

ಮಂಗಳೂರು : ಬಿಜೆಪಿಯವರು ಬಜೆಟ್ ಓದುವುದಿಲ್ಲ. ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ .ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾ ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮಾಜಿ ಶಾಸಕ ದಿ.ವಸಂತ ಬಂಗೇರ ಅವರ ಉತ್ತರಕ್ರಿಯೆಯಲ್ಲಿ ಭಾಗವಹಿಸಲು ದ.ಕ.ಜಿಲ್ಲೆಗೆ ಆಗಮಿಸಿದ ಸಂದರ್ಭ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ಸರ್ಕಾರ ಏನು ಸಾಧನೆ ಮಾಡಿದೆ ಎಂದು ರಾಜ್ಯದ ಜನತೆಗೆ ತಿಳಿಸಿದ್ದೇವೆ. ಚುನಾವಣೆ ಸಂದರ್ಭ ನೀಡಿದ ಭರವಸೆ ಈಡೇರಿಸಿದ್ದೇವೆ. ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಜನರಿಗೆ ಮಾಹಿತಿ ನೀಡಿದ್ದೇವೆ ಎಂದರು.
ಕಳೆದ ವರ್ಷ ನೀರಾವರಿಗೆ 16000 ಕೋಟಿ ರೂ.ನೀಡಲಾಗಿತ್ತು. ಈ ವರ್ಷ18 ಸಾವಿರ ಕೋಟಿ ರೂ.ವಿನಿಯೋಗವಾಗಲಿದೆ. 2024-25ರ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಸಹಿತ ಒಂದು ಲಕ್ಷದ 20 ಸಾವಿರ ಕೋಟಿ ರೂ. ಮೀಸಲಿರಿಸಿದ್ದೇವೆ. ಬಡವರಿಗೆ ಆರ್ಥಿಕವಾಗಿ ಶಕ್ತಿ ನೀಡುವುದು ಅಭಿವೃದ್ಧಿ ಅಲ್ವಾ ಎಂದು ಅವರು ಪ್ರಶ್ನಿಸಿದರು.
ದೇಶಕ್ಕೆ ರಾಜಕೀಯ ಸ್ವಾತಂತ್ರೃ ಬಂದರೆ ಸಾಲದು. ಆರ್ಥಿಕ ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರೃಕ್ಕೆ ಅರ್ಥ ಬರುತ್ತದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಹೇಳಿದ್ದರು. ಅವರ ಮಾತಿನ ಮೇಲೆ ನಾವು ಭರವಸೆ ಇರಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮುಡಾ ಅಧ್ಯಕ್ಷ ಸದಾಶಿವ ಅಮೀನ್, ಗೇರು ಅಭಿವೃದ್ದಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ , ಮಾಜಿ ಎಂಎಲ್‌ಸಿ ಐವನ್ ಡಿಸೋಜಾ, ಕಾರ್ಪೋರೇಟರ್ ನವೀನ್ ಡಿಸೋಜಾ , ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.