ಬರಗಾಲ ಪರಿಸ್ಥಿತಿ ಎದುರಿಸಲು ಸಜ್ಜಾಗಿ : ಸಿಎಂ ಸೂಚನೆ

siddaramaiah
Published on

ಮೈಸೂರು: ಈ ಬಾರಿ ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಎದುರಾಗಿದ್ದು, ಬರಗಾಲವನ್ನು ಎದುರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಕುಡಿಯುವ ನೀರು, ಬರ ನಿರ್ವಹಣೆ, ಕೃಷಿ, ಮೇವು ಹಾಗೂ ಉದ್ಯೋಗಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯೊಂದಿಗೆ ಹಮ್ಮಿಕೊಂಡಿದ್ದ ವಿಡಿಯೋ ಸಂವಾದದಲ್ಲಿ ಮಾತನಾಡಿ, ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು. ಕುಡಿಯುವ ನೀರು ಕೊರತೆ, ಬೆಳೆಹಾನಿ, ಮೇವಿನ ಕೊರತೆ ಸೇರಿದಂತೆ ಇದುವರೆಗೆ ಆಗಿರುವ ಸಮಸ್ಯೆಗಳು ಮತ್ತು ಮುಂದೆ ಉಸ್ಭವಿಸಬಹುದಾದ ಸಮಸ್ಯೆಗಳ ನಿವಾರಣೆಗೆ ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಪರಿಸ್ಥಿತಿ ಗಂಭೀರವಾಗಲಿದ್ದು, ಕೆಲವೆಡೆ ಪೂರ್ವ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ. ಆದಾಗ್ಯೂ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಿಸ್ಥಿತಿ ಅವಲೋಕಿಸಿ ಸೂಕ್ತ ಯೋಜನೆ ರೂಪಿಸಬೇಕು. ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು ಎಂದು ಸೂಚನೆ ನೀಡಿದರು.

ಕುಡಿಯುವ ನೀರಿನ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಲಿದೆ. ಬರಗಾಲ ಸಂದರ್ಭದಲ್ಲಿ ನರೇಗಾ ಉದ್ಯೋಗ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಬೇಕು ಎಂದು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ನರೇಗಾ ಉದ್ಯೋಗ ದಿನಗಳನ್ನು ಹೆಚ್ಚಿಸುವುದರಿಂದ ಜನರು ಗುಳೆ ಹೋಗುವುದನ್ನು ತಪ್ಪಿಸಬಹುದು ಎಂದು ಅಭಿಪ್ರಾಯಪಟ್ಟರು.

ಕುಡಿಯುವ ನೀರು ಸಮಸ್ಯೆ ಕಂಡುಬಂದಾಗ ಅಧಿಕಾರಿಗಳು ತಕ್ಷಣವೇ ಸ್ಪಂದಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ತೋರುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಜನರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಮ್ ಆರಂಭಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೆ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು. ತಾಲೂಕು ಮಟ್ಟದ ಟಾಸ್ಕ್ ಫೋರ್ಸ್‌ಗಳು ನಿಯಮಿತವಾಗಿ ಸಭೆ ನಡೆಸುವ ಮೂಲಕ ಮುಂಜಾಗ್ರತಾ ಕ್ರಮಗಳ ಬಗ್ಗೆ ನಿರ್ಧರಿಸಬೇಕು ಎಂದು ಹೇಳಿದರು.

ಮೇವಿನ ಕಿಟ್‌ಗಳನ್ನು ರೈತರಿಗೆ ನೀಡಲಾಗಿದೆ. ರೈರು ಬೆಳೆದ ಮೇವು ಶೇಖರಣೆಗೆ ಕ್ರಮ ವಹಿಸಬೇಕು. ಇದಲ್ಲದೇ ಅಂತರ ಜಿಲ್ಲಾ ಮೇವು ಸಾಗಾಣಿಕೆ ಮೇಲೆ ನಿಗಾ ವಹಿಸಬೇಕು. ಬರ ನಿರ್ವಹಣೆಗೆ ಸರ್ಕಾರ ಅನೇಕ ಕ್ರಮಗಳನ್ನು ಈಗಾಗಲೇ ತೆಗೆದುಕೊಂಡಿದೆ. ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಿಂದ ಈ ಬಾರಿ ಬರಗಾಲದ ತೀವ್ರತೆಯಲ್ಲಿಯೂ ಜನರಿಗೆ ಅನುಕೂಲವಾಗಿದೆ. ಜಿಲ್ಲಾಧಿಕಾರಿ ಖಾತೆಯಲ್ಲಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು. ಹೆಚ್ಚುವರಿಯಾಗಿ ಜಿಲ್ಲೆಗೆ 2 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.

ರೈತರಿಗೆ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗಬಾರದು. ಹೊಸ ಕೊಳವೆಬಾವಿಗಳಿಗೆ ಯಾವುದೇ ನೆಪ ಹೇಳದೆ ಕೂಡಲೇ ವಿದ್ಯುತ್ ಸಂಪರ್ಕ ಒದಗಿಸಬೇಕು. ಅಗತ್ಯ ಕಂಡುಬಂದರೆ ಖಾಸಗಿ ಕೊಳವೆಬಾವಿಗಳು ಹಾಗೂ ಟ್ಯಾಂಕರ್‌ಗಳ ಮಾಲೀಕರ ಜತೆ ಮುಂಚಿವಾಗಿಯೇ ಒಪ್ಪಂದ ಮಾಡಿಕೊಳ್ಳಬೇಕು. ಹೀಗೆ ಮಾಡುವ ಮೂಲಕ ಜೂನ್ ಅಂತ್ಯದವರೆಗೆ ನೀರು ಕೊರತೆಯಾಗದಂತೆ ಎಚ್ಚರಿಕೆ ವಹಿಸಬಹುದು. ಇದರಲ್ಲಿ ನಿರ್ಲಕ್ಯ ತೋರುವ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. ಚುನಾವಣಾ ನೀತಿಸಂಹಿತೆ ಜಾರಿಯಾಗಲಿರುವುದರಿಂದ ಚುನಾವಣಾ ಕೆಲಸದ ಜತೆಗೆ ಬರ ನಿರ್ವಹಣೆಯನ್ನು ನಿರ್ಲಕ್ಷಿಸಬಾರದು. ಬರನಿರ್ವಹಣೆಗೆ ನೀತಿಸಂಹಿತೆಯು ಅಡ್ಡಿಯಾಗುವುದಿಲ್ಲ ಎಂದರು.

ಮುಖ್ಯಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ, ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಇರುವ ಕಡೆ ಅಧಿಕಾರಿಗಳು ಖುದ್ದು ಭೇಟಿ ಕುಡಿಯುವ ನೀರು ಸಮಸ್ಯೆಯಾಗದಂತೆ ಆದ್ಯತೆಯ ಮೇರೆಗೆ ಅಗತ್ಯ ಕ್ರಮ ವಹಿಸಬೇಕು ತಿಳಿಸಿದರು.

ಚುನಾವಣೆ ಘೋಷಣೆಯಾದರೂ ಬರ ನಿರ್ವಹಣಾ ಕಾರ್ಯಕ್ಕೆ ತೊಂದರೆ ಇಲ್ಲ. ಸಾಕಷ್ಟು ಹಣಕಾಸು ಲಭ್ಯವಿರುವುದರಿಂದ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಕೊರತೆಯಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬರನ್ನು ಕುಡಿಯುವ ನೀರು ಸಮಸ್ಯೆಗೆ ನೋಡೆಲ್ ಇಂಜಿನಿಯರ್ ನೇಮಕ ಮಾಡಬೇಕು. ಅವರು ಪ್ರತಿದಿನ ವರದಿ ನೀಡುವಂತೆ ಸಭೆಯಲ್ಲಿ ತಿಳಿಸಿದರು.

ಕುಡಿಯುವ ನೀರು ಪೂರೈಕೆ ಮಾಡುವಾಗ ನಿಯಮಿತವಾಗಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆ ಮಾಡಿ ನೀರು ಪೂರೈಸಲು ಅಗತ್ಯ ಕ್ರಮ ವಹಿಸಬೇಕು ಎಂದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net