

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ನ.8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ 1 ಸಾವಿರ ಕೋಟಿ ರೂಗಳಿಗೆ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಸರ್ ಎಂ.ವಿ.ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ.ಸುಧಾಕರ್ ಅಧ್ಯಕ್ಷತೆಯಲ್ಲಿ ಕೈಗೊಂಡಿದ್ದ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮದ ಪೂರ್ವ ಭಾವಿ ಸಿದ್ಧತಾ ಸಭೆಯಲ್ಲಿ ಜವಾಬ್ದಾರಿಗಳ ನಿರ್ವಹಣೆಯ ಬಗ್ಗೆ ಚರ್ಚಿಸಲಾಯಿತು.
ನ.8 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾ ಪ್ರವಾಸ ಕೈಗೊಂಡಿದ್ದು ಸಾವಿರ ಕೋಟಿ ರೂ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ವಿವಿಧ ಇಲಾಖೆಯ ಸಚಿವರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
*ವಿವಿಧ ಕಾಮಗಾರಿಗಳು*
1 ಸಾವಿರ ಕೋಟಿ ಹೆಚ್ಚು ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲು ಯೋಜನೆ ರೂಪಿಸಲಾಗಿದೆ. ಶಿಡ್ಲಘಟ್ಟ ತಾಲೂಕಿನಲ್ಲಿ 200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಕಾಮಗಾರಿ, 237 ಕೋಟಿ ರೂ ವೆಚ್ಚದ ಎಚ್.ಎನ್ ವ್ಯಾಲಿ ಮತ್ತು ಕೆ.ಸಿ.ವ್ಯಾಲಿಯ ನೀರಾವರಿ ಕಾಮಗಾರಿ, ಘಂಟಲಮಲ್ಲಮ್ಮ ಮತ್ತು ರಾಮಸಮುದ್ರ ನೀರಾವರಿ ಯೋಜನೆ, ಲೋಕೋಪಯೋಗಿ ಇಲಾಖೆ ಹಾಗೂ ಜಲ್ ಜೀವನ್ ಮಿಷನ್ ಯೋಜನೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತದೆ.
*ಪ್ರಚಾರಕ್ಕೆ ಸಕಲ ಸಿದ್ಧತೆ*
ವೇದಿಕೆ ಕಾರ್ಯಕ್ರಮದ ಬಳಿ ವಿವಿಧ ಇಲಾಖೆಗಳ ಸವಲತ್ತುಗಳನ್ನು ಪ್ರದರ್ಶಿಸುವ ಜಾಗೃತಿ ಮಳಿಗೆಗಳನ್ನು ನಿರ್ಮಾಣ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿಯ ವಸ್ತು ಪ್ರದರ್ಶನ, ವೇದಿಕೆ ಸಿದ್ಧತೆ, ಅಲಂಕಾರ, ಮೂಲ ಸೌಕರ್ಯಗಳ ವ್ಯವಸ್ಥೆ, ಸಂಚಾರ ದಟ್ಟಣೆ ನಿಯಂತ್ರಣ, ಆಸನ ವ್ಯವಸ್ಥೆ, ಕುಡಿಯುವ ನೀರು, ಭದ್ರತಾ ಸೇರಿದಂತೆ ಪ್ರಮುಖ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ನಿರ್ಮಾಣವಾಗಿರುವ ಕಾಮಗಾರಿಗಳ ಶಂಕುಸ್ಥಾಪನೆಯ ಅಡಿಗಲ್ಲಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳ ಹೆಸರುಗಳ ಅಳವಡಿಕೆ, ಶಿಷ್ಟಾಚಾರ ಪಾಲನೆಯ ಬಗ್ಗೆ ಸಲಹೆ ಸೂಚನೆಗಳನ್ನು ನೀಡಲಾಯಿತು.