

ಬೆಳಗಾವಿ: ಚುನಾವಣೆ ಪೂರ್ವದಲ್ಲಿ ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 29 ಅಥವಾ 30ರಂದು ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು. ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲಾ ಕ್ರೀಡಾಂಗಣ ಹಾಗೂ ಸಿಪಿಇಡಿ ಮೈದಾನವನ್ನು ಪರಿಶೀಲಿಸಿ ಮಾತನಾಡಿದ ಸಿಎಂ 1 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳಲಿದ್ದಾರೆ. ಈ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಜಿಲ್ಲಾ ಕ್ರೀಡಾಂಗಣವನ್ನು ಅಂತಿಮಗೊಳಿಸಲಾಗಿದೆ ಎಂದು ಪರಿಶೀಲನೆ ನಂತರ ಮಾಹಿತಿ ನೀಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಅಡಿ ಇಲ್ಲಿಯವರೆಗೂ 1.33 ಕೋಟಿ ಕುಟುಂಬಗಳ ಪೈಕಿ 1.06 ಕೋಟಿ ಮಹಿಳೆಯರು ನೋಂದಣಿ ಮಾಡಿಕೊಂಡಿದ್ದಾರೆ. ನಾವು ಬಡವರು ಹಾಗೂ ಮಹಿಳೆಯರಿಗೆ ನೆರವಾಗುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನೂ ಜಾರಿಗೆ ತಂದಿದ್ದೇವೆ. ಕಾರ್ಯಕ್ರಮದ ಉದ್ಘಾಟನೆಗೆ ರಾಹುಲ್ ಗಾಂಧಿ ಆಗಮಿಸಲಿದ್ದು, ಸೋನಿಯಾ ಗಾಂಧಿ ಅವರು ಭಾಗಿಯಾಗುವುದರ ಬಗ್ಗೆ ಇನ್ನೂ ಖಚಿತವಾಗಿಲ್ಲ.
ನಾವು ವಿಭಾಗೀಯ ಸ್ಥಾನಗಳಲ್ಲಿ ಗ್ಯಾರಂಟಿ ಯೋಜನೆಗಳಿಗೆ ಚಾಲನೆ ಕೊಡುತ್ತಿದ್ದೇವೆ. ಬೆಂಗಳೂರಿನಲ್ಲಿ ಶಕ್ತಿ, ಕಲಬುಗರಿಯಲ್ಲಿ ಗೃಹಜ್ಯೋತಿ, ಬೆಳಗಾವಿಯಲ್ಲಿ ಗೃಹಲಕ್ಷ್ಮಿ, ಮೈಸೂರಿನಲ್ಲಿ ಅನ್ನಭಾಗ್ಯ ಯೋಜನೆಗೆ ಚಾಲನೆ ಕೊಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.