ಕರ್ನಾಟಕ ಬಂದ್‌ಗೆ ಕಾಫಿ ನಾಡು ಸ್ತಬ್ಥ

ckm bund
ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಖಾಲಿ ಕೊಡಗಳೊಂದಿಗೆ ಉರುಳು ಸೇವೆ ಮಾಡಿದ ಪ್ರತಿಭಟನಾಕಾರರು.
Published on

ಚಿಕ್ಕಮಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಶುಕ್ರವಾರ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಯಿತು. ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ಬೆಳಗಿನಿಂದಲೇ ಬಸ್, ಟ್ಯಾಕ್ಸಿ, ಆಟೋ, ಲಾರಿಗಳ ಸಂಚಾರ ಸ್ಥಗಿತವಾಗಿತ್ತು. ವಾಹನಗಳ ಸಂಚಾರ ವಿರಳವಾಗಿತ್ತು. ಮಧ್ಯಾಹ್ನ ಒಂದೊಂದಾಗಿ ಅಂಗಡಿಗಳು ತೆರೆಯಲಾರಂಭಿಸಿದವು. ಸಂಜೆ ವೇಳೆಗೆ ಎಲ್ಲ ವಾಹನಗಳ ಸಂಚಾರ ಆರಂಭವಾಗಿದ್ದರಿಂದ ಜನಜೀವನ ಸಹಜ ಸ್ಥಿತಿಗೆ ಬಂದಿತು.

ಕನ್ನಡಪರ ಸಂಘಟನೆಗಳ ಒಕ್ಕೂಟ, ರೈತ ಸಂಘ, ದಲಿತ ಸಂಘರ್ಷ ಸಮಿತಿಗಳಿಂದ ನಗರದ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು. ಕಾಂಗ್ರೆಸ್ ಹೊರತುಪಡಿಸಿ ಎಲ್ಲ ರಾಜಕೀಯ ಪಕ್ಷಗಳೂ ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಿದವು. ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ಆಕ್ರೋಶ ವ್ಯಕ್ತಪಡಿಸಿದವು.
ನಗರದ ಎಲ್ಲೆಡೆ ಪ್ರತಿಭಟನೆ ನಡೆಸಿ ಹನುಮಂತಪ್ಪ ಸರ್ಕಲ್‌ನಲ್ಲಿ ಜಮಾಯಿಸಿದ ವಿವಿಧ ಸಂಘಟನೆಗಳ ಕಾರ್ಯಕರ್ತರು ಬೃಹತ್ ಸಭೆ ನಡೆಸಿ ಕಾವೇರಿ ವಿಷಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಪ್ರೀಂ ಕೋರ್ಟ್‌ನತ್ತ ಕೈತೋರಿಸಿ ಜಾಣಮೌನ ವಹಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಸಾಪ ಜಿಲ್ಲಾಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಕಾವೇರಿ ಬಿಕ್ಕಟ್ಟನ್ನು ಬಗೆಹರಿಸಲು ಅವಕಾಶವಿದ್ದರೂ ಸಮಸ್ಯೆಯನ್ನಾಗಿಯೇ ಉಳಿಸುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿವೆ. ಕೆಆರ್‌ಎಸ್‌ನಂತೆಯೇ ತಮಿಳುನಾಡಿನಲ್ಲಿಯೂ ಡ್ಯಾಂ ನಿರ್ಮಾಣ ಮಾಡಿ ನೀರನ್ನು ಹಿಡಿದಿಟ್ಟರೆ ಸಮಸ್ಯೆ ಪರಿಹಾರವಾಗುತ್ತದೆ. ಆದರೆ ಇದಕ್ಕೆ ಯಾವ ಸರ್ಕಾರಗಳೂ ಮುಂದೆ ಬರುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಂದ್ ಬೆಂಬಲಿಸಿದ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನಕ್ಕೆ ಮುಂದಾದರಾದರೂ ಪೊಲೀಸರು ಅವಕಾಶ ನೀಡಲಿಲ್ಲ. ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಕೃತಿ ಎಳೆದಾಡಿದರು. ಹಠ ಬಿಡದ ಪ್ರತಿಭಟನಾಕಾರರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಗೂ ಮುನ್ನ ಬಿಜೆಪಿ ಕಾರ್ಯಕರ್ತರು ನಗರದಲ್ಲಿ ಬೈಕ್ ರ‌್ಯಾಲಿ ನಡೆಸಿದರು. ನಗರದಲ್ಲಿ ತೆರೆದಿದ್ದ ಅಂಗಡಿ ಮಾಲೀಕರ ಬಳಿ ತೆರಳಿ ಕಾವೇರಿ ನೀರಿಗಾಗಿ ಒಂದು ದಿನ ಅಂಗಡಿಮುಚ್ಚಿ ಎಂದು ಕೈಮುಗಿದು ಮನವಿ ಮಾಡುತ್ತಿದ್ದರು.
ರೈತ ಸಂಘದ ಮುಖಂಡ ಉದ್ದಪ್ಪ ಮಾತನಾಡಿ, ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ರೈತರ ಬೆನ್ನುಮೂಳೆ ಮುರಿಯುವ ಕೆಲಸ ಮಾಡುತ್ತಿದೆ. ಕೆಆರ್‌ಎಸ್ ಡ್ಯಾಂ ಕಟ್ಟುವ ಮೊದಲು ಲಕ್ಷಾಂತರ ಜನ ಪ್ರಾಣ ಕಳೆದುಕೊಂಡಿದ್ದರು. ಈಗ ಮತ್ತೆ ಅದೇ ಪರಿಸ್ಥಿತಿ ಬಂದಿದೆ. ಹೊಟ್ಟೆಗೆ ಅನ್ನ, ಕುಡಿಯಲು ನೀರು ಇಲ್ಲದಿದ್ದರೆ ಜನ ಬದುಕಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರಸಭೆ ಮಾಜಿ ಅಧ್ಯಕ್ಷ ಪ್ರೇಮ್‌ಕುಮಾರ್ ಮಾತನಾಡಿ, ಕಾವೇರಿ ಜಲವಿವಾದಕ್ಕೆ ರಾಜ್ಯ ಸರ್ಕಾರವೇ ಕಾರಣ. ಕೋರ್ಟ್‌ನಿಂದ ಆದೇಶ ಬಂದಾಕ್ಷಣ ನೀರು ಬಿಟ್ಟು, ಬಳಿಕ ಎಂಪಿಗಳು ಸಹಕಾರ ನೀಡಲಿಲ್ಲ ಎನ್ನುತ್ತಿದ್ದಾರೆ. ಈ ಹಿಂದೆ ತಮಿಳುನಾಡಿಗೆ ನೀರು ಬಿಡುವ ಮೊದಲು ಜನಪ್ರತಿನಿಧಿಗಳು ಹಾಗೂ ಸಂಘಟನೆಗಳ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುತ್ತಿತ್ತು. ಆದರೆ ಈ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟು ಬಳಿಕ ಸಭೆ ಕರೆದಿದೆ ಎಂದು ಆರೋಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net