

ವಿಜಯವಾಣಿ ಸುದ್ದಿಜಾಲ ತುಮಕೂರು
ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅಕ್ಟೋಬರ್ 18, 19 ಹಾಗೂ 20ರಂದು 3 ದಿನಗಳ ಕಾಲ ಜಿಲ್ಲೆಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೋಮವಾರ ಖುದ್ದು ಪೂರ್ವಭಾವಿ ಸಭೆ ನಡೆಸುವ ಮೂಲಕ ಬಾಕಿ ಇರುವ ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಸಾರ್ವಜನಿಕ ಕುಂದು&ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ, ಲೋಕಾಯುಕ್ತ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ, ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪಾತ್ರ, ಜಿಲ್ಲೆಯಲ್ಲಿ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲ ಕಾರ್ಯಕ್ರಮಗಳಲ್ಲೂ ಅಧಿಕಾರಿಗಳು ಹಾಜರಿರಬೇಕು ಎಂದರು.
ಈವರೆಗೆ ನೋಂದಣಿಯಾದ ದೂರು ಪ್ರಕರಣಗಳ ಮಾಹಿತಿ ಪಡೆದ ಅವರು, ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ ಎಲ್ಲ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು. ಲೋಕಾಯುಕ್ತ ಪ್ರಕರಣ ಅರ್ಜಿ ವಿಲೇವಾರಿಯಾಗದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಸೂಕ್ತ ಕಾರಣವನ್ನು ಉಪ ಲೋಕಾಯುಕ್ತರ ಗಮನಕ್ಕೆ ತರಬೇಕು ಎಂದು ಸೂಚಿಸಿದರು. ಬಾಕಿ ಉಳಿದಿರುವ ಲೋಕಾಯುಕ್ತ ದೂರು ಅರ್ಜಿಗಳನ್ನು ವೈಯಕ್ತಿಕ ಗಮನಹರಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ವಿಲೇವಾರಿ ಮಾಡಲು ಕಾನೂನು ಚೌಕಟ್ಟಿನಲ್ಲಿ ಅವಕಾಶವಿಲ್ಲದಿದ್ದಲ್ಲಿ ದೂರುದಾರರರಿಗೆ ಹಿಂಬರಹ ನೀಡಬೇಕು. ಹಿಂಬರಹ ನೀಡಿರುವ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಬಂಧಿಸಿದ ಇಲಾಖಾಧಿಕಾರಿಗಳು ಹೊಂದಿರಬೇಕು ಎಂದು ನಿರ್ದೇಶನ ನೀಡಿದರು. ಬಾಕಿ ಇರುವ ಲೋಕಾಯುಕ್ತ ದೂರು ಅರ್ಜಿಗಳ ಮಾಹಿತಿ ಪಡೆದ ಅವರು, ದೂರು ಪ್ರಕರಣಗಳ ವಿಚಾರಣೆ ಸಂದರ್ಭದಲ್ಲಿ ಇತ್ತೀಚೆಗಷ್ಟೇ ವರ್ಗಾವಣೆ ಹೊಂದಿ ಅಧಿಕಾರವಹಿಸಿಕೊಂಡಿದ್ದೇನೆ. ದೂರು ಅರ್ಜಿಗಳ ಬಗ್ಗೆ ಮಾಹಿತಿ ಇಲ್ಲ ಎಂದು ನೆಪ ಹೇಳದೆ ಉಪ ಲೋಕಾಯುಕ್ತರಿಗೆ ಸಮರ್ಪಕ ಉತ್ತರ ನೀಡಬೇಕು ಎಂದು ತಾಕೀತು ಮಾಡಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ 49, ಕಂದಾಯ ಇಲಾಖೆಯ 20, ನಗರಾಭಿವೃದ್ಧಿ ಕೋಶದ 12, ಆರೋಗ್ಯ ಇಲಾಖೆ 1, ನಿರ್ಮಿತಿ ಕೇಂದ್ರದ 1 ದೂರು ಅರ್ಜಿಗಳು ಬಾಕಿ ಇವೆ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಉಪ ಲೋಕಾಯುಕ್ತರೊಂದಿಗೆ ಕರ್ನಾಟಕ ಲೋಕಾಯುಕ್ತ ಅಪರ ನಿಬಂಧಕ (ವಿಚಾರಣೆಗಳು-5) ಜೆ.ವಿ.ವಿಜಯಾನಂದ, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ, ಕರ್ನಾಟಕ ಲೋಕಾಯುಕ್ತ ಉಪ ನಿಬಂಧಕ(ವಿಚಾರಣೆಗಳು-2) ಕೆ.ಎಂ. ಬಸವರಾಜಪ್ಪ ಹಾಗೂ ಉಪ ನಿಬಂಧಕ(ವಿಚಾರಣೆಗಳು-1) ಎನ್.ವಿ. ಅರವಿಂದ ಸೇರಿದಂತೆ ವಿವಿಧ ನ್ಯಾಯಾಧೀಶರು, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಸಭೆಯಲ್ಲಿ ಹಾಜರಿದ್ದರು.
ಉಪ ಲೋಕಾಯುಕ್ತರ ಕಾರ್ಯಕ್ರಮ ವಿವರ: ರಾಜ್ಯ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಅ.18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.30 ಹಾಗೂ ಮ.2.30ರಿಂದ ಸಂಜೆ 5 ಗಂಟೆಯವರೆಗೆ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕ ಅಹವಾಲು, ಕುಂದು-&ಕೊರತೆ ಸ್ವೀಕಾರ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದೆ. ಸಂಜೆ 5.30 ರಿಂದ 6.30ರ ವರೆಗೆ ಸಾರ್ವಜನಿಕ ಆಡಳಿತದಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆ ಪಾತ್ರ ಮತ್ತು ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಸಲಾಗುವುದು. ಅ.19ರಂದು ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಹಾಗೂ ಮ.2.30ರಿಂದ ಸಂಜೆ 5ರ ವರೆಗೆ ತುಮಕೂರು ಜಿಲ್ಲೆಯ ಬಾಕಿ ಇರುವ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆ ನಡೆಯಲಿದೆ.