ಜು.9ರಂದು ಇಂಡಿಗೆ ಸಿಎಂ-ಡಿಸಿಎಂ ಆಗಮನ, ಅಗತ್ಯ ಸಿದ್ಧತೆ ಕೈಗೊಳ್ಳಲು ಅಧಿಕಾರಿಗಳಿಗೆ ಶಾಸಕ ಯಶವಂತರಾಯಗೌಡ ಪಾಟೀಲ ಸೂಚನೆ

INDI MLA MEETING MINI VIDHANASOUDHA
ಇಂಡಿ ಮಿನಿ ವಿಧಾನಸೌಧದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಅಧಿಕಾರಿಗಳ ಸಭೆ ನಡೆಸಿದರು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ ಇದ್ದಾರೆ.
Published on

ವಿಜಯಪುರ: ಅಂದಾಜು 4 ಸಾವಿರ ಕೋಟಿ ರೂಪಾಯಿ ಅನುದಾನದಡಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ, ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸುವುದಕ್ಕಾಗಿ ಜು. 9 ರಂದು ಇಂಡಿ ಪಟ್ಟಣಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಆಗಮಿಸಲಿದ್ದಾರೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

ಇಂಡಿ ಮಿನಿ ವಿಧಾನಸೌಧದಲ್ಲಿ ಗುರುವಾರ ಆಯೋಜಿಸಿದ್ಧ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಈ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇಂಡಿ ತಾಲೂಕಿನಲ್ಲಿ ಕೈಗೊಂಡಿರುವ 19 ಕೆರೆ ತುಂಬುವ ಯೋಜನೆ, ತಿಡಗುಂದಿ ಏತ ನೀರಾವರಿ ವಿಸ್ತರಣೆ, ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ಹಂತ-2 ಮತ್ತು 3, ತಡವಲಗಾ ಕೆಜಿಬಿವಿ ಶಾಲಾ ಕಟ್ಟಡ ನಿರ್ಮಾಣ, ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ಮೌಲಾನಾ ಅಬುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಾಂತ್ರಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಕೊಠಡಿಗಳ ಕಾಮಗಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಝಳಕಿ, ಮಿರಗಿ ಗ್ರಾಮದ ಪಶು ಆಸ್ಪತ್ರೆ ಉದ್ಘಾಟನೆ, ಇಂಡಿ ತಾಲೂಕಿನ ಲಾಳಸಂಗಿ ಕೆರೆ ಸುಧಾರಣೆ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳು, ಲಚ್ಯಾಣ ಗ್ರಾಮದ ಬಾಲಕರ ವಸತಿ ನಿಲಯ ನಿರ್ಮಾಣ, ವಿವಿಧ ಸಮುದಾಯ ಭವನಗಳ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ, ಮೆಘಾ ಮಾರುಕಟ್ಟೆ ಲೋಕಾರ್ಪಣೆ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಜ್-ಕಂ-ಬ್ಯಾರೇಜ್ ನಿರ್ಮಾಣದ ಭೂಮಿ ಪೂಜೆ, ನಗರದ ತಾಲೂಕು ಕ್ರೀಡಾಂಗಣದ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿಪೂಜೆ, ಪ್ರಗತಿ ಪಥ ಯೋಜನೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ.

ಇಂಡಿ ಪಟ್ಟಣದ ಪೊಲೀಸ್ ಪರೇಡ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಶ್ರಮಿಸಬೇಕು. ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಯೋಜನೆ-ಕಾರ್ಯಕ್ರಮಗಳ ಕುರಿತು ಪೂರ್ವ ತಯಾರಿ ಮಾಡಿಕೊಂಡು, ಕಾಮಗಾರಿಗಳ ಕುರಿತು ಸಮಗ್ರವಾದ ವರದಿ ಸಿದ್ಧಪಡಿಸಿ, ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾತನಾಡಿ, ಇಂಡಿ ತಾಲೂಕಿನಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಚಾಲನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮ ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಶಂಕು ಸ್ಥಾಪನೆ- ಚಾಲನೆ ಹಾಗೂ ಲೋಕಾರ್ಪಣೆಗೊಳ್ಳುವ ಯೋಜನೆಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಈ ಪಟ್ಟಿಯಲ್ಲಿ ಯಾವುದಾದರೂ ವ್ಯತ್ಯಾಸಗಳಿದ್ದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಂಡು ಯಶಸ್ವಿ ಕಾರ್ಯಕ್ರಮಕ್ಕೆ ಎಲ್ಲರೂ ಶ್ರಮಿಸಬೇಕು. ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆ ಹಾಗೂ 19 ಕೆರೆ ತುಂಬುವ ಯೋಜನೆಯ ಕುರಿತಾದ ಕಿರು ಸಾಕ್ಷ್ಯಚಿತ್ರ ಕಾರ್ಯಕ್ರಮದಲ್ಲಿ ಪ್ರದರ್ಶನ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿ ಲೋಗೋ ಸಿದ್ಧಪಡಿಸಿ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಹೇಳಿದರು.

ಜಿಪಂ ಸಿಇಒ ರಿಷಿ ಆನಂದ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಇಂಡಿ ಎಸಿ ಅನುರಾಧಾ ವಸ್ತ್ರದ, ತಹಸೀಲ್ದಾರ್ ವಿ.ಎಸ್. ಕಡಕಭಾವಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net