ಏಕಾಗ್ರತೆಯೊಂದಿಗೆ ಅಧ್ಯಯನ ಮಾಡಿದರೆ ಯಶಸ್ಸು ಸಾಧ್ಯ

college
Published on

ಕುಶಾಲನಗರ:

ವಿದ್ಯಾರ್ಥಿ ಜೀವನದಲ್ಲಿ ಸ್ಪಷ್ಟ ಗುರಿ, ಪರಿಶ್ರಮ, ಏಕಾಗ್ರತೆಯೊಂದಿಗೆ ಅಧ್ಯಯನ ಕೈಗೊಂಡಲ್ಲಿ ಖಂಡಿತ ಯಶಸ್ಸು ಸಾಧ್ಯ ಎಂದು ಪಿರಿಯಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ದೇವರಾಜು ಹೇಳಿದರು. ಇಲ್ಲಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ಆಯೋಜಿಸಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಜೀವನ ಸುಂದರವಾದದ್ದು, ಅದನ್ನು ಚೆನ್ನಾಗಿ ಇರಿಸಿಕೊಳ್ಳಬೇಕು. ದುಶ್ಚಟಗಳಿಂದ ಹಾಗೂ ಮೊಬೈಲ್‌ನಿಂದ ದೂರ ಇರಬೇಕು. ಪೋಷಕರು ಇಟ್ಟಿರುವ ನಿರೀಕ್ಷೆಗೆ ತಕ್ಕಂತೆ ಕಷ್ಟ ಪಟ್ಟು ಓದಿ, ನಿಮ್ಮ ಭವಿಷ್ಯ ನೀವೇ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಮುಂದಿನ ದಿನಗಳಲ್ಲಿ ಸಮಾಜದ ಆಧಾರ ಸ್ತಂಭವಾಗಬೇಕು ಎಂದರು.

ವಿವೇಕಾನಂದ ಪಿ.ಯು. ಕಾಲೇಜು ಮತ್ತು ಎಂ.ಜಿ.ಎA ಪದವಿ ಕಾಲೇಜಿನ ಗೌರವ ಪ್ರಾಂಶುಪಾಲ ಎಂ. ನಾಗೇಶ್ ಮಾತನಾಡಿ ವಿದ್ಯಾರ್ಥಿ ಜೀವನ ಅಮೂಲ್ಯವಾದುದು. ಶೈಕ್ಷಣಿಕ ಸಾಧನೆಯೊಂದಿಗೆ ಜೀವನದಲ್ಲಿ ಏನಾದರೂ ಸಾಧಿಸುವ ಛಲ ಹೊಂದಿ ವಿಧ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಕೂಡಿಗೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ದೀಪಿಕಾ ಮೂರ್ತಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಿ.ಯು.ಸಿ. ಪ್ರಮುಖವಾದ ಘಟ್ಟ. ತಮಗೆ ದೊರೆತ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ಗುರುಗಳ ಮಾರ್ಗದರ್ಶನದಂತೆ ಓದಿನ ಕಡೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಉತ್ತಮ ಫಲಿತಾಂಶ ತರಲು ಶ್ರಮಿಸಬೇಕು ಎಂದು ಹೇಳಿದರು.

ವಿವೇಕಾನಂದ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆ ಸಮೀಪಿಸುತ್ತಿರುವಾಗ ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಕಠಿಣ ಪರಿಶ್ರಮದಿಂದ ನಿರಂತರ ಅಧ್ಯಯನ ಮಾಡುವ ಮೂಲಕ ದ್ವಿತೀಯ ಪಿ.ಯು.ಸಿ ಯನ್ನು ಉನ್ನತ ದರ್ಜೆಯಲ್ಲಿ ತೇರ್ಗಡೆಯಾಗಿ ಸಂಸ್ಥೆ ಹಾಗೂ ಪೋಷಕರಿಗೂ ಕೀರ್ತಿ ತರಬೇಕು ಎಂದು ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕ್ಲಾರಾ ರೇಷ್ಮಾ, ಎಂ.ಜಿ.ಎA ಪದವಿ ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತಾ, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ಪೋಷಕರು ಇದ್ದರು.

ವಿದ್ಯಾರ್ಥಿಗಳಾದ ವಾತ್ಸಲ್ಯ, ಏಂಜೆಲಾ, ಮಾನ್ಯ, ಶೆರೀನ್ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಇದೇ ಸಂದರ್ಭ ಡಾ.ದೀಪೀಕಾ ಮೂರ್ತಿಗೆ ಸಂಸ್ಥೆ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ನಂತರ ವಿದ್ಯಾರ್ಥಿಗಳು ಪ್ರದರ್ಶಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net