11ರಂದು ಮಂಡ್ಯ ನಗರಕ್ಕೆ ಸಿಎಂ ಪ್ರವಾಸ: ಜನರನ್ನು ಕರೆತರಲು ಜಿಲ್ಲಾಡಳಿತದಿಂದ ಬಸ್ ವ್ಯವಸ್ಥೆ

Dc Meeting
Published on

ಮಂಡ್ಯ: ಜಿಲ್ಲೆಯಲ್ಲಿ ಜೀವನೋಪಾಯ ವರ್ಷಾಚರಣೆಯ ಉದ್ಘಾಟನಾ ಸಮಾರಂಭವನ್ನು ಆ.11ರಂದು ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗಮಿಸುತ್ತಿರುವುದರಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಕುಡಿಯುವ ನೀರು, ಆಹಾರ, ವೇದಿಕೆ, ಶೌಚಗೃಹ ಸೇರಿದಂತೆ ಇನ್ನಿತರ ಮೂಲ ಸೌಕರ್ಯಗಳನ್ನು ಒದಗಿಸಲು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ 11,679 ಸ್ವಸಹಾಯ ಸಂಘ ಹಾಗೂ 233 ಒಕ್ಕೂಟಗಳನ್ನು ರಚಿಸಲಾಗಿದೆ. ಒಟ್ಟಾರೆಯಾಗಿ 1,62,392 ಸದಸ್ಯರಿದ್ದು, ಅವರಿಗೆ ಪ್ರೋತ್ಸಾಹ ನೀಡಿ ಆರ್ಥಿಕವಾಗಿ ಸದೃಢ ಮಾಡಲು ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗಮಾಡಿಕೊಳ್ಳಲಿ ಎಂಬ ಉದ್ದೇಶದಿಂದ ಜೀವನೋಪಾಯ ವರ್ಷ ಆಚರಿಸಲಾಗುತ್ತಿದೆ. ಉದ್ಯೋಗ ಕಲ್ಪಿಸಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಫಲಾನುಭವಿಗಳನ್ನು ಕಾರ್ಯಕ್ರಮಕ್ಕೆ ಫಲಾನುಭವಿಗಳನ್ನು ಕರೆತರಲು ಬಸ್ ವ್ಯವಸ್ಥೆ ಮಾಡಲಾಗಿದೆ. ಇದಕ್ಕಾಗಿ ತಾಪಂ ಇಒಗಳನ್ನೊಳಗೊಂಡ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಪಂ ಸಿಇಒ ಶಾಂತಾ ಎಂ.ಹುಲ್ಮನಿ, ಜಿಲ್ಲಾ ಎಸ್ಪಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಮಂಡ್ಯ ಉಪವಿಭಾಗಾಧಿಕಾರಿ ಆರ್.ಐಶ್ವರ್ಯಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net