

ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಶನಿವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಸಿದ್ದರಾಮಯ್ಯ ವಿಚಾರದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಮುಂದೆ ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾಯ್ದು ನೋಡಬೇಕಿದೆ.
ವಾಲ್ಮೀಕಿ ನಿಗಮ ಮತ್ತು ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದರು.
ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದುದು. ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಕ್ರಮ ಕೈಗೊಂಡಿದ್ದಾರೆ. ಬಿಜೆಪಿ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಹೋರಾಟ ಮುಂದುವರಿಸಲಿದೆ. ಕಾನೂನಾತ್ಮಕವಾಗಿಯೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.
ಏನೂ ತಪ್ಪಿಲ್ಲ ಅಂದರೆ ಸಿಎಂ ರಾಜೀನಾಮೆ ಕೊಟ್ಟು ತನಿಖೆ ಎದುರಿಸಲಿ. ತಪ್ಪಿಲ್ಲ ಅಂತ ವರದಿ ಬಂದರೆ ಮತ್ತೆ ತಮ್ಮ ಪದವಿಯಲ್ಲಿ ಮುಂದುವರಿಯಲಿ. ಜನ 136 ಸೀಟು ಕೊಟ್ಟು ಅವರಿಗೆ ಅಧಿಕಾರ ಮಾಡುವ ಅವಕಾಶ ಕೊಟ್ಟಿದ್ದಾರೆ.
ಸರ್ಕಾರ ಇಳಿಸೋದು ನಮಗೆ ಸಂತೋಷದ ವಿಚಾರ ಅಲ್ಲ, ಉತ್ತಮ ಆಡಳಿತಕ್ಕಾಗಿ ಪ್ರತಿ ಪಕ್ಷಸ್ಥಾನದಲ್ಲಿ ನಿಂತು ಹೋರಾಟ ಮಾಡುತ್ತಿದ್ದೇವೆ ಎಂದರು.