

ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ 35ನೇ ವಾರ್ಡ್ನ ಎಪಿಎಂಸಿ ಹಿಂಭಾಗದ ವಿವಿಧ ಲೇಔಟ್ಗಳಿಗೆ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ, ಸಾರ್ವಜನಿಕರ ಸಮಸ್ಯೆ ಆಲಿಸಿದರು.
ಸಂಬಂಧಿಸಿದ ಅಧಿಕಾರಿಗಳ ಎದುರು ಲೇಔಟ್ಗಳ ವಿವಿಧ ಸಮಸ್ಯೆಗಳನ್ನು ರ್ಚಚಿಸಿದ ಶಾಸಕ ಟೆಂಗಿನಕಾಯಿ, ಅಗತ್ಯ ಸೌಲಭ್ಯ ಒದಗಿಸಲು ಸೂಚಿಸಿದರು.
ಮಹಾನಗರ ಪಾಲಿಕೆಯಿಂದ ಮನೆ ಮನೆಯಿಂದ ಕಸ ತುಂಬುವ ವಾಹನಕ್ಕೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು.
ಶಾಸಕ ಮಹೇಶ ಟೆಂಗಿನಕಾಯಿ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಈ ಅವಧಿಯಲ್ಲಿ ಅಭಿವೃದ್ಧಿಗೆ ಅನುದಾನ ತರುವುದು ದೊಡ್ಡ ಸಾಹಸವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆದರೂ, ಸುಮ್ಮನೇ ಕೂರದೇ ಕ್ಷೇತ್ರ ವ್ಯಾಪ್ತಿಯಲ್ಲಿ ನಿರಂತರ ಅಭಿವೃದ್ಧಿ ಮಾಡಲಾಗುತ್ತಿದೆ. ಕಳೆದ ಎರಡು ವರ್ಷದಲ್ಲಿ 60 ಕಿಲೋ ಮೀಟರ್ಗೂ ಹೆಚ್ಚು ರಸ್ತೆ ಅಭಿವೃದ್ಧಿಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲಾಗುತ್ತದೆ ಎಂದು ತಿಳಿಸಿದರು.
ಎಪಿಎಂಸಿ ಹಿಂಭಾಗದ 11ಲೇಔಟ್ಗಳನ್ನು ಸಂಪೂರ್ಣ ಅಭಿವೃದ್ಧಿ ಮಾಡಲಾಗುವುದು. 10 ಲಕ್ಷ ರೂ. ವೆಚ್ಚದಲ್ಲಿ ಓಪನ್ ಜಿಮ್ ನಿರ್ವಿುಸಲಾಗುತ್ತದೆ. ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.
ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅವಳಿ ನಗರಕ್ಕೆ ಎಲ್ಇಡಿ ಲೈಟ್ಗಳನ್ನು ಅಳವಡಿಸಬೇಕಿರುವ ಟೆಂಡರ್ ಪ್ರಕ್ರಿಯೆ ಮುಗಿದಿದೆ. ಆದರೆ ರಾಜ್ಯ ಸರ್ಕಾರದ ನಿರ್ಲಕ್ಷ್ಯತನದಿಂದಾಗಿ ಲೈಟ್ ಅಳವಡಿಕೆ ವಿಳಂಬವಾಗುತ್ತಿದೆ ಎಂದು ದೂರಿದರು.
ಸೆಂಟ್ರಲ್ ಕ್ಷೇತ್ರದ ಎಲ್ಲ ಬಡಾವಣೆಗಳಲ್ಲಿ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಅಭಿವೃದ್ಧಿಗೊಳಿಸಲಾಗುವುದು ಎಂದು ತಿಳಿಸಿದರು.
ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ ಮಾತನಾಡಿದರು. ಪ್ರಮುಖರಾದ ಬಸವರಾಜ ಶಿವಪುರ, ಹೆಮನಗೌಡ ಬದ್ನೂರ, ರಮೇಶ ಮಡಿವಾಳರ, ಅಮರ ಹಬೀಬ, ಸಿದ್ದಲಿಂಗ ಮಿರ್ಜಿ, ನಂದೀಶ ಗುಂಡೂರು, ರವಿಕುಮಾರ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.