

ಕೊಪ್ಪಳ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ಥಿರಗೊಳಿಸಲು ಮುಂದಾಗಿರುವ ರಾಜ್ಯಪಾಲ ತಾವರಚಂದ್ ಗೆಹ್ಲೋತ್ ಅವರನ್ನು ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿ ಪ್ರಗತಿಪರ ಸಂಟನೆಗಳ ಒಕ್ಕೂಟ ಪದಾಧಿಕಾರಿಗಳು ಬುಧವಾರ ಡಿಸಿ ನಲಿನ್ ಅತುಲ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ಆದ ಭ್ರಷ್ಟಾಚಾರ ಕುರಿತು ಸಮಗ್ರ ತನಿಖೆ ನಡೆಸಿ. ತಪ್ಪಿತಸ್ಥರಿಗೆ ಶಿೆಯಾಗಬೇಕು. ಆದರೆ, ರಾಜ್ಯಪಾಲರು ಖಾಸಗಿ ದೂರುದಾರನ ದೂರು ಆಧರಿಸಿ ಸಿಎಂಗೆ ನೋಟಿಸ್ ಜಾರಿ ಮಾಡಿದ್ದು ಸರಿಯಾದ ಕ್ರಮವಲ್ಲ. ಅಬ್ರಾಹಂ ನೀಡಿದ ದೂರಿನ ಅನ್ವಯ ಯಾವುದೇ ತನಿಖಾ ಸಂಸ್ಥೆ ಅಥವಾ ನ್ಯಾಯಾಲಯದಲ್ಲಿ ದಾವೆ ಇಲ್ಲ. ಇದು ಸರ್ಕಾರ ಅಸ್ಥಿರಗೊಳಿಸಲು ನಡೆಸಿದ ಕುತಂತ್ರ. ಸಿದ್ದರಾಮಯ್ಯ ಹಿಂದುಳಿದ ವರ್ಗದವರಿಗೆ ಸಾಮಾಜಿಕ ನ್ಯಾಯ ನೀಡಿದ್ದಾರೆ. ಅಭಿವೃದ್ಧಿ ಕಾರ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಸಿಬಿಐ, ಇಡಿ ಬಳಸಿಕೊಂಡು ವಿಪಕ್ಷ ಸರ್ಕಾರಗಳನ್ನು ಅಸ್ಥಿರಗೊಳಿಸುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಅವರನ್ನು ಜೈಲಿನಲ್ಲಿಟ್ಟಿದೆ. ಜಾರ್ಖಂಡ್ ಸಿಎಂ ಹೇಮಂತ್ ಬಿಸ್ವಾಸ್ ಅವರನ್ನು ಜೈಲಿಗೆ ಹಾಕಲಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಅಸ್ಥಿರಗೊಳಿಸಲು ಯತ್ನ ನಡೆದಿದೆ. ಮಹಾರಾಷ್ಟ್ರ ಎನ್ಸಿಪಿ ಮುಖಂಡ ಅಜಿತ್ ಪವಾರ್ ನೂರಾರು ಕೋಟಿ ರೂ. ಭ್ರಷ್ಟಾಚಾರ ನಡೆಸಿದ್ದಾನೆ. ಆತನನ್ನು ಬಿಜೆಪಿಗೆ ಸೇರಿಸಿಕೊಂಡು ಕ್ಲೀನ್ ಚಿಟ್ ನೀಡಿದೆ. ವಿಷಯ ಗಂಭಿರವಾಗಿ ಪರಿಗಣಿಸಿ ರಾಜ್ಯಪಾಲ ತಾವರ ಚಂದ್ ಗೆಹ್ಲೋತ್ ಅವರನ್ನು ವಾಪಸ್ ಕರೆಸಿಕೊಳ್ಳಬೇಕೆಂದು ಒತ್ತಾಯಿಸಿದರು.
ಪ್ರಮುಖರಾದ ಅಲ್ಲಮ ಪ್ರಭು ಬೆಟ್ಟದೂರು, ಡಿ.ಎಚ್.ಪೂಜಾರ, ಬಸವರಾಜ ಶೀಲವಂತರ, ಮಹಾಂತೇಶ ಕೊತಬಾಳ, ಕೆ.ಬಿ.ಗೋನಾಳ, ಬಸವರಾಜ ನರೇಗಲ್ ಇತರರಿದ್ದರು.