

ಬೆಳಗಾವಿ: ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದಲ್ಲಿ ತನಿಖೆ ಆಗದ ಹೊರತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆ ಬರುವುದಿಲ್ಲ. ಪಕ್ಷದ ಹೈಕಮಾಂಡ್ ಸೇರಿ ಎಲ್ಲ ಸಚಿವರು, ಶಾಸಕರು ಅವರ ಬೆಂಬಲಕ್ಕೆ ನಿಲುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತ ನಾಡಿದ ಅವರು, ಮುಡಾ ಪ್ರಕರಣದಲ್ಲಿ ಹೈಕೋರ್ಟ್ ಮುಖ್ಯ ಮಂತ್ರಿ ವಿರುದ್ಧ ತನಿಖೆ ಮುಂದುವರೆಸಲು ಆದೇಶಿಸಿದೆಯಾದರೂ ಮೊದಲು ತನಿಖೆ ನಡೆದು ಪ್ರಕರಣದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದು ಗೊತ್ತಾಗಬೇಕು. ಅಲ್ಲಿಯವರೆಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿಯೇ ಮುಂದುವರೆಯುತ್ತಾರೆ ಎಂದರು.
ಮುಡಾ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶದ ವಿರುದ್ಧ ಮುಖ್ಯಮಂತ್ರಿಗಳು ಕಾನೂನು ಹೋರಾಟ ಮುಂದುವರಿಸಲಿದ್ದಾರೆ. ಇದು ಭ್ರಷ್ಟಾಚಾರದ ಪ್ರಕರಣ ಅಲ್ಲವೇ ಅಲ್ಲ. ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಷಡ್ಯಂತ್ರ ನಡೆಯುತ್ತಿದೆ. ರಾಜೀನಾಮ ನೀಡುವ ನೈತಿಕತೆ ವಿಷಯ ಬಂದಾಗ ಚರ್ಚಿಸೋಣ ಎಂದರು.
ಶಾಸಕ ಆಸೀಫ್ ಸೇಠ್, ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ ಇತರರಿದ್ದರು.
ಪಾಲಿಕೆಯ ಆಸ್ತಿ ಖಾಸಗಿ ವ್ಯಕ್ತಿಗೆ ಪರಭಾರೆ: ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಒಂದು ಎಕರೆ ಸಾರ್ವಜನಿಕ ಆಸ್ತಿಯನ್ನು ಖಾಸಗಿ ವ್ಯಕ್ತಿಗೆ ಪರಭಾರೆ ಮಾಡಿರುವುದನ್ನು ತನಿಖೆಗೆ ಒಳಪಡಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಪಾಲಿಕೆ ಒಡೆತನದಲ್ಲಿರುವ ಸರ್ಕಾರಿ ಆಸ್ತಿಗಳು ಖಾಸಗಿ ವ್ಯಕ್ತಿಗಳಿಗೆ ಪರಭಾರೆ ಮಾಡಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರಾದರೂ ಶಿಕ್ಷೆಗೆ ಗುರಿಯಾಗುವವರು ಅಧಿಕಾರಿಗಳೇ ಎನ್ನುವುದನ್ನು ಮರೆಯಬಾರದು ಎಂದರು.
ಶಹಾಪುರದ ಬ್ಯಾಂಕ್ ಆಫ್ ಇಂಡಿಯಾದಿಂದ ಹಳೇ ಪಿಬಿ ರಸ್ತೆ ಕೂಡುವ ರಸ್ತೆ ನಿರ್ಮಾಣವೇ ನಿಯಮ ಬಾಹಿರವಾಗಿದೆ. ಭೂಸ್ವಾಧೀನಕ್ಕೆ ಪ್ರತಿಯಾಗಿ ಪರಿಹಾರ ಪಾವತಿಯೂ ಆಗಿಲ್ಲ. ರಸ್ತೆಗಾಗಿ ದುರ್ಬಳಕೆ ಮಾಡಿರುವ ಹಣವನ್ನು ಪಾಲಿಕೆ, ಸ್ಮಾರ್ಟ್ ಸಿಟಿ ಅಧಿಕಾರಿಗಳಿಂದಲೇ ವಸೂಲಿ ಮಾಡಲಾಗುವುದು. ಯಾರ ಒತ್ತಡಕ್ಕೆ ಮಣಿದು ಅಧಿಕಾರಿಗಳು ರಸ್ತೆ ನಿರ್ಮಿಸಿದ್ದಾರೆ ಎಂಬುದೂ ತನಿಖೆಯ ಬಳಿಕ ಗೊತ್ತಾಗಲಿದೆ. ಇಲಾಖೆಯಿಂದಲೇ ತನಿಖೆ ನಡೆಸಲು ಸರ್ಕಾರದ ಮೇಲೆ ಒತ್ತಡ ಹಾಕಲಾಗುವುದು ಎಂದ ಸತೀಶ್ ಜಾರಕಿಹೊಳಿ, ಪ್ರತಿವರ್ಷ ಮಳೆಗಾಲ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆ ಸೃಷ್ಟಿಸುತ್ತಿರುವ ಬಳ್ಳಾರಿ ನಾಲಾ ಸಮಸ್ಯೆಗೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಯೋಜನೆ ರೂಪಿಸಲಾಗುವುದು ಎಂದರು.