ಪ್ರತಿ ಬಾರಿಯಂತೆ ಈ ಬಾರಿಯೂ ಕೃಷ್ಣರಾಜ ಟಿಕೆಟ್‌ಗೆ ಪೈಪೋಟಿ

krishnaraja
Published on

ಸದೇಶ್ ಕಾರ್ಮಾಡ್ ಮೈಸೂರು
ಪ್ರತಿ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾಗುವ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಕಾಂಗ್ರೆಸ್ ಟಿಕೆಟ್‌ಗೆ ಈ ಬಾರಿ ಭಾರಿ ಪೈಪೋಟಿ ಪ್ರಾರಂಭವಾಗಿದ್ದು, ಟಿಕೆಟ್ ಯಾರು ಪಡೆಯುತ್ತಾರೆ ಎಂಬುದೇ ಎಲ್ಲರ ಕುತೂ ಹಲಕ್ಕೆ ಕಾರಣವಾಗಿದೆ.

ಕಳೆದ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್.ಎ. ರಾಮದಾಸ್ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ವಿರುದ್ಧ ಗೆಲುವು ಸಾಧಿಸಿದ್ದರು. ಈ ಬಾರಿಯೂ ಇವರಿಬ್ಬರು ಟಿಕೆಟ್ ಪಡೆಯುತ್ತಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆಯಾದರೂ ಅಂತಿಮ ಕ್ಷಣದಲ್ಲಿ ಉಭಯ ಪಕ್ಷಗಳು ಹೊಸ ಮುಖಕ್ಕೆ ಅವಕಾಶ ನೀಡಿದರೂ ಅಚ್ಚರಿ ಇಲ್ಲ. ಈ ಬಾರಿ ಈ ಎರಡು ಪಕ್ಷಗಳಲ್ಲಿ ಟಿಕೆಟ್‌ಗೆ ಭಾರಿ ಪೈಪೋಟಿ ನಡೆಯುತ್ತಿದೆ.

ಕಳೆದ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಗರ ಪಾಲಿಕೆ ಮಾಜಿ ಸದಸ್ಯ ಕೆ.ವಿ. ಮಲ್ಲೇಶ್ ಅವರನ್ನು ಈ ಬಾರಿಯೂ ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿ ಈಗಾಗಲೇ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದು, ಕೆ.ವಿ. ಮಲ್ಲೇಶ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಬಿಜೆಪಿಯಲ್ಲಿ ಟಿಕೆಟ್‌ಗೆ ಪೈಪೋಟಿ

ಬಿಜೆಪಿ ಪಕ್ಷದ ಸಂಘಟನೆ ವಿಚಾರದಲ್ಲಿ ಕೃಷ್ಣರಾಜ ಕ್ಷೇತ್ರ ಮುಂಚೂಣಿಯಲ್ಲಿದೆ. ಜಿಲ್ಲೆಯ ಯಾವೆಲ್ಲ ಕ್ಷೇತ್ರಗಳಲ್ಲಿ ಈ ಬಾರಿ ಬಿಜೆಪಿ ಗೆಲುವು ಸಾಧಿಸಬಹುದು ಎಂಬ ಚರ್ಚೆ ಬಂದರೆ ಮೊಟ್ಟಮೊದಲನೆಯದಾಗಿ ಕೇಳಿ ಬರುವ ಹೆಸರೇ ಕೃಷ್ಣರಾಜ ವಿಧಾನಸಭಾ ಕ್ಷೇತ್ರ. ಈ ಕಾರಣಕ್ಕೆ ಈ ಕ್ಷೇತ್ರದಲ್ಲಿ ಟಿಕೆಟ್‌ಗೆ ಬಿಜೆಪಿಯಲ್ಲಿ ಸಾಕಷ್ಟು ಸ್ಪರ್ಧೆ ಎದುರಾಗಿದೆ.

ಶಾಸಕ ಎಸ್.ಎ. ರಾಮದಾಸ್ ಕ್ಷೇತ್ರದ ಪ್ರತಿಯೊಂದು ಮನೆಯವರನ್ನು ಬಲ್ಲವರಾಗಿದ್ದಾರೆ. ಅಲ್ಲದೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಯಶಸ್ವಿಯಾಗಿ ಮಾಡಿದ್ದಾರೆ. ಕೋವಿಡ್ ಲಸಿಕೆಯನ್ನು ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ತರುವಲ್ಲಿ ಯಶಸ್ವಿಯಾಗಿದ್ದರು. ಎಲ್ಲದಕ್ಕಿಂತ ಹೆಚ್ಚಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮೆಚ್ಚುಗೆ ಸಹ ಪಡೆದುಕೊಂಡವರು. ಹೀಗಾಗಿ ಈ ಬಾರಿ ಟಿಕೆಟ್ ದೊರೆಯುವ ವಿಶ್ವಾಸವನ್ನು ಎಸ್.ಎ. ರಾಮದಾಸ್ ಹೊಂದಿದ್ದಾರೆ. 1994, 1999, 2004, 2008, 2013 ಹಾಗೂ 2018ರ ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ರಾಮದಾಸ್ ಒಟ್ಟು 4 ಬಾರಿ ಗೆಲುವು ಸಾಧಿಸಿ, ಒಂದು ಬಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಎಚ್.ವಿ. ರಾಜೀವ್ ಹಾಗೂ ಸಂಘ ಪರಿವಾರ ಹಾಗೂ ಪಕ್ಷದ ಹೈಕಮಾಂಡ್‌ನೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ ಸಹ ಬಿಜೆಪಿಯ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಇವರು ಈ ಬಾರಿ ಟಿಕೆಟ್ ಪಡೆಯಲೇ ಬೇಕೆಂದು ಇವರು ಸ್ಪರ್ಧೆಗೆ ಬಿದ್ದಿದ್ದು, ಅಂತಿಮ ಕ್ಷಣದಲ್ಲಿ ಪಕ್ಷದ ವರಿಷ್ಠರು ಯಾರ ಪರವಾಗಿ ಒಲವು ತೋರುತ್ತಾರೆ ಎಂಬ ಕುತೂಹಲ ತೀವ್ರವಾಗಿದೆ.

ಎಚ್.ವಿ. ರಾಜೀವ್ 2013ರ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ 15,573 ಮತ ಗಳಿಸಿ ಸೋಲು ಅನುಭವಿಸಿದ್ದರು. ರಾಜೀವ್ ಗೆಲುವು ಸಾಧಿಸದೆ ಇದ್ದರೂ ಬಿಜೆಪಿ ಅಭ್ಯರ್ಥಿ ಎಸ್.ಎ. ರಾಮದಾಸ್ ಸೋಲಿಗೂ ಪ್ರಮುಖ ಕಾರಣಕರ್ತ ರಾದರು. ರಾಮದಾಸ್ 2013ರ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದು 10,065 ಮತಗಳಿಂದ. ರಾಜೀವ್ ಗಳಿಸಿದ್ದು 15,573 ಮತಗಳು. ರಾಜೀವ್ ಗಳಿಸಿದ ಬಹುಪಾಲು ಮತಗಳು ಬಿಜೆಪಿ ಮತಗಳು ಎಂಬುದು ಪ್ರಮುಖ. ಮತ ವಿಭಜನೆಯ ಪರಿಣಾಮ 52,611 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಎಂ.ಕೆ. ಸೋಮಶೇಖರ್ ಗೆಲುವು ಸಾಧಿಸಿದರೆ, 46,546 ಮತಗಳನ್ನು ಪಡೆದ ಎಸ್.ಎ. ರಾಮದಾಸ್ ಸೋಲಿನ ಕಹಿ ಅನುಭವಿಸಿದ್ದರು. ಹೀಗಾಗಿ ಈ ಬಾರಿಯೂ ಟಿಕೆಟ್ ಭಾರಿ ಪೈಪೋಟಿ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಬಂಡಾಯ ಹಾಗೂ ಅತೃಪ್ತಿಗೆ ಕಾರಣವಾಗದ ರೀತಿಯಲ್ಲಿ ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡಲು ಬಿಜೆಪಿ ವರಿಷ್ಠರು ಕಸರತ್ತು ನಡೆಸುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಹಲವು ಆಕಾಂಕ್ಷಿಗಳು

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿರುವ ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಈ ಬಾರಿಯೂ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. 1999 ಮತ್ತು 2004ರ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ, 2008, 2013, 2018ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿಜೆಪಿ ಶಾಸಕ ಎಸ್.ಎ. ರಾಮದಾಸ್ ವಿರುದ್ಧ ಸ್ಪರ್ಧಿಸಿದ್ದರು. ಈ ಪೈಕಿ ಎರಡು ಬಾರಿ ಗೆಲುವು ಸಾಧಿಸಿದ್ದಾರೆ. ಸಿದ್ದರಾಮಯ್ಯ ಆಪ್ತರಾಗಿರುವ ಹಿನ್ನೆಲೆಯಲ್ಲಿ ಈ ಬಾರಿಯೂ ಟಿಕೆಟ್ ದೊರೆಯುವ ವಿಶ್ವಾಸದಲ್ಲಿ ಸೊಮಶೇಖರ್ ಇದ್ದಾರೆ.

ಇವರೊಂದಿಗೆ ನಗರ ಪಾಲಿಕೆ ಮಾಜಿ ಸದಸ್ಯ ಎಂ. ಪ್ರದೀಪ್‌ಕುಮಾರ್, ಪಕ್ಷದ ಮುಖಂಡ ಎನ್.ಎಂ.ನವೀನ್‌ಕುಮಾರ್, ಕೆಪಿಸಿಸಿ ಕಾರ್ಯದರ್ಶಿ ಭಾಸ್ಕರ್ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಎಲ್ಲರು ಟಿಕೆಟ್ ನಿರೀಕ್ಷೆಯೊಂದಿಗೆ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಈ ಪೈಕಿ ಪಕ್ಷ ಯಾರಿಗೆ ಮಣೆ ಹಾಕಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net