

ಲಕ್ಷ್ಮೇಶ್ವರ: ಪಟ್ಟಣದಲ್ಲಿ ನಗರೋತ್ಥಾನ ಮತ್ತು ವಿವಿಧ ಯೋಜನೆಯಡಿ ನಡೆಯುತ್ತಿರುವ ರಸ್ತೆ, ಚರಂಡಿ ಕಾಮಗಾರಿಗಳನ್ನು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಮಂಗಳವಾರ ಪರಿಶೀಲಿಸಿದರು.
ಪುರಸಭೆ ಮುಂದಿನ ಮುಖ್ಯ ಬಜಾರ್ ರಸ್ತೆ, ಲಕ್ಷ್ಮೀ ನಗರ ಸೇರಿದಂತೆ ವಿವಿಧ ವಾರ್ಡ್‌ಗಳಲ್ಲಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ‘ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಕಳಪೆ ಕಾಮಗಾರಿ ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಅಲ್ಲದೆ, ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ತಹಸೀಲ್ದಾರ್ ಕೆ. ಆನಂದಶೀಲ, ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿ ಮಾರುತಿ ಬ್ಯಾಕೋಡ, ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ, ಬಸವರಾಜ ಗುಳೇರ ಇತರರು ಇದ್ದರು.