

ಬೆಂಗಳೂರು:ಕಲಾಸಕ್ತರು ಕಲಾಕೃತಿ ಖರೀದಿಸಿ ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರಸಂತೆಯ ಆಶಯ ಈಡೇರಿದಂತಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಚಿತ್ರಕಲಾ ಪರಿಷತ್ತು ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಭಾನುವಾರ ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯದ ಸಂಸತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರಕಲಾ ಪರಿಷತ್ತು ಮಾಡುತ್ತಿರುವ ಕಾರ್ಯ ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರಸಂತೆ ನಡೆಯುವುದು ಹೆಮ್ಮೆಯ ಸಂಗತಿ. ಅನೇಕ ಚಿತ್ರಕಲಾವಿದರಿಗೆ ವೇದಿಕೆಯನ್ನು ಕಲ್ಪಿಸಿ ಅವರ ಪ್ರತಿಭೆಯನ್ನು ಪ್ರದರ್ಶಿಸಿ ಆಸಕ್ತರಿಗೆ ಕೊಳ್ಳುವ ಅವಕಾಶವನ್ನೂ ಚಿತ್ರಸಂತೆ ಒದಗಿಸುತ್ತಿದೆ ಎಂದರು.
ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮಾ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ.ಒಬ್ಬ ಮಹಿಳೆಗೆ ಶಿಕ್ಷಣ ಸಿಕ್ಕಿರೆ ಆಕೆಯ ಕುಟುಂಬವೇ ಕಲಿತಂತಾಗುತ್ತದೆ ಎಂದು ಸಿಎಂ ವ್ಯಾಖ್ಯಾನಿಸಿದರು.ಸಚಿವರಾದ ಬೈರತಿ ಸುರೇಶ್, ಎಂ.ಸಿ.ಸುಧಾಕರ್, ಸಂಸದ ಪಿ.ಸಿ.ಮೋಹನ್, ಚಿತ್ರಕಲಾ ಪರಿಷತ್ತು ಅಧ್ಯಕ್ಷ ಬಿ.ಎಲ್.ಶಂಕರ್ ಸೇರಿ ಮತ್ತಿತರರಿದ್ದರು.
ಚಿತ್ರ ಪ್ರಭಾವಶಾಲಿ
ಸಂವಿಧಾನದ ಪೀಠಿಕೆಯನ್ನು ಚಿತ್ರಸಂತೆಯಲ್ಲಿ ಪ್ರದರ್ಶನಕ್ಕೆ ಇಟ್ಟಿರುವುದು ವಿಶೇಷವಾದದ್ದು. ಚಿತ್ರಸಂತೆಯಲ್ಲಿ ಸಮಾಜದ ಎಲ್ಲ ವರ್ಗದ ಜನರನ್ನೂ ಪ್ರತಿನಿಧಿಸುತ್ತಿದೆ. ಒಂದು ಚಿತ್ರ ಸಾವಿರ ಪದಗಳಿಗಿಂತಲೂ ಪ್ರಭಾವಶಾಲಿ. ಚಿತ್ರದ ಮೂಲಕ ಜನಜೀವನ, ಸಂಸತಿ, ಪರಂಪರೆ ಬಿಂಬಿಸಬಹುದು. ಚಿತ್ರಕಲಾ ಪರಿಷತ್ತು ಉತ್ತಮ ಕೆಲಸ ಮಾಡುತ್ತಿದೆ. ನಾನು 7ನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಶೋಷಣೆ,ತಾರತಮ್ಯ,ಅನ್ಯಾಯಕ್ಕೆ ಒಳಗಾದ ಹೆಣ್ಣು ಮಕ್ಕಳನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಶಕ್ತಿ ಮತ್ತು ಗೃಹಲಕ್ಷ್ಮೀ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ.
| ಸಿದ್ದರಾಮಯ್ಯ. ಸಿಎಂ.