

ಮದ್ದೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣಾವಧಿಯಾಗಿ ಅಧಿಕಾರ ನಡೆಸಲಿದ್ದಾರೆ, ಈ ಬಗ್ಗೆ ಯಾವುದೇ ಅನುಮಾನವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ವಿಶ್ವಾಸ ವ್ಯಕ್ತಪಡಿಸಿದರು.
ಭಾನುವಾರ ಬೆಂಗಳೂರಿನಿಂದ ಮಡಿಕೇರಿ ದಸರಾಗೆ ಹೋಗುವ ಮಾರ್ಗಮಧ್ಯೆ ಕುದರಗುಂಡಿ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ನೀಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ವಿರೋಧ ಪಕ್ಷದ ನಾಯಕರು ಇಲ್ಲದ ಸಲ್ಲದ ಆರೋಪಗಳನ್ನು ಮುಖ್ಯಮಂತ್ರಿಗಳ ವಿರುದ್ಧ ಮಾಡುತ್ತಿದ್ದಾರೆ. ಇದಕ್ಕೆ ರಾಜ್ಯದ ಜನರು ಕಿವಿಗೊಡಬಾರದು ಎಂದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಮಾತಿನಂತೆ ಎಲ್ಲ ಭರವಸೆಗಳನ್ನು ಈಡೇರಿಸುವ ಜತೆಗೆ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮುಂದಾಗಿದ್ದು, ಇದರಿಂದ ಎಲ್ಲ ವರ್ಗ ಜನರಿಗೂ ಅನುಕೂಲವಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಮತ್ತು ಸಿದ್ದರಾಮಯ್ಯ ಅವರ ಮೇಲೆ ಜನರ ಆಶೀರ್ವಾದ ಇರುವುದರಿಂದ ಯಾರು ಏನೇ ಪಿತೂರಿ ಮಾಡಿದರೂ ಪಕ್ಷಕ್ಕೆ ಮತ್ತು ಸಿದ್ದರಾಮಯ್ಯ ಅವರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ಆರೋಗ್ಯ ಇಲಾಖೆಯಲ್ಲಿ ಸಾಕಾಷ್ಟು ಬದಲಾವಣೆಗಳನ್ನು ತರಲಾಗುತ್ತಿದ್ದು, ರಾಜ್ಯದಲ್ಲಿರುವ ರೋಗಿಗಳಿಗೆ ಚಿಕಿತ್ಸೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ವೈದ್ಯರ ನೇಮಕ, ಸಿಬ್ಬಂದಿ ನೇಮಕ ಸೇರಿದಂತೆ ಮತ್ತಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುವುದು ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೈಲೂರು ಚಲುವರಾಜು, ಗ್ರಾಪಂ ಸದಸ್ಯ ಕಬ್ಬಾರೆ ರಾಘವೇಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಕುದರಗುಂಡಿ ನಾಗೇಶ್, ಮುಖಂಡರಾದ ನಾಗರಾಜು, ಕೀರ್ತಿ, ನಯನಾ, ಇಂದು ಮತ್ತಿತರರು ಹಾಜರಿದ್ದರು.