ಸಿಎಂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ

prahlad joshi
Published on

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರಿಂದ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಿದ್ದರು. ಪಕ್ಷದಿಂದ ಯಾವುದೇ ಒತ್ತಡ ಇಲ್ಲದಿದ್ದರೂ ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದರು. ಅದೇ ರೀತಿ ಸಿದ್ದರಾಮಯ್ಯ ನಡೆದುಕೊಳ್ಳಲಿ ಎಂದರು.

ರಾಜ್ಯಪಾಲರು ಸಾಕಷ್ಟು ಅಳೆದು-ತೂಗಿ ಕಾನೂನು ತಜ್ಞರ ಸಲಹೆ ಪಡೆದು ಮುಡಾ ಹಗರಣದಲ್ಲಿ ಸಮಗ್ರ ತನಿಖೆ ನಡೆಯಬೇಕು ಎಂಬ ಉದ್ದೇಶದಿಂದ ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಈ ಪ್ರಕರಣದ ಗಂಭೀರತೆಯ ಹಿನ್ನೆಲೆಯಲ್ಲಿ ಇದು ಸರಿಯಾದ ಕ್ರಮವಾಗಿದೆ. ಸಾರ್ವಜನಿಕ ಜೀವನದಲ್ಲಿ ಇರುವವರು ಶುದ್ಧತೆಯನ್ನು ಕಾಪಾಡಿಕೊಳ್ಳಬೇಕು ಎಂಬ ನಿಟ್ಟಿನಲ್ಲಿ ರಾಜ್ಯಪಾಲರು ಇಟ್ಟಿರುವ ದಿಟ್ಟ ಹೆಜ್ಜೆಯಾಗಿದೆ ಎಂದು ಹೇಳಿದರು.

ತಾವು ಯಾವುದೇ ತಪ್ಪು ಮಾಡಿಲ್ಲ. ತಮ್ಮದು ತೆರೆದ ಪುಸ್ತಕ ಎಂದು ಹೇಳಿಕೊಳ್ಳುತ್ತ ಬಂದಿರುವ ಸಿಎಂ ಸಿದ್ದರಾಮಯ್ಯ ತನಿಖೆಗೆ ಯಾವುದೇ ಅಡೆತಡೆ ಮಾಡದೇ ಸಹಕರಿಸಸಬೇಕು. ತಪ್ಪು ಮಾಡದಿದ್ದಲ್ಲಿ ಯಾವ ತನಿಖೆ ಏಜೆನ್ಸಿಯಿಂದಲೂ ತೊಂದರೆ ಆಗುವುದಿಲ್ಲ ಎಂದರು.

ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದರಿಂದ ಕಾನೂನು ಹೋರಾಟ ಮಾಡಲು ಸಿದ್ಧರಾಮಯ್ಯ ಅವರು ಸ್ವತಂತ್ರರು. ಅದಕ್ಕೆ ನಮ್ಮದೇನೂ ತಕರಾರು ಇಲ್ಲ. ಹಿಂದೆ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಅಂದಿನ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರಲಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಡಿಪೆಂಡ್ ಮಾಡಿಕೊಳ್ಳುವುದು ಸರಿಯಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ರಾಜ್ಯಪಾಲರ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಾವು ಮಾಡುತ್ತಿಲ್ಲ. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಲಭಿಸಿದ್ದರೂ ಕಾಂಗ್ರೆಸ್ ಹಿಂಬಾಗಿಲಿನಿಂದ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿತ್ತು. ಹಾಗಾಗಿ ಬಳಿಕ ನಾವು ಜೆಡಿಎಸ್ ಜತೆಗೂಡಿ ಸರ್ಕಾರ ರಚನೆ ಮಾಡಿದ್ದೇವು. ಈ ಬಾರಿ ಆ ರೀತಿಯ ಯಾವುದೇ ಪ್ರಯತ್ನ ಇಲ್ಲ ಎಂದು ಸ್ಪಷ್ಟಪಡಿಸಿದರು.

ಶಾಸಕ ಎಂ.ಆರ್. ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net