

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು.
ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಅವರು, ವಾಲ್ಮೀಕಿ ನಿಗಮದಲ್ಲಿ ನಡೆದಿರುವುದು ಬಹು ದೊಡ್ಡ ಹಗರಣ ವಾಗಿದೆ. ಸಿಎಂ ಗಮನಕ್ಕೆ ಬಾರದೇ ಇರಲು ಸಾಧ್ಯವೇ ಇಲ್ಲ. ರಾಜ್ಯ ಹಣಕಾಸು ಇಲಾಖೆ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲೇ ಇದೆ. ಅವರ ಗಮನಕ್ಕೆ ಬಾರದೇ ನೂರಾರು ಕೋಟಿ ರೂಪಾಯಿ ಹೇಗೆ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆಯಾಗಲು ಸಾಧ್ಯ? ಎಂದು ಜೋಶಿ ಪ್ರಶ್ನಿಸಿದರು.
ಸಿಎಂ ಗಮನಕ್ಕೆ ಬಾರದೆ ದೊಡ್ಡ ಮೊತ್ತದ ಹಣ ವರ್ಗಾವಣೆ ಅಸಾಧ್ಯ. ಒಂದು ವೇಳೆ ಅವರಿಗೆ ಗೊತ್ತಿಲ್ಲದ ಹಾಗೆ ಆಗಿದ್ದರೆ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅಸಮರ್ಥ. ಮುಖ್ಯಮಂತ್ರಿ ಗಮನಕ್ಕೆ ಬಂದೇ ಇಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿದ್ದರೆ ಈ ಹಗರಣದಲ್ಲಿ ಸಿದ್ದರಾಮಯ್ಯ ಅವರೂ ಪಾಲುದಾರ ಆಗಿರುತ್ತಾರೆ ಎಂದು ಹೇಳಿದರು.