ಮುಖ್ಯಮಂತ್ರಿ ಬದಲಾವಣೆ ವಿಚಾರ: ಸಿಎಂ ರಾಜಕೀಯ ಕಾರ್ಯದರ್ಶಿ ಹೇಳಿದ್ದೇನು?

CMBommai
Published on

ದಾವಣಗೆರೆ: ರಾಜ್ಯದಲ್ಲಿ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆ ವಿಚಾರ ಆಗಾಗ ಚರ್ಚೆಗೆ ಬರುತ್ತಿದ್ದು, ಅದೀಗ ಇನ್ನೊಮ್ಮೆ ಮುನ್ನೆಲೆಗೆ ಬಂದಿದೆ. ಚುನಾವಣೆ ಹತ್ತಿರ ಇರುವ ಈ ಸಮಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಚರ್ಚೆ ಆಗುತ್ತಿದ್ದು, ಆ ಸಂಬಂಧ ಸಿಎಂ ರಾಜಕೀಯ ಕಾರ್ಯದರ್ಶಿ ಪ್ರತಿಕ್ರಿಯಿಸಿದ್ದಾರೆ.

ಸಿಎಂ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ದಾವಣಗೆರೆಯ ಹೊನ್ನಾಳಿಯಲ್ಲಿ ಸಿಎಂ ಬದಲಾವಣೆ ವಿಚಾರವಾಗಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ ಗುಂಪು, ಡಿ.ಕೆ.ಶಿವಕುಮಾರ್ ಗುಂಪು, ಖರ್ಗೆ ಗುಂಪುಗಳಾಗಿದ್ದು, ಅವರು ತಮ್ಮಲ್ಲಿನ ಭಿನ್ನಾಭಿಪ್ರಾಯ ಮುಚ್ಚಿಟ್ಟುಕೊಳ್ಳಲು ಬಿಜೆಪಿ ವಿರುದ್ಧ ಮಾತನಾಡುತ್ತಾರೆ. ಅವರು ಮೊದಲು ತಮ್ಮಲ್ಲಿನ ಭಿನ್ನಾಭಿಪ್ರಾಯ ಸರಿಪಡಿಸಿಕೊಳ್ಳಲಿ ಎಂದು ರೇಣುಕಾಚಾರ್ಯ ಹೇಳಿದ್ದಾರೆ.

ಕಾಂಗ್ರೆಸ್​ನವರು ಭ್ರಮಾಲೋಕದಲ್ಲಿದ್ದಾರೆ ಎಂದು ಹೇಳಿರುವ ರೇಣುಕಾಚಾರ್ಯ, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿಗಳ ಬದಲಾವಣೆ ಹೇಳಿಕೆ ಊಹಾಪೋಹವಷ್ಟೇ. ಮುಂದಿನ ಅವಧಿಗೂ ಬಸವರಾಜ್ ಬೊಮ್ಮಾಯಿಯವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂಬುದಾಗಿ ರೇಣುಕಾಚಾರ್ಯ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net