಸೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರ ಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ನಿರ್ಧಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ಸೂಚಿಸಿದ್ದಾರೆ.
ಪಂಡಿತ್ ರಾಜೀವ್ ತಾರಾನಾಥ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ಚೇತರಿಕೆಗೆ ಶುಭ ಹಾರೈಸಿ ಡಾ.ಎಚ್.ಸಿ.ಮಹದೇವಪ್ಪ ಅವರು ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸುವುದಾಗಿ ಭರವಸೆ ನೀಡಿದ್ದರು. ಮುಖ್ಯಮಂತ್ರಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದ ಸಚಿವರು, ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿದ ತಾರಾನಾಥ್ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದಿಂದ ಭರಿಸಬೇಕೆಂದು ಮೌಖಿಕ ಪ್ರಸ್ತಾವನೆ ಸಲ್ಲಿಸಿದ್ದರು. ಸಚಿವರ ಮಾತಿಗೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದು, ಪಂಡಿತ್ ರಾಜೀವ್ ತಾರಾನಾಥ್ ಅವರು ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.