

ಹನೂರು: ಶ್ರೀಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಆ.21ರಂದು ಉಚಿತ ಸಾಮೂಹಿಕ ವಿವಾಹ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲವು ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಆದ್ದರಿಂದ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು ಸೂಚಿಸಿದರು.
ಮಲೆ ಮಹದೆಶ್ವರಬೆಟ್ಟದಲ್ಲಿ ಪ್ರಾಧಿಕಾರದಿಂದ ಕೈಗೊಳ್ಳಲಾಗಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಹೆಲಿಪ್ಯಾಡ್ ಸಮೀಪದಲ್ಲಿ 8.51 ಕೋಟಿ ರೂ.ವೆಚ್ಚದಲ್ಲಿ ಪ್ರಗತಿಯಲ್ಲಿರುವ ಸೋಲಾರ್ ಪವರ್ ಪ್ಲಾಂಟ್ ಕಾಮಗಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಈ ಕಾಮಗಾರಿ ಕೈಗೊಂಡು ಹಲವು ವರ್ಷಗಳೇ ಕಳೆದಿವೆ. ಆದರೆ ಈವರೆಗೂ ಪೂರ್ಣಗೊಂಡಿಲ್ಲ. ಇದೀಗ ಕಾಮಗಾರಿ ಚುರುಕು ಪಡೆದುಕೊಂಡಿದೆ. ಹಾಗಾಗಿ ಒಂದು ವಾರದೊಳಗೆ ಕಾಮಗಾರಿ ಪೂರ್ಣಗೊಳ್ಳಬೇಕು. ಜತೆಗೆ ಪ್ಲಾಂಟ್ ಸುತ್ತಲು ತಂತಿ ಬೇಲಿ ನಿರ್ಮಿಸಬೇಕು ಎಂದು ಸಂಬಂಧಪಟ್ಟವರಿಗೆ ಸೂಚಿಸಿದರು.
ಬಳಿಕ 27 ಕೋಟಿ ರೂ. ವೆಚ್ಚದಲ್ಲಿ ಕೈಗೊಂಡಿರುವ ಒಳ ಚರಂಡಿ ಘಟಕ ಸ್ಥಳಕ್ಕೆ ತೆರಳಿದ ಅವರು ಯಂತ್ರೋಕರಣಗಳನ್ನು ಅಳವಡಿಸಬೇಕು, ಕಾಮಗಾರಿಯನ್ನು ಚುರುಕುಗೊಳಿಸಬೇಕು. ಜತೆಗೆ ಸಿಸಿ ರಸ್ತೆ ನಿರ್ಮಾಣವಾಗಬೇಕು ಎಂದು ಸೂಚಿಸಿದರು.
386 ವಸತಿ ಗೃಹಗಳ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ತೆರಳಿ ಪೀಠೋಪಕರಣಗಳ ಅಳವಡಿಕೆಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ನೆಲಹಾಸಿನ ಟೈಲ್ಸ್ ಅಳವಡಿಕೆ ಪರಿಪೂರ್ಣತೆಯಿಂದ ಕೂಡಿರಬೇಕು ಎಂದು ಸಂಬಂಧಪಟ್ಟವರಿಗೆ ತಿಳಿಸಿದರು.
45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಭಕ್ತರ ಸರತಿ ಸಾಲಿನಲ್ಲಿ ಕಾಮಗಾರಿ ಪರಿಶೀಲಿಸಿ ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರಲ್ಲದೇ 88 ಲಕ್ಷ ರೂ.ವೆಚ್ಚದಲ್ಲಿನ ದಾಸೋಹ ಭವನದ ನೆಲ ಅಂತಸ್ತಿನ ಕಾಮಗಾರಿಯ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ದೀಪದಗಿರಿ ಒಡ್ಡುವಿನಲ್ಲಿ ನಿರ್ಮಿಸಿರುವ 108 ಎತ್ತರದ ಶ್ರೀ ಮಹದೇಶ್ವರಸ್ವಾಮಿ ಪ್ರತಿಮೆಯ ಒಳಾಂಗಣದ ಕಾಮಗಾರಿ, ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ ಹಾಗೂ ಪೂರ್ಣಗೊಳ್ಳಬಹುದಾದ ಇನ್ನಿತರ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಪಿಡಬ್ಲುೃಡಿ ಎಇಇ ಚಿನ್ನಣ್ಣ, ಪ್ರಾಧಿಕಾರದ ಇಂಜಿನಿಯರ್ ಸೆಲ್ವ ಗಣಪತಿ, ದಾಸೋಹ ಭವನದ ಮೇಲ್ವಿಚಾರಕ ಸ್ವಾಮಿ, ನೌಕರ ರವೀಂದ್ರ ಮತ್ತಿತರರಿದ್ದರು.