

ವಿಜಯಪುರ: ಮಕ್ಕಳ ರಕ್ಷಣೆ ಮತ್ತು ಅವರ ಉಜ್ವಲ ಭವಿಷ್ಯಕ್ಕಾಗಿ ಸರ್ಕಾರ ವಿವಿಧ ಇಲಾಖೆಗಳ ಮೂಲಕ ಜಾರಿಗೊಳಿಸಿರುವ ಹಲವು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವ ಮೂಲಕ ಮಕ್ಕಳ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚಿಸಿದರು.
ನಗರದ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ನಡೆದ ಆರ್‌ಟಿಇ-2009 ಪೊಕ್ಸೋ-2012 ಹಾಗೂ ಬಾಲ ನ್ಯಾಯ ಕಾಯ್ದೆ 2015 ಅನುಷ್ಟಾನ ಹಾಗೂ ಮಕ್ಕಳಿಗೆ ಸಂಬಂಧಿಸಿದ ಕಾರ್ಯಕ್ರಮ-ಯೋಜನೆಗಳ ಕುರಿತ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಇರುವ ಕಾಯ್ದೆಗಳನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸಲು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ-1098 ಎದ್ದು ಕಾಣುವಂತೆ ಮಾಹಿತಿ ಫಲಕ ಅಳವಡಿಸಬೇಕು. ಗ್ರಾಮ ಪಂಚಾಯತ್ ಮಟ್ಟದಲ್ಲಿ ಮಕ್ಕಳ ಸಭೆ ನಡೆಸಿ ನಡಾವಳಿಯನ್ನು ನಿರ್ವಹಿಸಬೇಕು. ಬಾಲ್ಯವಿವಾಹ, ಅಪೌಷ್ಟಿಕತೆ, ಬಾಲಕಾರ್ಮಿಕ ಪದ್ಧತಿ ಇಂತಹ ವಿಷಯಗಳಲ್ಲಿ ಮಕ್ಕಳಿಗೆ ಮತ್ತು ಪಾಲಕರಿಗೆ ಜಾಗೃತಿ ಮೂಡಿಸಬೇಕು. ಮಹಿಳೆಯರ ಮತ್ತು ಮಕ್ಕಳ ಕಾವಲು ಸಮಿತಿ ಕಾಲಕಾಲಕ್ಕ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ನಡೆಸುವಂತೆ ಸೂಚನೆ ನೀಡಿದರು.
ಬಾಲ್ಯ ವಿವಾಹಗಳು ಜಿಲ್ಲೆಯಲ್ಲಿ ನಡೆಯದಂತೆ ತಡೆಯಲು ಗ್ರಾಮ ಮಟ್ಟದಲ್ಲಿನ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಂಬಂಧಿಸಿದ ಇಲಾಖೆಗಳು, ಸಾರ್ವಜನಿಕರ ಸಹಭಾಗಿತ್ವದಲ್ಲಿ ಇಂತಹ ಪ್ರಕರಣಗಳನ್ನು ಪತ್ತೆ ಹಚ್ಚಿ ಬಾಲ್ಯವಿವಾಹಗಳು ನಡೆಯದಂತೆ ಅಗತ್ಯ ಕ್ರಮ ವಹಿಸಬೇಕು ಎಂದರು.
ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬುದು ಪತ್ರ ವ್ಯವಹಾರದಲ್ಲಿ ಅಳವಡಿಸಿಕೊಳ್ಳುವ ಮೂಲಕ ಬಾಲ್ಯ ವಿವಾಹ ಕುರಿತು ಜಾಗೃತಿ ಮೂಡಿಸಬೇಕು. ವಿಶೇಷವಾಗಿ ವೈದ್ಯಕೀಯ ಚೀಟಿಯಲ್ಲಿ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಕುರಿತು ಬಳಸುವಂತೆ ಒತ್ತು ನೀಡಬೇಕು. ಅನಿಮಿಯಾ ಮುಕ್ತ ಜಿಲ್ಲೆಯನ್ನಾಗಿಸಲು ಈಗಾಗಲೇ ಕಾರ್ಯಕ್ರಮ ಅನುಷ್ಟಾನಗೊಳಿಸಲಾಗುತ್ತಿದ್ದು, ಈ ಕುರಿತು ವ್ಯಾಪಕವಾಗಿ ಜಾಗೃತಿ ಮೂಡಿಸಬೇಕು. ತಾಯಿ-ಮಕ್ಕಳ ಮರಣ ಪ್ರಮಾಣ, ಪ್ರಸವಪೂರ್ವ ಭ್ರೂಣ ಪತ್ತೆ ನಿಷೇಧ ಕಾಯ್ದೆಯನ್ನು ಜಿಲ್ಲೆಯಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಕಾಲಕಾಲಕ್ಕೆ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವಾರಕ್ಕಿಂತ ಹೆಚ್ಚಿನ ಅವಧಿಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಮಾಹಿತಿ ಕಲೆ ಹಾಕಿ ಈ ಕುರಿತು ಪಾಲಕರಿಗೆ ತಿಳುವಳಿಕೆ ನೀಡಿ ಮರಳಿ ಮಕ್ಕಳಿಗೆ ಶಾಲೆಗೆ ಕರೆತರಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮಕ್ಕಳ ರಕ್ಷಣಾ ನೀತಿ-2016ಯನ್ವಯ ಕ್ರಮ ವಹಿಸಿ ಮಕ್ಕಳಿಗಿರುವ ಹಕ್ಕನ್ನು ರಕ್ಷಿಸಿ ಮಕ್ಕಳ ಭವಿಷ್ಯ ರೂಪಿಸುವ ಜವಾಬ್ದಾರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಈ ನೀತಿಯಲ್ಲಿರುವ ಅಂಶಗಳನ್ನು ಪಾಲನೆಯಾಗುತ್ತಿರುವ ಕುರಿತು ಅಧಿಕಾರಿಗಳು ಗಮನ ಹರಿಸಬೇಕು. ಮಕ್ಕಳ ಕಾಯ್ದೆ ಕುರಿತು ಅರಿವು ಮೂಡಿಸಬೇಕು. ವಿವಿಧ ವಸತಿ ನಿಲಯ, ವಸತಿ ಶಾಲೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಕಾಲಕಾಲಕ್ಕೆ ಭೇಟಿ ನೀಡಿ ನಿಲಯಗಳಲ್ಲಿ ಮಕ್ಕಳಿಗೆ ಕಲ್ಪಿಸಲಾಗುತ್ತಿರುವ ಆಹಾರ, ಮೂಲ ಸೌಲಭ್ಯಗಳ ಪರಿಶೀಲನೆ ನಡೆಸಿ ಮಕ್ಕಳ ಹಕ್ಕು ರಕ್ಷಣೆಗೆ ಮುಂದಾಗಬೇಕು ಎಂದು ಅವರು ಹೇಳಿದರು.
ಜಿಲ್ಲಾಧಿಕಾರಿ ಡಾ.ಆನಂದ ಕೆ. ಮಾತನಾಡಿ, ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಕಾಲಕಾಲಕ್ಕೆ ಸಭೆಗಳನ್ನು ನಡೆಸಿ ಸೂಕ್ತ ಸೂಚನೆಗಳನ್ನು ನೀಡಲಾಗಿದೆ. ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆ ಹಾಗೂ ಕಾರ್ಮಿಕ ಇಲಾಖೆಯಿಂದ ವರ್ಷಪೂರ್ತಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆ ಕುರಿತು ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.
ಜಿಪಂ ಸಿಇಒ ರಿಷಿ ಆನಂದ ಮಾತನಾಡಿ, ಪಂಚಾಯತ್ ರಾಜ್ ಇಲಾಖೆಯು ಮಕ್ಕಳ ಹಿತದೃಷ್ಟಿಯಿಂದ ಆರೋಗ್ಯ, ಶಿಕ್ಷಣ ಭವಿಷ್ಯ ಇದನ್ನರಿತು ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಾಗುತ್ತಿದೆ. ಮಕ್ಕಳ ಓದಿಗಾಗಿ ಗ್ರಾಮ ಪಂಚಾಯತ್ ಕರ ವಸೂಲಾತಿಯನ್ನು ಬಳಸಿಕೊಂಡು ಮಕ್ಕಳಿಗಾಗಿ ಗ್ರಂಥಾಲಯ ಸೇರಿದಂತೆ ಮಕ್ಕಳಿಗೆ ಪೂರಕ ಚಟವಟಿಕೆ, ವಾತಾವರಣ ನಿರ್ಮಿಸಲಾಗಿದೆ ಎಂದು ಹೇಳಿದರು.
ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ.ಕೆ.ಟಿ. ತಿಪ್ಪೇಸ್ವಾಮಿ, ಶ್ರೀಮತಿ ಮಂಜು ವೆಂಕಟೇಶ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಡಿವೈಎಸ್‌ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಬದ್ರೂದ್ದಿನ ಸೌದಾಗರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚವಾಣ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ ಮತ್ತಿತರರಿದ್ದರು.