

ಹನೂರು: ಪಟ್ಟಣದಲ್ಲಿ ನನೆಗುದ್ದಿಗೆ ಬಿದ್ದಿರುವ ಕೆ ಶಿಪ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು 3 ತಿಂಗಳೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ತಿಳಿಸಿದರು.
ಪಟ್ಟಣಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಅಧಿಕಾರಿಗಳೊಂದಿಗೆ ತೆರಳಿ ಪ್ರಗತಿಯಲ್ಲಿರುವ ಕೆ ಶಿಪ್ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಕೊಳ್ಳೇಗಾಲದಿಂದ ಹನೂರಿನವರೆಗೆ ಕೆ ಶಿಪ್ ಯೋಜನೆಯಡಿ ಕೈಗೊಂಡಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಬಹುತೇಕ ಕಡೆಗಳಲ್ಲಿ ಪೂರ್ಣಗೊಂಡಿದೆ. ಆದರೆ ಹನೂರು ಪಟ್ಟಣದಲ್ಲಿ ಕಟ್ಟಡ ತೆರವು ಸಂಬಂಧ ಹಾಗೂ ಕೆಲ ಕಾರಣಗಳಿಂದ ಕಾಮಗಾರಿ ಪ್ರಾರಂಭಿಸಲು ಸಾಧ್ಯವಾಗಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಗಮನಕ್ಕೆ ಬಂದಿದೆ. ಈ ದಿಸೆಯಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಸ್ವಾಧೀನಪಡಿಸಿಕೊಂಡಿಸಿಕೊಂಡಿರುವ ರಸ್ತೆಬದಿಯ ಜಾಗದಲ್ಲಿರುವ ಕಟ್ಟಡ ಮಾಲೀಕರಿಗೆ ಪರಿಹಾರ ನೀಡಲಾಗಿದೆ. ಈ ದಿಸೆಯಲ್ಲಿ ಕೂಡಲೇ ಅಗತ್ಯ ಕ್ರಮ ವಹಿಸಿ ಸ್ವಾಧೀನಕ್ಕೊಳಪಟ್ಟಿರುವ ಕಟ್ಟಡಗಳನ್ನು ತಿಂಗಳೊಳಗೆ ತೆರೆವುಗೊಳಿಸಿ, 3 ತಿಂಗಳೊಳಗೆ ಕಾಮಗಾರಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದರು.
ಪಟ್ಟಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಸ್ಥಳಾಂತರದ ಗೊಂದಲದ ಬಗ್ಗೆ ಸ್ಥಳೀಯರಿಂದ ಅಭಿಪ್ರಾಯ ಪಡೆದು ಕೈಗೊಳ್ಳಬಹುದಾದ ಕಾರ್ಯದ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಹದಗೆಟ್ಟಿರುವ ಬಂಡಳ್ಳಿ ಮುಖ್ಯರಸ್ತೆಯ ಬಗ್ಗೆ ಸರ್ಕಾರಕ್ಕೆ ನೀಡಿರುವ ಪ್ರಸ್ತಾವನೆಯ ವರದಿ ಸಲ್ಲಿಸುವಂತೆ ಹಾಗೂ ಈ ಬಗ್ಗೆ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಾಂಗ್ರೆಸ್ ಕಚೇರಿಗೆ ಭೇಟಿ: ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಲಿರುವ ಹಿನ್ನ್ನೆಲೆ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹೂ ಅವರು, ಕಾನೂನು ಸುವ್ಯವಸ್ಥೆ, ಶಿಷ್ಟಾಚಾರ ಹಾಗೂ ಸಂಚಾರಿ ನಿಯಂತ್ರಣದ ಬಗ್ಗೆ ಮುಂಜಾಗ್ರತಾ ಕ್ರಮ ವಹಿಸುವಂತೆ ಡಿವೈಎಸ್ಪಿ ಸೋಮೇಗೌಡ ಅವರಿಗೆ ಸೂಚಿಸಿದರು.
ಉಪವಿಭಾಗಾಧಿಕಾರಿ ಮಹೇಶ್, ತಹಸೀಲ್ದಾರ್ ವೈ.ಕೆ.ಗುರುಪ್ರಸಾದ್, ಶಿರಸ್ತೇದಾರ್ ನಾಗೇಂದ್ರ, ಕೆ ಶಿಪ್ ಎಇಇ ರಾಜೇಶ್ ಮುನ್ಸಿ, ಪ.ಪಂ. ಮುಖ್ಯಾಧಿಕಾರಿ ಮೂರ್ತಿ, ಇನ್‌ಸ್ಪೆಕ್ಟರ್ ಶಶಿಕುಮಾರ್, ಆರ್‌ಐ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಶೇಷಣ್ಣ ಹಾಗೂ ಕೆ ಶಿಪ್ ಯೋಜನೆಯ ಇನ್ನಿತರ ಅಧಿಕಾರಿಗಳು ಇದ್ದರು.